
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು – ರೈಲ್ವೆ ನಿಲ್ದಾಣಕ್ಕೆ ಕೆಳದಿ ಶಿವಪ್ಪನಾಯಕ ಹೆಸರು ಘೋಷಣೆಗೆ ವಿಧಾನ ಪರಿಷತ್ ನಲ್ಲಿ ಶಾಸಕ ಮಂಜುನಾಥ್ ಭಂಡಾರಿ ಆಗ್ರಹ
ಬೆಳಗಾವಿ, ಡಿ. 11: ಶಿವಮೊಗ್ಗದ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರು ಹಾಗೂ ರೈಲ್ವೆ ನಿಲ್ದಾಣಕ್ಕೆ ಕೆಳದಿ ಶಿವಪ್ಪನಾಯಕ ಹೆಸರಿಡುವ ನಿರ್ಧಾರ ಕೇವಲ ಘೋಷಣೆಗೆ ಮಾತ್ರ ಸೀಮಿತವಾಗಿದೆ. ಇಲ್ಲಿಯವರೆಗೂ ಈ ಎರಡು ಘೋಷಣೆಗಳು ಅಧಿಕೃತವಾಗಿ ಕಾರ್ಯರೂಪಕ್ಕೆ ಬಂದಿಲ್ಲ ಎಂದು ವಿಧಾನ ಪರಿಷತ್ ಕಾಂಗ್ರೆಸ್ ಶಾಸಕ ಮಂಜುನಾಥ್ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸೋಮವಾರ ಬೆಳಗಾವಿಯ ಸುವರ್ಣ ವಿಧಾನಸೌಧದ ವಿಧಾನ ಪರಿಷತ್ ಕಲಾಪದ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿ ಅವರು ಮಾತನಾಡಿದರು.
ಕಳೆದ ಫೆಬ್ರವರಿ ತಿಂಗಳಲ್ಲಿ ಶಿವಮೊಗ್ಗದ ಸೋಗಾನೆ ಬಳಿ ನಿರ್ಮಿಸಿರುವ ವಿಮಾನ ನಿಲ್ದಾಣವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದರು. ಅಂದಿನ ಸಿಎಂ ಬಸವರಾಜ ಬೊಮ್ಮಾಯಿ ಅವರು ವಿಮಾನ ನಿಲ್ದಾಣಕ್ಕೆ ಬಿ.ಎಸ್.ಯಡಿಯೂರಪ್ಪ ಹೆಸರಿಡುವ ನಿರ್ಧಾರ ಪ್ರಕಟಿಸಿದ್ದರು.
ಆದರೆ ಬಿ.ಎಸ್.ಯಡಿಯೂರಪ್ಪ ಅವರು ಇದನ್ನು ತಳ್ಳಿ ಹಾಕಿ, ರಾಷ್ಟ್ರಕವಿ ಕುವೆಂಪು ಹೆಸರಿಡುವಂತೆ ಸೂಚಿಸಿದ್ದರು. ಆದರೆ ಇಂದಿಗೂ ವಿಮಾನ ನಿಲ್ದಾಣದ ಆವರಣದಲ್ಲಿರುವ ಎಲೆಕ್ಟ್ರಾನಿಕ್ ನಾಮಫಲಕ, ಅಧಿಕೃತ ವೆಬ್ ಸೈಟ್, ಟಿಕೆಟ್ ನಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಎಂದು ಮುದ್ರಿತವಾಗುತ್ತಿದೆ ಎಂದು ತಿಳಿಸಿದ್ದಾರೆ.
ಕುವೆಂಪು ಅವರ ಹೆಸರಿಡುವಂತೆ ಸಾರ್ವಜನಿಕರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಒತ್ತಾಯಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ, ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಹೆಸರು ಘೋಷಣೆಗೆ ಕ್ರಮಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳಿಗೆ ಮಂಜುನಾಥ್ ಭಂಡಾರಿ ಅವರು ಒತ್ತಾಯಿಸಿದ್ದಾರೆ.