ಕೃಷಿ ಪಂಪ್ ಸೆಟ್ ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ರೈತ ಸಂಘದಿಂದ ಪ್ರತಿಭಟನೆ

ಶಿವಮೊಗ್ಗ, ಅ. 19: ಅನಿಯಮಿತ ವಿದ್ಯುತ್ ಲೋಡ್ ಶೆಡ್ಡಿಂಗ್ ಖಂಡಿಸಿ ಹಾಗೂ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಸಮರ್ಪಕ ವಿದ್ಯುತ್ ಸರಬರಾಜಿಗೆ ಆಗ್ರಹಿಸಿ, ಕರ್ನಾಟಕ ರಾಜ್ಯ ರೈತ ಸಂಘದ ಸಾಗರ ತಾಲೂಕು ಘಟಕವು ಗುರುವಾರ ಶಿವಮೊಗ್ಗ ನಗರದ ಡಿಸಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿತು.

ರಾಜ್ಯದಲ್ಲಿ ಸರಿಸುಮಾರು 45 ಲಕ್ಷಕ್ಕಿಂತಲೂ ಹೆಚ್ಚು ರೈತರು ನೀರಾವರಿ ಪಂಪ್ ಸೆಟ್ ಗಳ ಮೇಲೆ ಅವಲಂಬಿತರಾಗಿದ್ದಾರೆ. ಈ ಮೂಲಕ ಕೃಷಿ ಚಟುವಟಿಕೆ ನಡೆಸುತ್ತಿದ್ದಾರೆ. ಪ್ರಸ್ತುತ ವರ್ಷ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮದಿಂದ ಕೆರೆಕಟ್ಟೆಗಳಲ್ಲಿ ನೀರಿನ ಸಂಗ್ರಹವಿಲ್ಲವಾಗಿದೆ. ಬೆಳೆ ಉಳಿಸಿಕೊಳ್ಳಲು ಪಂಪ್ ಸೆಟ್ ಗಳ ಮೂಲಕ ನೀರು ಪೂರೈಕೆ ಮಾಡುವುದು ಅನಿವಾರ್ಯವಾಗಿದೆ.

ಆದರೆ ಪಂಪ್ ಸೆಟ್ ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡುತ್ತಿಲ್ಲ. ಪ್ರಸ್ತುತ ಬಿಸಿಲ ತೀವ್ರತೆಯ ಪ್ರಮಾಣವೂ ಹೆಚ್ಚಿರುವುದರಿಂದ ಬೆಳೆ ಉಳಿಸಿಕೊಳ್ಳಲು ರೈತರು ಹರಸಾಹಸ ನಡೆಸುವಂತಾಗಿದೆ ಎಂದು ಸಂಘಟನೆ ತಿಳಿಸಿದೆ.

ರಾತ್ರಿಯ ವೇಳೆ ಬೇಕಾಬಿಟ್ಟಿಯಾಗಿ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ ಇದರಿಂದ ರೈತರಿಗೆ ಯಾವುದೇ ಅನುಕೂಲವಾಗುತ್ತಿಲ್ಲ. ತಕ್ಷಣವೇ ರಾಜ್ಯ ಸರ್ಕಾರ ಹಗಲು ವೇಳೆ ಪಂಪ್ ಸೆಟ್ ಗಳಿಗೆ 7 ಗಂಟೆಗಳ ಕಾಲ ತ್ರೀ ಫೇಸ್ ವಿದ್ಯುತ್ ಪೂರೈಕೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆ ಒತ್ತಾಯಿಸಿದೆ.

ಪ್ರತಿಭಟನೆಯಲ್ಲಿ ಸಂಘಟನೆಯ ಜಿಲ್ಲಾ ಗೌರವ ಅಧ್ಯಕ್ಷರಾದ ಯು ಪಿ ಜೋಸೆಫ್, ಅಧ್ಯಕ್ಷರಾದ ಎಂ ಬಿ ಮಂಜಪ್ಪ ಹಿರೇನಲ್ಲೂರು, ಪ್ರಧಾನ ಕಾರ್ಯದರ್ಶಿ ಕೆ ಟಿ ರಮೇಶ್ ಐಗಿನ ಬೈಲು, ಮಹಿಳಾ ಘಟಕದ ಅಧ್ಯಕ್ಷರಾದ ಜಯಲಕ್ಷ್ಮೀ, ಮುಖಂಡರಾದ ಆಲುಳ್ಳಿ ದೇವು, ದಿನೇಶ್ ಕಾನಗೋಡು, ಕನ್ನಪ್ಪ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

Previous post ಸರ್ವರ್ ಡೌನ್ : ಬಿಪಿಎಲ್ ರೇಷನ್ ಕಾರ್ಡ್ ತಿದ್ದುಪಡಿಗೆ ಮುಂದುವರಿದ ಪರದಾಟ – ಗಮನಹರಿಸುವರೆ ಆಹಾರ ಸಚಿವರು?
Next post ಸುಳ್ಳು – ದ್ವೇಷದ ಸುದ್ದಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಸಿಎಂ ಸೂಚನೆ