
ನಾಮಪತ್ರ ಸಲ್ಲಿಕೆ ವೇಳೆ ಸುಳ್ಳು ಮಾಹಿತಿ : ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹಗೊಳಿಸಿ ಹೈಕೋರ್ಟ್ ಆದೇಶ!
ಬೆಂಗಳೂರು, ಸೆ. 1: ಚುನಾವಣಾ ಪ್ರಮಾಣಪತ್ರದಲ್ಲಿ ಸುಳ್ಳು ಮಾಹಿತಿ ಸಲ್ಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಸದಸ್ಯ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಪ್ರಜ್ವಲ್ ರೇವಣ್ಣ ಅವರು ರಾಜ್ಯದಿಂದ ಲೋಕಸಭೆಗೆ ಆಯ್ಕೆಯಾಗಿದ್ದ ಜೆಡಿಎಸ್ ಪಕ್ಷದ ಏಕೈಕ ಸಂಸದರಾಗಿದ್ದಾರೆ. ಹೈಕೋರ್ಟ್ ಆದೇಶದಿಂದ ಪ್ರಜ್ವಲ್ ರೇವಣ್ಣ ಅವರು ಮುಂದಿನ 6 ವರ್ಷಗಳ ಕಾಲ ಯಾವುದೇ ಚುನಾವಣೆಗಳಿಗೆ ಸ್ಪರ್ಧಿಸಲು ಸಾಧ್ಯವಾಗದಂತಾಗಿದೆ.
ಈ ನಡುವೆ ಹೈಕೋರ್ಟ್ ಆದೇಶದ ವಿರುದ್ದ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ಪ್ರಜ್ವಲ್ ರೇವಣ್ಣ ಅವರು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದ್ದು, ಇನ್ನಷ್ಟೆ ಹೆಚ್ಚಿನ ವಿವರಗಳು ಲಭ್ಯವಾಗಬೇಕಾಗಿದೆ.
ಕಾರಣವೇನು?: 2019 ರ ಲೋಕಸಭೆ ಸಾರ್ವತ್ರಿಕ ಚುನಾವಣೆ ವೇಳೆ ಹಾಸನ ಕ್ಷೇತ್ರದಿಂದ ಸ್ಫರ್ಧಿಸಿದ್ದ ಪ್ರಜ್ವಲ್ ರೇವಣ್ಣ ಅವರು, ತಮ್ಮ ನಾಮಪತ್ರ ಸಲ್ಲಿಕೆ ವೇಳೆ ಆಸ್ತಿ ವಿವರಗಳನ್ನು ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಸಿದ್ದಾರೆಂಬ ಆರೋಪ ಕೇಳಿಬಂದಿತ್ತು. ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆಯಾಗಿತ್ತು.