
ಬಿಜೆಪಿ – ಜೆಡಿಎಸ್ ನಡುವೆ ಏರ್ಪಡಲಿದೆಯಾ ಮೈತ್ರಿ..? ವಿಪಕ್ಷ ನಾಯಕರಾಗಿ ಆಯ್ಕೆಯಾಗಲಿದ್ದಾರಾ ಹೆಚ್.ಡಿ.ಕುಮಾರಸ್ವಾಮಿ..?
ಬೆಂಗಳೂರು, ಜು. 14: ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ, ಬಿಜೆಪಿ ಹಾಗೂ ಜೆಡಿಎಸ್ ನಡುವೆ ಮೈತ್ರಿ ಮಾತುಕತೆ ನಡೆಯುತ್ತಿವೆ. ಇದು ಫಲಪ್ರದವಾದರೆ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರನ್ನೇ ವಿಧಾನಸಭೆ ವಿಪಕ್ಷ ನಾಯಕರನ್ನಾಗಿ ನೇಮಿಸಲು ಬಿಜೆಪಿ ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ. ಇದು ರಾಜ್ಯ ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲ ಕೆರಳುವಂತೆ ಮಾಡಿದೆ!
ಜು. 18 ರಂದು ದೆಹಲಿಯಲ್ಲಿ ಬಿಜೆಪಿ ನೇತೃತ್ವದಲ್ಲಿ ಎನ್.ಡಿ.ಎ ಮೈತ್ರಿಕೂಟದ ಸಭೆ ಆಯೋಜಿಸಲಾಗಿದೆ. ಈ ಸಭೆಗೆ ಜೆಡಿಎಸ್ ಪಕ್ಷ ಕೂಡ ಭಾಗವಹಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದ್ದು, ಸದರಿ ಸಭೆಯ ಬಳಿಕ ಬಿಜೆಪಿ ಪಕ್ಷವು ವಿಧಾನಸಭೆ ವಿಪಕ್ಷ ನಾಯಕ ಹಾಗೂ ಪಕ್ಷದ ರಾಜ್ಯಾಧ್ಯಕ್ಷರ ಆಯ್ಕೆ ನಡೆಸಲಿದೆ ಎನ್ನಲಾಗುತ್ತಿದೆ.
ಜು. 18 ರ ಎನ್.ಡಿ.ಎ ಸಭೆಯಲ್ಲಿ ಜೆಡಿಎಸ್ ಭಾಗಿಯಾದರೆ, ಹೆಚ್.ಡಿ.ಕುಮಾರಸ್ವಾಮಿಯವರೇ ಬಿಜೆಪಿ – ಜೆಡಿಎಸ್ ಮೈತ್ರಿಕೂಟದ ವಿಪಕ್ಷ ನಾಯಕರಾಗಿ ಆಯ್ಕೆಯಾಗುವುದು ಬಹುತೇಕ ಖಚಿತ ಎಂದೇ ಹೇಳಲಾಗುತ್ತಿದೆ.
ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಂದು 2 ತಿಂಗಳಾಗುತ್ತಿದೆ. ಅಸೆಂಬ್ಲಿಯಲ್ಲಿ 66 ಸದಸ್ಯ ಬಲ ಹೊಂದಿರುವ ಆ ಪಕ್ಷವು, ಇಲ್ಲಿಯವರೆಗೂ ವಿಪಕ್ಷ ನಾಯಕನ ಆಯ್ಕೆ ಮಾಡಿಲ್ಲ. ವಿಳಂಬ ನೀತಿ ಅನುಸರಿಸುತ್ತಿದೆ. ಇದಕ್ಕೆ ಜೆಡಿಎಸ್ ಜೊತೆಗಿನ ಮೈತ್ರಿ ಸಾಧ್ಯತೆ ಕಾರಣವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಪ್ರಸ್ತುತ ನಡೆಯುತ್ತಿರುವ ವಿಧಾನಸಭೆ ಅಧಿವೇಶನದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಅಬ್ಬರ ಜೋರಾಗಿದೆ. ಸದನದ ಒಳಗೆ ಹಾಗೂ ಹೊರಗೆ ಕಾಂಗ್ರೆಸ್ ವಿರುದ್ದ ಕಿಡಿಕಾರುತ್ತಿದ್ದಾರೆ. ಕೆಲ ಭ್ರಷ್ಟಾಚಾರ ವಿಷಯಗಳನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಯತ್ನ ನಡೆಸುತ್ತಿದ್ದಾರೆ.