‘ಸಿದ್ದವಾಗುತ್ತಿದೆ ಭ್ರಷ್ಟರ ಪಟ್ಟಿ… ವಸೂಲಿ ದಂಧೆಕೋರರಿಗೆ ಎಚ್ಚರಿಕೆ…!’ : ಲೋಕಾಯುಕ್ತ ಬಿ.ಎಸ್.ಪಾಟೀಲ್

ಶಿವಮೊಗ್ಗ, ಜ.6:

ಗ್ರಾಮೀಣ ಪ್ರದೇಶದಲ್ಲಿ ಪ್ರತಿಯೊಬ್ಬರಿಗೂ ಉದ್ಯೋಗ ಕಲ್ಪಿಸುವ ಉದ್ಯೋಗ ಖಾತ್ರಿ ಯೋಜನೆಯ ಅನುಷ್ಟಾನ ಸರಿಯಾಗಿ ಆಗುತ್ತಿಲ್ಲ. ಸಾಕಷ್ಟು ಸಂಖ್ಯೆಯ ಪ್ರಕರಣಗಳು ಲೋಕಾಯುಕ್ತದ ಮುಂದಿವೆ. ಯುದ್ದೋಪಾಧಿಯಲ್ಲಿ ಪ್ರಕರಣಗಳ ವಿಲೇವಾರಿ ಮಾಡಲಾಗುತ್ತಿದೆ. ಉದ್ಯೋಗ ಖಾತ್ರಿ ಯೋಜನೆ ಜಾರಿಯ ಸರಿಯಾದ ದಾಖಲೆಗಳನ್ನು ನಿರ್ವಹಿಸದ ಪಿಡಿಒಗಳ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಯೋಜನೆ ಅನುಷ್ಟಾನ ಸಮರ್ಪಕವಾಗಿ ನಿರ್ವಹಿಸದಿದ್ದರೆ ಇಲಾಖೆಯ ಎಲ್ಲಾ ಅಧಿಕಾರಿಗಳನ್ನು ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದು ಲೋಕಾಯುಕ್ತ ಬಿ.ಎಸ್.ಪಾಟೀಲ್ ಅವರು ಎಚ್ಚರಿಕೆ ನೀಡಿದರು.

ಅವರು ಶುಕ್ರವಾರ ಶಿವಮೊಗ್ಗ ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ ಇಲಾಖೆಗಳ ಮುಖ್ಯಸ್ಥರ ಸಭೆಯನ್ನು ನಡೆಸಿ ಮಾತನಾಡಿದರು.

ವಸತಿ ಯೋಜನೆ ಅನುಷ್ಟಾನ: ವಿವಿಧ ವಸತಿ ಯೋಜನೆಗಳಲ್ಲಿ ಫಲಾನುಭವಿಗಳ ಆಯ್ಕೆಯಲ್ಲಿ ಅಕ್ರಮವಾಗುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಈ ದೂರುಗಳ ವಿಚಾರಣೆಯನ್ನು ಮಾಡಲಾಗುತ್ತಿದೆ. ಇದೇ ರೀತಿ ನೀರಾವರಿ, ಕೃಷಿ, ಆರೋಗ್ಯ ಕ್ಷೇತ್ರ ಸೇರಿದಂತೆ ಎಲ್ಲಾ ಇಲಾಖೆಗಳು ಜನಕಲ್ಯಾಣ ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಹೇಳಿದರು.

ಪಟ್ಟಿ ಸಿದ್ಧಪಡಿಸಲು ಸೂಚನೆ: ಲೋಕಾಯುಕ್ತ ಸಂಸ್ಥೆಯಲ್ಲಿ ಪ್ರಸ್ತುತ ಪೂರ್ಣ ಪ್ರಮಾಣದ ಅಧಿಕಾರಿ ಸಿಬ್ಬಂದಿಗಳಿದ್ದು, ನ್ಯಾಯಾಂಗ ವಿಭಾಗ, ಪೊಲೀಸ್ ವಿಭಾಗ, ಆಂತರಿಕ ಗುಪ್ತಚರ ವಿಭಾಗ, ಆಡಳಿತ ವಿಭಾಗ, ತಾಂತ್ರಿಕ ವಿಭಾಗ ಕಾರ್ಯ ನಿರ್ವಹಿಸುತ್ತಿದೆ. ಪ್ರತಿ ಜಿಲ್ಲೆಯಲ್ಲಿ ಜನಕಂಟಕರಾಗಿರುವ ಸರ್ಕಾರಿ ಅಧಿಕಾರಿ, ಸಿಬ್ಬಂದಿಗಳ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತಿದೆ. ಅದರ ಪ್ರಕಾರ ದಾಳಿಗಳನ್ನು ನಡೆಸಿ ಭ್ರಷ್ಟ ವ್ಯವಸ್ಥೆಯನ್ನು ಮಟ್ಟ ಹಾಕಲು ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇದೇ ರೀತಿ ಉತ್ತಮವಾಗಿ ಕಾರ್ಯನಿರ್ವಹಿಸುವ ಅಧಿಕಾರಿಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯವೂ ನಡೆಯಬೇಕಿದೆ ಎಂದು ಹೇಳಿದರು.

ಎಚ್ಚರಿಕೆ: ಜನರು ಭ್ರಷ್ಟಾಚಾರದ ವಿರುದ್ಧ ಹೋರಾಟದಲ್ಲಿ ಕೈಜೋಡಿಸಬೇಕು. ಇದೇ ವೇಳೆ ಕೆಲವರು ಸುಳ್ಳು ದೂರುಗಳನ್ನು ದಾಖಲಿಸಿ ವಸೂಲಿ ದಂಧೆಗೆ ಮಾಡುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು, ಅಂತಹ ಪ್ರಕರಣಗಳಲ್ಲಿ ಲೋಕಾಯುಕ್ತ ಸೂಕ್ತ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಎಚ್ಚರಿಸಿದರು.

Previous post ಬೆಂಗಳೂರಿನ ಉದ್ಯಮಿಯಿಂದ 3000 ಹಳ್ಳಿ ಮಕ್ಕಳಿಗೆ ನೋಟ್ ಬುಕ್ ವಿತರಣೆ!
Next post ಸಾಗರ ಪ್ರಕರಣ : ಮೂವರು ಆರೋಪಿಗಳು ವಶಕ್ಕೆ – ಎಸ್ಪಿ ಜಿ.ಕೆ.ಮಿಥುನ್ ಕುಮಾರ್