
‘ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ’ : ಸಿದ್ದರಾಮಯ್ಯ ಹೇಳಿಕೆ
ಬೆಂಗಳೂರು, ಮೇ 18: ‘ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ’ ಎಂದು ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ.
ಗುರುವಾರ ಮಧ್ಯಾಹ್ನ ಸಿದ್ದರಾಮಯ್ಯ ತಮ್ಮ ಟ್ವಿಟರ್ ಖಾತೆಯಲ್ಲಿ ಈ ಸಂದೇಶ ಹಾಕಿದ್ದಾರೆ. ‘ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ ನೀಡಲಾಗುವುದು’ ಎಂದು ಭರವಸೆ ನೀಡಿದ್ದಾರೆ.
ಜೊತೆಗೆ, ‘ನಮ್ಮ ಎಲ್ಲ ಗ್ಯಾರೆಂಟಿಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿ ಕೆಲಸ ಮಾಡಲಿದೆ’ ಎಂದು ಟ್ವಿಟರ್ ಸಂದೇಶದಲ್ಲಿ ಸಿದ್ದರಾಮಯ್ಯ ರಾಜ್ಯದ ಜನತೆಗೆ ಭರವಸೆ ನೀಡಿದ್ದಾರೆ.
‘ನಾವು ಒಗ್ಗಟ್ಟಾಗಿದ್ದೇವೆ’ : ಡಿ.ಕೆ.ಶಿವಕುಮಾರ್ ಹೇಳಿಕೆ
ಬೆಂಗಳೂರು, ಮೇ 18: ‘ಕರ್ನಾಟಕದ ಸುಭದ್ರ ಭವಿಷ್ಯ ಮತ್ತು ಜನ ಕಲ್ಯಾಣ ನಮ್ಮ ಪ್ರಮುಖ ಆದ್ಯತೆಯಾಗಿದೆ. ಅದನ್ನು ಖಾತರಿಪಡಿಸಲು ನಾವು ಒಗ್ಗಟ್ಟಾಗಿದ್ದೆವೆ’ ಎಂದು ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ.

ಡಿಸಿಎಂ ಹುದ್ದೆಗೆ ನಿಯೋಜಿಸಲಾಗುತ್ತಿರುವ ಕುರಿತಂತೆ ಕಾಂಗ್ರೆಸ್ ಪಕ್ಷದ ಘೋಷಣೆ ಹೊರಬಿದ್ದ ನಂತರ, ಡಿ.ಕೆ.ಶಿವಕುಮಾರ್ ತಮ್ಮ ಟ್ವಿಟರ್ ಖಾತೆಯಲ್ಲಿ ಈ ವಿಷಯ ತಿಳಿಸಿದ್ದಾರೆ.
ಅಧಿಕೃತ ಘೋಷಣೆ ಮಾಡಿದ ಕೆ.ಸಿ.ವೇಣುಗೋಪಾಲ್
ನವದೆಹಲಿ, ಮೇ 18: ಕರ್ನಾಟಕದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರನ್ನು ನೇಮಕ ಮಾಡಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ ಎಂದು ಆ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಗುರುವಾರ ಸುದ್ಧಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಮುಂದಿನ ಲೋಕಸಭೆ ಚುನಾವಣೆವರೆಗೂ ಡಿ.ಕೆ.ಶಿವಕುಮಾರ್ ಅವರೇ ಪಕ್ಷದ ರಾಜ್ಯಾಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.
ಡಿ.ಕೆ.ಶಿವಕುಮಾರ್ ಅವರ ಹೊರತಾಗಿ ಬೇರೆಯವರನ್ನು ಡಿಸಿಎಂ ಆಗಿ ನಿಯೋಜನೆ ಮಾಡುವ ಯಾವುದೇ ಘೋಷಣೆಯನ್ನು ಕಾಂಗ್ರೆಸ್ ಪಕ್ಷ ಮಾಡಿಲ್ಲ. ಇದು ಡಿಸಿಎಂ ಸ್ಥಾನದ ನಿರೀಕ್ಷೆಯಲ್ಲಿದ್ದ ನಾಯಕರಲ್ಲಿ ನಿರಾಸೆ ಮೂಡಿಸಿದೆ.