
ಬಿಪಿಎಲ್ ಕಾರ್ಡ್ ವಿತರಣೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಪ್ರತಿಭಟನೆ ಎಚ್ಚರಿಕೆ!
ಶಿವಮೊಗ್ಗ, ಡಿ. 9: ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ವಿತರಣೆಗೆ ತಕ್ಷಣವೇ ಕ್ರಮಕೈಗೊಳ್ಳಬೇಕು ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್ ಅವರು ಆಗ್ರಹಿಸಿದ್ದಾರೆ.
ಈ ಸಂಬಂಧ ಶನಿವಾರ ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. 2022 ರ ಫೆಬ್ರವರಿ ಅಂತ್ಯದವರೆಗೆ ಬಿಪಿಎಲ್ ಕಾರ್ಡ್ ಕೋರಿ 4,28,346 ಅರ್ಜಿಗಳು ಸಲ್ಲಿಕೆಯಾಗಿವೆ. ಆದರೆ ನಾನಾ ಕಾರಣಗಳಿಂದ ಹೊಸ ಬಿಪಿಎಲ್ ಕಾರ್ಡ್ ವಿತರಣೆ ಮಾಡುವುದನ್ನು ಸರ್ಕಾರ ಸ್ಥಗಿತಗೊಳಿಸಿದೆ ಎಂದು ತಿಳಿಸಿದರು.
ಇದರಿಂದ ಹಲವು ಅರ್ಹ ಫಲಾನುಭವಿಗಳು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸೌಲಭ್ಯಗಳಿಂದ ವಂಚಿತವಾಗುವಂತಾಗಿದೆ. ಚಿಕಿತ್ಸೆ, ಶಿಕ್ಷಣ, ವಿಧುವಾ ವೇತನ, ಮನಸ್ವಿನಿ, ವೃದ್ದಾಪ್ಯ ವೇತನ, ಗೃಹ ಲಕ್ಷ್ಮೀ ಸೌಲಭ್ಯ, ಪಡಿತರ ಧಾನ್ಯ ಪಡೆಯುವುದು ಸೇರಿದಂತೆ ನಾನಾ ಸೌಲಭ್ಯ ಪಡೆಯಲು ಅಡೆತಡೆಯಾಗಿದೆ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕಾಗಮಿಸಿ 6 ತಿಂಗಳಾಗುತ್ತಿದೆ. ಆದರೆ ಇಲ್ಲಿಯವರೆಗೂ ಹೊಸದಾಗಿ ಬಿಪಿಎಲ್ ಕಾರ್ಡ್ ವಿತರಣೆಗೆ ಯಾವುದೇ ಕ್ರಮಕೈಗೊಂಡಿಲ್ಲ. ಇದು ನಿಜಕ್ಕೂ ಖಂಡನಾರ್ಹವಾದುದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಕ್ಷಣವೇ ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ವಿತರಣೆಗೆ ಕ್ರಮಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಂದು ಸಂಘಟನೆಯವತಿಯಿಂದ ನಿರಂತರವಾಗಿ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಕ್ಕೆ ಕಲ್ಲೂರು ಮೇಘರಾಜ್ ಅವರು ಎಚ್ಚರಿಕೆ ನೀಡಿದ್ದಾರೆ.