
ಕೊರೊನಾ ರೂಪಾಂತರಿ : 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ – ಆರೋಗ್ಯ ಸಚಿವರ ಹೇಳಿಕೆ
ಕೊಡಗು, ಡಿ. 18: ಕೇರಳ ರಾಜ್ಯದಲ್ಲಿ ಕೊರೊನಾ ವೈರಸ್ ರೂಪಾಂತರಿ ಜೆಎನ್-1 ಪ್ರಕರಣಗಳಲ್ಲಿ ದಿಢೀರ್ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇಂದಿನಿಂದ 60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮಾಸ್ಕ್ (mask) ಧರಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಅವರು ತಿಳಿಸಿದ್ದಾರೆ.
ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಸದ್ಯ ರಾಜ್ಯದಲ್ಲಿ ಕೊರೊನಾ ವೈರಸ್ (corona virus) ರೂಪಾಂತರಿ ಬಗ್ಗೆ ಯಾರೂ ಸಹ ಆತಂಕಪಡಬೇಕಾದ ಸನ್ನಿವೇಶವಿಲ್ಲ ಎಂದು ಇದೇ ವೇಳೆ ಅವರು ತಿಳಿಸಿದ್ದಾರೆ.
60 ವರ್ಷ ಮೇಲ್ಪಟ್ಟವರು, ಹೃದಯ, ಕಿಡ್ನಿ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿರುವವರು, ಕೊರೊನಾ ಸೋಂಕಿನ ಲಕ್ಷಣವಿರುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.
ಉಸಿರಾಟ, ಕೊರೊನಾ ಸೋಂಕಿನ ಲಕ್ಷಣವಿರುವವರಿಗೆ ಕೊರೊನಾ ಪರೀಕ್ಷೆ ನಡೆಸುವಂತೆ ಸೂಚಿಸಲಾಗಿದೆ. ಕೋವಿಡ್ ಪರೀಕ್ಷೆ ಹೆಚ್ಚಳದ ನಂತರ ಸೋಂಕಿನ ಪ್ರಮಾಣ ತಿಳಿದುಬರಲಿದೆ ಎಂದು ಹೇಳಿದ್ದಾರೆ.
ಆದರೆ ಈಗಲೇ ಯಾವುದೇ ನಿರ್ಬಂಧಗಳನ್ನು ಹೇರುವ ಅವಶ್ಯಕತೆಯಿಲ್ಲ. ಆ ರೀತಿಯ ಯಾವುದೇ ಪರಿಸ್ಥಿತಿಯಿಲ್ಲ. ಸಹಜ ಸ್ಥಿತಿಯಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಆಸ್ಪತ್ರೆ ಹಾಗೂ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಸಿದ್ದತೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. ಗಡಿ ಜಿಲ್ಲೆಗಳಾದ ಕೊಡಗು, ಮಂಗಳೂರು, ಚಾಮರಾಜನಗರದ ಭಾಗದಲ್ಲಿ ಹೆಚ್ಚಿನ ನಿಗಾ ವಹಿಸುವಂತೆ, ಕೇರಳ (kerala) ದಿಂದ ಆಗಮಿಸುವವರ ಟೆಸ್ಟ್ ಮಾಡುವಂತೆ ಸೂಚಿಸಲಾಗಿದೆ ಎಂದರು.