
ಶಿವಮೊಗ್ಗ ಜಿಲ್ಲೆಯ ಕಾಂಗ್ರೆಸ್ ಶಾಸಕರಿಗೆ ಸಿಎಂ – ಡಿಸಿಎಂ ನೀಡಿದ ಖಡಕ್ ಸೂಚನೆಯೇನು?
*ಲೋಕಸಭೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ಕುರಿತಂತೆ ಬೆಂಗಳೂರಿನಲ್ಲಿ ಮಹತ್ವದ ಸಭೆ
ವರದಿ : ಬಿ. ರೇಣುಕೇಶ್
ಬೆಂಗಳೂರು/ಶಿವಮೊಗ್ಗ, ಆ. 17: ಮುಂಬರುವ ಲೋಕಸಭೆ, ಜಿಪಂ-ತಾಪಂ, ಮಹಾನಗರ ಪಾಲಿಕೆ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಗುರುವಾರ ಬೆಂಗಳೂರಿನಲ್ಲಿ ಶಿವಮೊಗ್ಗ ಜಿಲ್ಲೆಯ ಕಾಂಗ್ರೆಸ್ ಶಾಸಕರೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ.

ಸಭೆಯಲ್ಲಿ ಸೊರಬ ಕ್ಷೇತ್ರದ ಶಾಸಕರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಭದ್ರಾವತಿ ಕ್ಷೇತ್ರದ ಶಾಸಕ ಬಿ.ಕೆ.ಸಂಗಮೇಶ್ವರ್ ಹಾಗೂ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಭಾಗವಹಿಸಿದ್ದರು. ಉಳಿದಂತೆ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಪಕ್ಷದ ಕೆಲ ಮುಖಂಡರು ಉಪಸ್ಥಿತರಿದ್ದರು.
‘ಮುಂಬರುವ ಎಲ್ಲ ಚುನಾವಣೆಗಳಲ್ಲಿ, ಶಿವಮೊಗ್ಗ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಉತ್ತಮ ಸಾಧನೆ ಮಾಡಬೇಕು. ಪಕ್ಷ ಸಂಘಟನೆ ಮಾಡುವ ನಿಟ್ಟಿನಲ್ಲಿ ಕಾರ್ಯನಿರ್ವಹಣೆ ಮಾಡಬೇಕು. ಶತಾಯಗತಾಯ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ, ಶಿವಮೊಗ್ಗ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಯ ಸಾಧಿಸಬೇಕು.

ಈ ನಿಟ್ಟಿನಲ್ಲಿ ಕಾರ್ಯನಿರ್ವಹಣೆ ಮಾಡಿ. ಹಾಗೆಯೇ ಜಿಪಂ, ತಾಪಂ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಪಕ್ಷ ಉತ್ತಮ ಸಾಧನೆ ಮಾಡಬೇಕು’ ಎಂದು ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಶಾಸಕರಿಗೆ ತಾಕೀತು ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಪಕ್ಷದ ಸಂಘಟನಗೆ ಒತ್ತು ನೀಡಬೇಕು. ಪಕ್ಷದ ಮುಖಂಡರು, ಕಾರ್ಯಕರ್ತರ ಜೊತೆ ಸಮನ್ವಯ ಸಾಧಿಸಿಕೊಂಡು ಹೋಗಬೇಕು. ಮುಂಬರುವ ಚುನಾವಣೆಗಳಿಗೆ ಈಗಿನಿಂದಲೇ ಪೂರ್ವಭಾವಿ ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದು ಸಿಎಂ – ಡಿಸಿಎಂ ಖಡಕ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಚುನಾವಣೆಗಳಲ್ಲಿನ ಸಾಧನೆಗಳ ಆಧಾರದ ಮೇಲೆ ಮುಂದಿನ ದಿನಗಳಲ್ಲಿ ಸರ್ಕಾರದ ಹಂತದಲ್ಲಿಯೂ ಸೂಕ್ತ ಸ್ಥಾನಮಾನಗಳು ದೊರಕಲಿವೆ ಎಂಬ ಸಂದೇಶವನ್ನು ಕೂಡ ಸಿಎಂ-ಡಿಸಿಎಂ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ.
ರಾಜ್ಯ ಸರ್ಕಾರ ಗ್ಯಾರೆಂಟಿ ಯೋಜನೆಗಳು ಅರ್ಹ ಎಲ್ಲ ಫಲಾನುಭವಿಗಳಿಗೆ ತಲುಪಿಸುವ ಕಾರ್ಯದತ್ತ ಚಿತ್ತ ಹರಿಸಬೇಕು. ಈ ನಿಟ್ಟಿನಲ್ಲಿ ವಿಶೇಷ ಗಮನಹರಿಸಬೇಕು. ಯಾವುದೇ ಕಾರಣಕ್ಕೂ ಗೊಂದಲಕ್ಕೆ ಆಸ್ಪದವಾಗದಂತೆ ಎಚ್ಚರವಹಿಸುವಂತೆ ಶಾಸಕರಿಗೆ ಸಲಹೆ ನೀಡಲಾಗಿದೆ.
ಇದೇ ವೇಳೆ ಜಿಲ್ಲೆಯಲ್ಲಿನ ಪಕ್ಷದ ಬಲವರ್ಧನೆ, ಸಂಘಟನೆಯ ಕುರಿತಂತೆ ಮೂವರು ಶಾಸಕರ ಅಭಿಪ್ರಾಯ, ಸಲಹೆ-ಸೂಚನೆಗಳನ್ನು ಸಿಎಂ – ಡಿಸಿಎಂ ಆಲಿಸಿದ್ದಾರೆ ಎಂದು ಹೇಳಲಾಗಿದೆ.