
ವಿಧಾನಸಭೆ ಸಾರ್ವತ್ರಿಕ ಚುನಾವಣೆ : ಅಭ್ಯರ್ಥಿಗಳ ಆಯ್ಕೆಯತ್ತ ಕುತೂಹಲದ ಚಿತ್ತ..!
– ಬಿ. ರೇಣುಕೇಶ್ –
ಶಿವಮೊಗ್ಗ, ಎ. 5: ಶಿವಮೊಗ್ಗ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ, ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ಅಭ್ಯರ್ಥಿಗಳ ಆಯ್ಕೆಯು ಸದ್ಯ ಟಿ-20 ಕ್ರಿಕೆಟ್ ಮ್ಯಾಚ್ ನಷ್ಟೇ ಕುತೂಹಲ ಕೆರಳಿಸಿದೆ. ಯಾವ ಪಕ್ಷಗಳಿಂದ ಯಾರು ಕಣಕ್ಕಿಳಿಯುತ್ತಾರೆಂಬ ಚರ್ಚೆಗಳು ಸ್ಥಳೀಯ ರಾಜಕೀಯ ವಲಯದಲ್ಲಿ ಬಿರುಸಿನಿಂದ ನಡೆಯಲಾರಂಭಿಸಿದೆ.
ಇತರೆ ಪಕ್ಷಗಳಿಗೆ ಹೋಲಿಸಿದರೆ ಜೆಡಿಎಸ್ ಪಕ್ಷವು ಕಳೆದ ಸುಮಾರು ಎರಡು ತಿಂಗಳುಗಳ ಹಿಂದೆಯೇ ಶಿವಮೊಗ್ಗ ಗ್ರಾಮಾಂತರ, ಭದ್ರಾವತಿ ಹಾಗೂ ತೀರ್ಥಹಳ್ಳಿ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಉಳಿದಂತೆ ಶಿವಮೊಗ್ಗ ನಗರ, ಸಾಗರ, ಸೊರಬ ಹಾಗೂ ಶಿಕಾರಿಪುರ ಕ್ಷೇತ್ರಗಳಿಗೆ ಇನ್ನಷ್ಟೆ ಆ ಪಕ್ಷಗಳ ಅಭ್ಯರ್ಥಿಗಳು ಘೋಷಣೆಯಾಗಬೇಕಾಗಿದೆ.
ಕಾಂಗ್ರೆಸ್ ಪಕ್ಷವು ಭದ್ರಾವತಿ, ಸೊರಬ, ಸಾಗರ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಪ್ರಕಟಿಸಿದೆ. ಉಳಿದ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಣೆ ಬಾಕಿಯಿದೆ. ಎಎಪಿ ಪಕ್ಷವು ಶಿವಮೊಗ್ಗ, ಭದ್ರಾವತಿ, ಸಾಗರ ಕ್ಷೇತ್ರಗಳಿಗೆ ಹುರಿಯಾಳುಗಳನ್ನು ಅಖಾಡಕ್ಕಿಳಿಸಿದೆ. ಆದರೆ ಬಿಜೆಪಿ ಪಕ್ಷ ಇಲ್ಲಿಯವರೆಗೂ ಯಾವುದೇ ಕ್ಷೇತ್ರಕ್ಕೂ ಅಭ್ಯರ್ಥಿಗಳ ಹೆಸರು ಪ್ರಕಟಿಸಿಲ್ಲ.
ಕುತೂಹಲ: ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಬಿಜೆಪಿ-ಕಾಂಗ್ರೆಸ್-ಜೆಡಿಎಸ್ ಪಕ್ಷಗಳಿಂದ, ಯಾರು ಕಣಕ್ಕಿಳಿಯುತ್ತಾರೆಂಬುವುದು ಸದ್ಯ ಮಿಲಿಯನ್ ಡಾಲರ್ ಪ್ರಶ್ನೆಯಾಗಿ ಪರಿಣಮಿಸಿದೆ.
ಈ ಹಿಂದಿನ ಚುನಾವಣೆಗಳಲ್ಲಿ ಮೂರು ಪಕ್ಷಗಳಿಂದ ಯಾರು ಅಭ್ಯರ್ಥಿಗಳಾಗುತ್ತಾರೆ ಎಂಬುವುದು, ಚುನಾವಣೆ ಘೋಷಣೆಗೂ ಮುನ್ನವೇ ಖಚಿತವಾಗುತ್ತಿತ್ತು. ಆದರೆ ಈ ಬಾರಿ ಚುನಾವಣಾ ದಿನಾಂಕ ಘೋಷಣೆಯಾಗಿ, ನಾಮಪತ್ರ ಸಲ್ಲಿಕೆಗೆ ದಿನಗಣನೆ ಆರಂಭವಾಗಿದ್ದರೂ ಹುರಿಯಾಳುಗಳ ಸ್ಪಷ್ಟ ಚಿತ್ರಣ ಲಭ್ಯವಾಗುತ್ತಿಲ್ಲ.
ಬಿಜೆಪಿ – ಕಾಂಗ್ರೆಸ್ ನಲ್ಲಿ ಟಿಕೆಟ್ ಗೆ ಭಾರೀ ಪೈಪೋಟಿ ಕಂಡುಬರುತ್ತಿದೆ. ಪಕ್ಷದ ವರಿಷ್ಠರು ಯಾರಿಗೆ ಮಣೆ ಹಾಕುತ್ತಾರೆಂಬ ಕುತೂಹಲವಿದೆ. ಆದರೆ ಜೆಡಿಎಸ್ ಪಾಳೇಯದಲ್ಲಿ ನೀರಸ ವಾತಾವರಣ ಕಂಡುಬರುತ್ತಿದೆ. ಶಿವಮೊಗ್ಗ ನಗರ ಕ್ಷೇತ್ರದಿಂದ ಆ ಪಕ್ಷ ಅಭ್ಯರ್ಥಿ ಕಣಕ್ಕಿಳಿಸಲಿದೆಯೋ? ಇಲ್ಲವೋ? ಎಂಬ ಚರ್ಚೆಗಳು ಸ್ಥಳೀಯ ರಾಜಕೀಯ ವಲಯದಲ್ಲಿ ನಡೆಯಲಾರಂಭಿಸಿದೆ.
ಒಟ್ಟಾರೆ ಶಿವಮೊಗ್ಗ ಜಿಲ್ಲೆಯ ಬಹುತೇಕ ವಿಧಾನಸಭಾ ಕ್ಷೇತ್ರಗಳಲ್ಲಿ, ಜಿದ್ದಾಜಿದ್ದಿನ ಅಖಾಡಕ್ಕೆ ವೇದಿಕೆ ಸಿದ್ಧವಾಗುತ್ತಿದೆ. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆ, ರಾಜಕೀಯ ಕಣ ಮತ್ತಷ್ಟು ರಂಗೇರುವುದು ಬಹುತೇಕ ನಿಶ್ಚಿತವಾಗಿದೆ.