
ಶಿವಮೊಗ್ಗ ನಗರ ಕ್ಷೇತ್ರ : ಕೆ.ಎಸ್.ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್’ಗೆ ಬಿಜೆಪಿ ಟಿಕೆಟ್ ಸಾಧ್ಯತೆ..?
-ಬಿ. ರೇಣುಕೇಶ್-
ಶಿವಮೊಗ್ಗ, ಎ. 14: ವಿಧಾನಸಭೆ ಚುನಾವಣೆ ನಾಮಪತ್ರ ಸಲ್ಲಿಕೆಗೆ ಚಾಲನೆ ದೊರಕಿ ಎರಡು ದಿನವಾಗಿದೆ. ಆದರೆ ಇಲ್ಲಿಯವರೆಗೂ ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿಲ್ಲ. ಆದರೆ ಮೂರು ಪಕ್ಷಗಳಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ, ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿವೆ. ಇದರಿಂದ ಕಣಕ್ಕಿಳಿಯುವ ಅಭ್ಯರ್ಥಿಗಳ ಕುರಿತಂತೆ, ರಾಜಕೀಯ ವಲಯದಲ್ಲಿ ಮತ್ತಷ್ಟು ರೋಚಕತೆ ಮನೆ ಮಾಡುವಂತಾಗಿದೆ!
ಬಿಜೆಪಿ: ಕಳೆದ ಮೂರು ದಶಕಗಳಿಂದ ಕ್ಷೇತ್ರ ಪ್ರತಿನಿಧಿಸಿಕೊಂಡು ಬರುತ್ತಿದ್ದ ಪಕ್ಷದ ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪರವರು, ದಿಢೀರ್ ಆಗಿ ಚುನಾವಣಾ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ್ದರು. ಇದರ ಬೆನ್ನಲ್ಲೇ ಅವರ ಬೆಂಬಲಿಗರು ಕೆ.ಎಸ್.ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್ ಅವರಿಗೆ ಟಿಕೆಟ್ ನೀಡಬೇಕೆಂದು ಒತ್ತಡ ಹೇರಲಾರಂಭಿಸಿದ್ದಾರೆ.

ಈಗಾಗಲೇ ಪಕ್ಷದ ರಾಜ್ಯ ಮುಖಂಡರಿಗೂ ಒತ್ತಡ ಹಾಕಿದ್ದಾರೆ. ಈ ನಡುವೆ ಕೆ.ಇ.ಕಾಂತೇಶ್ ಅವರು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ. ಈ ಎಲ್ಲ ಬೆಳವಣಿಗೆಗಳ ನಡುವೇ, ಬಿ.ಎಸ್.ಯಡಿಯೂರಪ್ಪ ಪಾಳೇಯದಲ್ಲಿ ಗುರುತಿಸಿಕೊಂಡಿರುವ ಕೆಲ ನಾಯಕರು ಟಿಕೆಟ್ ಲಾಬಿ ತೀವ್ರಗೊಳಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಮತ್ತೊಂದೆಡೆ ಸಂಘಪರಿವಾರದಲ್ಲಿ ಗುರುತಿಸಿಕೊಂಡವರು ಸೇರದಂತೆ, ಪಕ್ಷದ ಯುವ ನಾಯಕರ ಹೆಸರುಗಳು ಚರ್ಚೆಯಾಗಲಾರಂಭಿಸಿದೆ.
ಶಿವಮೊಗ್ಗ ನಗರ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕುರಿತಂತೆ ರಾಜ್ಯ ನಾಯಕರು ತದ್ವಿರುದ್ದ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆನ್ನಲಾಗಿದೆ. ಕೆಲವರು ಕೆ.ಎಸ್.ಈ ಪುತ್ರನ ಪರ ವಕಾಲತ್ತು ವಹಿಸಿದ್ದರೆ, ಕೆಲವರು ಬಿ.ಎಸ್.ಯಡಿಯೂರಪ್ಪ ಪಾಳೇಯದಲ್ಲಿ ಗುರುತಿಸಿಕೊಂಡಿರುವ ಕೆಲ ಮುಖಂಡರ ಪರ ಲಾಬಿ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಕಾರಣದಿಂದ ಅಭ್ಯರ್ಥಿ ಆಯ್ಕೆ ಜವಾಬ್ದಾರಿಯನ್ನು, ಬಿಜೆಪಿ ರಾಷ್ಟ್ರೀಯ ವರಿಷ್ಠರ ವಿವೇಚನೆಗೆ ಬಿಡಲಾಗಿದೆ. ವರಿಷ್ಠರೇ ಸೂಕ್ತ ನಿರ್ಧಾರ ಕೈಗೊಂಡು ಅಭ್ಯರ್ಥಿ ಆಯ್ಕೆ ಮಾಡಲಿದ್ದಾರೆ ಎಂದು ಬಿಜೆಪಿ ಪಕ್ಷದ ಉನ್ನತ ಮೂಲಗಳು ಮಾಹಿತಿ ನೀಡುತ್ತವೆ. ಆದರೆ ಕೆ.ಇ.ಕಾಂತೇಶ್ ಅವರಿಗೆ ಟಿಕೆಟ್ ನೀಡುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಲಾಗುತ್ತಿದೆ.
ಪಕ್ಷಾಂತರ ನಾಯಕರಿಗೆ ಕಾಂಗ್ರೆಸ್ ಟಿಕೆಟ್ ಡೌಟ್..?!
*** ಶಿವಮೊಗ್ಗ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಯು ಬಹುತೇಕ ಅಂತಿಮ ಘಟಕ್ಕೆ ಬಂದಿದೆ. ಬದಲಾದ ವಿದ್ಯಮಾನಗಳ ಅನುಸಾರ, ಪ್ರಸ್ತುತ ಕಾಂಗ್ರೆಸ್ ನಿಂದ ಟಿಕೆಟ್ ಕೋರಿ ಅರ್ಜಿ ಸಲ್ಲಿಸಿರುವವರಲ್ಲಿ ಓರ್ವರಿಗೆ ಟಿಕೆಟ್ ನೀಡಲು ಕಾಂಗ್ರೆಸ್ ವರಿಷ್ಠರು ನಿರ್ಧರಿಸಿದ್ದಾರೆಂಬ ಮಾಹಿತಿಗಳು ಆ ಪಕ್ಷದ ಉನ್ನತ ಮೂಲಗಳಿಂದ ಕೇಳಿಬರಲಾರಂಭಿಸಿದೆ!

