
ಚನ್ನಗಿರಿ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅರೆಸ್ಟ್!
ಬೆಂಗಳೂರು, ಮಾ. 27: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆ.ಎಸ್.ಡಿ.ಎಲ್.) ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ, ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಸೋಮವಾರ ರಾತ್ರಿ ಬಂಧಿಸಿದ್ದಾರೆ.
ಕಾರಿನಲ್ಲಿ ತೆರಳುತ್ತಿದ್ದ ಮಾಡಾಳು ವಿರೂಪಾಕ್ಷಪ್ಪ ಅವರನ್ನು, ತುಮಕೂರಿನ ಕ್ಯಾತ್ಸಂದ್ರ ಟೋಲ್ ಗೇಟ್ ಬಳಿ ಲೋಕಾಯುಕ್ತ ಪೊಲೀಸ್ ತಂಡ ಬಂಧಿಸಿ, ಬೆಂಗಳೂರಿಗೆ ಕರೆತಂದಿದೆ ಎಂದು ಮೂಲಗಳು ಮಾಹಿತಿ ನೀಡಿವೆ.
ಲಂಚ: ಕಳೆದ ಮಾರ್ಚ್ 2 ರಂದು ಮಾಡಾಳು ವಿರೂಪಾಕ್ಷಪ್ಪ ಪುತ್ರ, ಬಿಡಬ್ಲ್ಯೂಎಸ್‌ಎಸ್‌ಬಿ ಯ ಮುಖ್ಯ ಲೆಕ್ಕಾಧಿಕಾರಿಯಾಗಿದ್ದ ಪ್ರಶಾಂತ್ ಮಾಡಾಳ್ ಅವರನ್ನು, ಬೆಂಗಳೂರಿನ ಕಚೇರಿಯಲ್ಲಿ ತಂದೆಯ ಪರವಾಗಿ ಲಂಚ ಪಡೆಯುತ್ತಿದ್ದ ಆರೋಪದ ಮೇರೆಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದರು. ಕೋಟ್ಯಾಂತರ ರೂ. ವಶಕ್ಕೆ ಪಡೆದಿದ್ದರು.
ಪುತ್ರನ ಬಂಧನವಾದ ನಂತರ, ಪ್ರಕರಣದ ಮೊದಲ ಆರೋಪಿಯಾಗಿದ್ದ ಮಾಡಾಳು ವಿರೂಪಾಕ್ಷಪ್ಪ ತಲೆಮರೆಸಿಕೊಂಡಿದ್ದರು. ಅವರಿಗೆ ಮಾ.7 ರಂದು ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಜಾಮೀನು ದೊರಕಿದ ನಂತರ ವಿರೂಪಾಕ್ಷಪ್ಪ ಚನ್ನಗಿರಿಯಲ್ಲಿ ಬೃಹತ್ ರೋಡ್ ಶೋ ಕೂಡ ನಡೆಸಿದ್ದರು.
ರದ್ದು: ಮಾಡಾಳ್ ವಿರೂಪಾಕ್ಷ ತನಿಖೆಗೆ ಸಹಕರಿಸುತ್ತಿಲ್ಲ. ಅವರಿಗೆ ನೀಡಿರುವ ಜಾಮೀನು ರದ್ದುಗೊಳಿಸುವಂತೆ ಲೋಕಾಯುಕ್ತ ಸಂಸ್ಥೆಯು ನ್ಯಾಯಾಲಯದ ಮೊರೆ ಹೋಗಿತ್ತು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಏಕ ಸದಸ್ಯ ಪೀಠ, ಮಾಡಾಳ್ ವಿರೂಪಾಕ್ಷಪ್ಪರಿಗೆ ನೀಡಲಾಗಿದ್ದ ಮಧ್ಯಂತರ ನಿರೀಕ್ಷಣಾ ಜಾಮೀನು ವಜಾಗೊಳಿಸಿತ್ತು.
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ, ಲೋಕಾಯುಕ್ತ ಪೊಲೀಸರು ಮಾಡಾಳು ವಿರೂಪಾಕ್ಷಪ್ಪ ಬಂಧನಕ್ಕೆ ಕ್ರಮಕೈಗೊಂಡಿದ್ದರು. ಅವರಿಗಾಗಿ ಬೆಂಗಳೂರು, ಚನ್ನಗಿರಿ ಸೇರಿದಂತೆ ಹಲವೆಡೆ ಶೋಧ ನಡೆಸಿದ್ದರು.