
ಕರ್ನಾಟಕ ಬಂದ್ : ಪ್ರತಿಭಟನೆ ನಡೆಸುತ್ತಿದ್ದ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಪೊಲೀಸ್ ವಶಕ್ಕೆ!
ಶಿವಮೊಗ್ಗ, ಸೆ. 29: ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ವಿವಿಧ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ, ಶುಕ್ರವಾರ ಬೆಳ್ಳಂಬೆಳ್ಳಿಗ್ಗೆ ಶಿವಮೊಗ್ಗ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಎದುರು ಕನ್ನಡ ಪರ ಸಂಘಟನೆಗಳು ದಿಢೀರ್ ಪ್ರತಿಭಟನೆ ನಡೆಸಿದವು.
ಈ ವೇಳೆ ಬಸ್ ಗಳ ಸಂಚಾರಕ್ಕೆ ತಡೆಯೊಡ್ಡಲು ಮುಂದಾದ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆಯಿತು.
ಕನ್ನಡ ಕಾರ್ಮಿಕರ ರಕ್ಷಣಾ ವೇದಿಕೆ ಹಾಗೂ ಕನ್ನಡ ರಕ್ಷಣಾ ವೇದಿಕೆ ಕಾರ್ಯಕರ್ತರು ಜಂಟಿಯಾಗಿ ಬಸ್ ನಿಲ್ದಾಣ ಎದುರು ಪ್ರತಿಭಟನೆ ನಡೆಸಿದರು.
ಈ ವೇಳೆ ಕಾರ್ಯಕರ್ತರು ಸರ್ಕಾರಿ ಬಸ್ ಗಳ ಸಂಚಾರಕ್ಕೆ ತಡೆಯೊಡ್ಡಲು ಮುಂದಾದರು. ಘೋಷಣೆಗಳನ್ನು ಕೂಗಿದರು. ತಕ್ಷಣವೇ ಸ್ಥಳದಲ್ಲಿದ್ದ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದು ಕರೆದೊಯ್ದಿದರು. ನಂತರ ಬಿಡುಗಡೆಗೊಳಿಸಿದ್ದಾರೆ.
ಪ್ರತಿಭಟನೆಯಲ್ಲಿ ಕನ್ನಡ ಕಾರ್ಮಿಕರ ರಕ್ಷಣಾ ವೇದಿಕೆ ಅಧ್ಯಕ್ಷ ವಾಟಾಳ್ ಮಂಜುನಾಥ್, ಕರವೇ ಮುಖಂಡ ಕಿರಣ್ ಕುಮಾರ್ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.