
ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ!
ಬೆಂಗಳೂರು, ನ. 10: ಶಿಕಾರಿಪುರ ಕ್ಷೇತ್ರದ ಶಾಸಕ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿ ಆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ.
ಕಳೆದ ಕೆಲ ತಿಂಗಳುಗಳಿಂದ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದ ನೇಮಕ ಚರ್ಚೆಯಲ್ಲಿತ್ತು. ಆದರೆ ಒಮ್ಮತದ ಅಯ್ಕೆ ಸಾಧ್ಯವಾಗಿರಲಿಲ್ಲ. ಹಲವು ಮುಖಂಡರುಗಳ ಹೆಸರು ರಾಜ್ಯಾಧ್ಯಕ್ಷ ಹುದ್ದೆಗೆ ಕೇಳಿಬಂದಿತ್ತು.
ಅಂತಿಮವಾಗಿ ಬಿಜೆಪಿ ವರಿಷ್ಠರು ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರರಿಗೆ ರಾಜ್ಯಾಧ್ಯಕ್ಷ ಪಟ್ಟ ಕಟ್ಟಿದ್ದಾರೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ, ಯಡಿಯೂರಪ್ಪರನ್ನು ನಿರ್ಲಕ್ಷ್ಯ ಮಾಡಿದ ಕಾರಣದಿಂದ ಬಿಜೆಪಿ ಪಕ್ಷ ಕಳಪೆ ಸಾಧನೆ ಮಾಡುವಂತಾಯಿತು ಎಂಬ ಚರ್ಚೆಗಳು ನಡೆದಿದ್ದವು.
ಈ ಹಿನ್ನೆಲೆಯಲ್ಲಿ ಮುಂಬರುವ ಲೋಕಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು, ಅವರ ಪುತ್ರನಿಗೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಿಯೋಜಿಸುವ ನಿರ್ಧಾರ ಬಿಜೆಪಿ ಹೈಕಮಾಂಡ್ ಕೈಗೊಂಡಿದೆ ಎಂಬ ಮಾತುಗಳು ಕೇಳಿಬಂದಿವೆ.