ಹಾಲಿ ಬಿಜೆಪಿ ಪಕ್ಷದ ವಿಧಾನ ಪರಿಷತ್ ಶಾಸಕ ಆಯನೂರು ಮಂಜುನಾಥ್ ಅವರು, ಕಾಂಗ್ರೆಸ್ ಅಭ್ಯರ್ಥಿಯಾಗುವ ಸಾಧ್ಯತೆಗಳಿವೆ. ಈ ಕಾರಣದಿಂದ ಟಿಕೆಟ್ ಘೋಷಣೆ ವಿಳಂಬವಾಗುತ್ತಿವೆ ಎಂಬ ಮಾತುಗಳು ಕೇಳಿಬಂದಿದ್ದವು. ಇದರ ನಡುವೆಯೇ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ಪಾಲಿಕೆ ಕಾರ್ಪೋರೇಟರ್ ಹೆಚ್.ಸಿ.ಯೋಗೇಶ್, ಪಕ್ಷದ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಅವರ ಹೆಸರುಗಳು ಟಿಕೆಟ್ ರೇಸ್ ನಲ್ಲಿ ಮುಂಚೂಣಿಯಲ್ಲಿ ಕೇಳಿಬಂದಿದ್ದವು.
ಇದೀಗ ಪಕ್ಷದಿಂದ ಟಿಕೆಟ್ ಕೋರಿ ಅರ್ಜಿ ಸಲ್ಲಿಸಿದವರಲ್ಲಿ ಓರ್ವರಿಗೆ ಅವಕಾಶ ಕಲ್ಪಿಸಬೇಕೆಂಬ ಚರ್ಚೆಗಳು ವರಿಷ್ಠರ ಹಂತದಲ್ಲಿ ನಡೆಯಲಾರಂಭಿಸಿವೆ. ಹೆಚ್.ಸಿ.ಯೋಗೇಶ್ ಅವರು ಟಿಕೆಟ್ ಗೆ ಭಾರೀ ಲಾಬಿ ನಡೆಸುತ್ತಿರುವ ಮಾಹಿತಿಗಳು ಕೇಳಿಬರಲಾರಂಭಿಸಿದೆ.
ಜೆಡಿಎಸ್ ನಿಂದ ಕಣಕ್ಕಿಳಿಯುವವರು ಯಾರು?
*** ಶಿವಮೊಗ್ಗ ನಗರ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಜೆಡಿಎಸ್ ಪಕ್ಷದಲ್ಲಿ ನೀರವ ವಾತಾವರಣ ಕಂಡುಬರುತ್ತಿದೆ. ಆದರೆ ಜೆಡಿಎಸ್ ವರಿಷ್ಠರು ಬಿಜೆಪಿ – ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಣೆಯಾದ ನಂತರ, ತನ್ನ ಪಕ್ಷದ ಅಭ್ಯರ್ಥಿ ಕಣಕ್ಕಿಳಿಸುವ ಗೇಮ್ ಪ್ಲ್ಯಾನ್ ರೂಪಿಸಿದೆ ಎಂದು ಹೇಳಲಾಗುತ್ತಿದೆ.

ಈ ಕಾರಣದಿಂದ ಕಾದು ನೋಡುವ ತಂತ್ರ ಅನುಸರಿಸುತ್ತಿದೆ. ಇದು ಸಾಕಷ್ಟು ಕುತೂಹಲ ಮೂಡಿಸಿದೆ. ಈ ನಡುವೆ ಜೆಡಿಎಸ್ ನಾಯಕ ಎಂ.ಶ್ರೀಕಾಂತ್ ಅವರ ಹೆಸರು ಕೇಳಿಬರುತ್ತಿದೆ. ಆದರೆ ಜೆಡಿಎಸ್ ನಿಂದ ಅಚ್ಚರಿ ಅಭ್ಯರ್ಥಿ ಅಖಾಡಕ್ಕಿಳಿದರೂ ಅನುಮಾನವಿಲ್ಲ ಎಂಬ ಮಾತುಗಳು ಕೇಳಿಬರುತ್ತಿದೆ.