ಇಬ್ಬರು ಮಕ್ಕಳೊಂದಿಗೆ ಪತ್ನಿ ಆತ್ಮಹತ್ಯೆ ಪ್ರಕರಣ : ಪತಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ!

ಶಿವಮೊಗ್ಗ, ಮಾ. 20: ಮಹಿಳೆಯೋರ್ವರು ತನ್ನಿಬ್ಬರು ಮಕ್ಕಳೊಂದಿಗೆ ಭದ್ರಾ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪತಿಗೆ 5 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಭದ್ರಾವತಿಯ 4 ನೇ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

ಭದ್ರಾವತಿ  ಪಟ್ಟಣದ ನೆಹರು ನಗರದ ನಿವಾಸಿ ವೆಂಕಟೇಶ್ ಯಾನೆ ಬುಡ್ಡ (38) ಶಿಕ್ಷೆಗೊಳಗಾದ ಪತಿ ಎಂದು ಗುರುತಿಸಲಾಗಿದೆ. 25 ಸಾವಿರ ರೂ. ದಂಡ ವಿಧಿಸಲಾಗಿದ್ದು, ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿಯಾಗಿ 6 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಅನುಭವಿಸುವಂತೆ ನ್ಯಾಯಾಧೀಶರು ಆದೇಶಿಸಿದ್ದಾರೆ.

ಮಾ. 18 ರಂದು ನ್ಯಾಯಾಧೀಶರಾದ ಆರ್.ವೈ.ಶಶಿಧರ್ ಅವರು ಈ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ರತ್ನಮ್ಮಅವರು ವಾದ ಮಂಡಿಸಿದ್ದರು.

ಪ್ರಕರಣದ ಹಿನ್ನೆಲೆ: ಶಿಕ್ಷೆಗೊಳಗಾದ ವೆಂಕಟೇಶ್ ಯಾನೆ ಬುಡ್ಡ ನೀಡುತ್ತಿದ್ದ ಹಿಂಸೆಯಿಂದ ಬೇಸತ್ತು, 30 ವರ್ಷ ವಯೋಮಾನದ ಆತನ ಪತ್ನಿಯು 8 ಹಾಗೂ 5 ವರ್ಷದ ತನ್ನಿಬ್ಬರು ಹೆಣ್ಣು ಮಕ್ಕಳೊಂದಿಗೆ, 27-5-2020 ರಂದು ಭದ್ರಾ ಚಾನಲ್ ಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದರು.

ಈ ಸಂಬಂಧ ಮೃತೆಯ ಸಹೋದರ ಭದ್ರಾವತಿ ಹೊಸಮನೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದರ ಆಧಾರದ ಮೇಲೆ ವೆಂಕಟೇಶ್ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ, ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು.

Previous post ಹಕ್ಕುಪತ್ರ ನೀಡಲು ಆಗ್ರಹಿಸಿ ಮಾ. 20 ರಿಂದ ಅನಿರ್ದಿಷ್ಟಾವಧಿ ಧರಣಿ : ಚುನಾವಣೆ ಬಹಿಷ್ಕಾರದ ಎಚ್ಚರಿಕೆ!
Next post ಆಜಾನ್ ಕೂಗಿದ ಸ್ಥಳದಲ್ಲಿ ಗೋಮೂತ್ರ ಸಿಂಪಡಣೆ : ಪೊಲೀಸರೊಂದಿಗೆ ವಾಕ್ಸಮರ!