
ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ : ಪಾದ್ರಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿ ಪ್ರತಿಭಟನೆ
ಶಿವಮೊಗ್ಗ, ಜು. 21: ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧಿತರಾಗಿರುವ, ಖಾಸಗಿ ಕಾಲೇಜ್ ವೊಂದರ ಪ್ರಾಂಶುಪಾಲರೂ ಆದ ಕ್ರೈಸ್ತ ಪಾದ್ರಿಯ ವಿರುದ್ದ ಕಠಿಣ ಕ್ರಮಕೈಗೊಳ್ಳಬೇಕು ಎಂದು ಬಿಜೆಪಿ ಮಹಿಳಾ ಮೋರ್ಚಾ ಸಂಘಟನೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದೆ.
ಈ ಸಂಬಂಧ ಶುಕ್ರವಾರ ಶಿವಮೊಗ್ಗ ನಗರದ ಡಿಸಿ ಕಚೇರಿ ಆವರಣದಲ್ಲಿ ಸಂಘಟನೆಯ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು. ನಂತರ ಜಿಲ್ಲಾಡಳಿತಕ್ಕೆ ಮನವಿ ಪತ್ರ ಅರ್ಪಿಸಿದರು.
ಪಾದ್ರಿಯು ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿ ದೌರ್ಜನ್ಯ ಎಸಗಿರುವುದು ಅಕ್ಷಮ್ಯ ಅಪರಾಧವಾಗಿದೆ. ಧಾರ್ಮಿಕ ಗುರುವಿನ ಈ ವರ್ತನೆ ಖಂಡನಾರ್ಹವಾದುದಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆರೋಪಿತ ಪಾದ್ರಿಯನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಯಾವುದೇ ಒತ್ತಡಗಳಿಗೆ ಮಣೆ ಹಾಕದೆ ಪೊಲೀಸರು ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಪಾದ್ರಿಗೆ ಕಠಿಣ ಶಿಕ್ಷೆಗೊಳಪಡಿಸಲು ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ಪಾದ್ರಿ ಬಂಧನ : ನ್ಯಾಯಾಂಗ ವಶಕ್ಕೆ
*** ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇರೆಗೆ, ಖಾಸಗಿ ಕಾಲೇಜ್ ವೊಂದರ ಪ್ರಾಂಶುಪಾಲರೂ ಆದ ಕ್ರೈಸ್ತ ಪಾದ್ರಿಯೋರ್ವರನ್ನು ಶಿವಮೊಗ್ಗದ ಕೋಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪಾದ್ರಿಯು ಕಾಲೇಜ್ ನಲ್ಲಿ ಅಭ್ಯಾಸ ನಡೆಸುತ್ತಿದ್ದ ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಕುರಿತಂತೆ, ಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸದರಿ ದೂರಿನ ಆಧಾರದ ಮೇಲೆ ಪೊಲೀಸರು ಪಾದ್ರಿಯನ್ನು ಬಂಧಿಸಿದ್ದರು.
ಪೋಕ್ಸೋ ಹಾಗೂ ದೌರ್ಜನ್ಯ ತಡೆ ಕಾಯ್ದೆಯಡಿ ಪಾದ್ರಿ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ವೈದ್ಯಕೀಯ ತಪಾಸಣೆಗೊಳಪಡಿಸಿದ ನಂತರ ಪಾದ್ರಿಯನ್ನು, ಪೊಲೀಸರು ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯವು 14 ದಿನಗಳ ಕಾಲ ಪಾದ್ರಿಯನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಿ ಆದೇಶ ಹೊರಡಿಸಿತ್ತು.