CM meets PM : Rs 18177 crore Appeal for release of drought relief ಪ್ರಧಾನಿ ಭೇಟಿಯಾದ ಸಿಎಂ : 18177 ಕೋಟಿ ರೂ. ಬರ ಪರಿಹಾರ ಬಿಡುಗಡೆಗೆ ಮನವಿ

ಪ್ರಧಾನಿ ಭೇಟಿಯಾದ ಸಿಎಂ : 18,177 ಕೋಟಿ ರೂ. ಬರ ಪರಿಹಾರ ಬಿಡುಗಡೆಗೆ ಮನವಿ

ನವದೆಹಲಿ, ಡಿ. 19 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ  18,177.44 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.

ಇದರಲ್ಲಿ 4663.12 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ, 12,7577.86 ಕೋಟಿ ರೂ. ತುರ್ತು ಪರಿಹಾರ, 566.78 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363.68 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಕೋರಲಾಗಿದೆ.

ರಾಜ್ಯದಲ್ಲಿ 236 ರಲ್ಲಿ 223 ತಾಲ್ಲೂಕುಗಳು ಬರಪೀಡಿತವಾಗಿದ್ದು, ಅದರಲ್ಲಿ 196 ತಾಲ್ಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಾಗಿದೆ. ಇದರಿಂದಾಗಿ 48.19 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟವಾಗಿದ್ದು, ಇದರಿಂದ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ವಿವರಿಸಿದರು. ಎನ್‌.ಡಿ.ಆರ್‌.ಎಫ್. ನಿಂದ 4663.12 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ ಒದಗಿಸುವಂತೆ ಮನವಿ ಮಾಡಲಾಗಿದೆ. 

ರೈತರಿಗೆ ಇನ್‌ಪುಟ್‌ ಸಬ್ಸಿಡಿ ನೀಡಲು 2015-16 ರ ಕೃಷಿ ಗಣತಿಯನ್ನು ಪರಿಗಣಿಸಲಾಗುತ್ತಿದ್ದು, ಇದು 8 ವರ್ಷ ಹಳೆಯ ಮಾಹಿತಿಯಾಗಿದೆ. ಅಲ್ಲದೆ, ರಾಜ್ಯದಲ್ಲಿ ರೈತರ ದತ್ತಾಂಶವನ್ನು ಫ್ರೂಟ್ಸ್‌ ತಂತ್ರಾಂಶದಲ್ಲಿ ದಾಖಲಿಸಲಾಗಿದ್ದು, ಪಿಎಂ-ಕಿಸಾನ್‌ ಯೋಜನೆಗೆ ಇದನ್ನು ಪರಿಗಣಿಸಲಾಗುತ್ತಿದೆ. ಇದರನ್ವಯ ರಾಜ್ಯದಲ್ಲಿ 83 ಲಕ್ಷ ಜನ ಸಣ್ಣ ಮತ್ತು ಅತಿ ಸಣ್ಣ ರೈತರಿದ್ದು, ಪರಿಹಾರ ವಿತರಣೆಗೆ ಈ ದತ್ತಾಂಶವನ್ನು ಪರಿಗಣಿಸುವಂತೆ ಮನವಿ ಮಾಡಿದರು. ಜೊತೆಗೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಬರಪೀಡಿತ ತಾಲ್ಲೂಕುಗಳಲ್ಲಿ ಉದ್ಯೋಗದ ದಿನಗಳನ್ನು 100 ರಿಂದ 150 ದಿನಗಳಿಗೆ ಹೆಚ್ಚಿಸುವಂತೆ ಆಗ್ರಹಿಸಿದರು.

ಬರ ಪರಿಹಾರಕ್ಕಾಗಿ ರಾಜ್ಯದ ಮೊದಲ ಪ್ರಸ್ತಾವನೆಯನ್ನು ಕೇಂದ್ರ ಕೃಷಿ ಸಚಿವಾಲಯಕ್ಕೆ ದಿನಾಂಕ 22-09-2023 ರಂದ ಸಲ್ಲಿಸಲಾಗಿತ್ತು ಭಾರತ ಸರ್ಕಾರದ ಬರ ಅಧ್ಯಯನ ತಂಡವು ಅಕ್ಟೋಬರ್‌ ತಿಂಗಳ 4 ರಿಂದ 9ರ ನಡುವೆ ಭೇಟಿ ನೀಡಿ, ವರದಿಯನ್ನು ಸಲ್ಲಿಸಿದೆ. ಅದರ ನಂತರ ಇನ್ನೂ 21 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಆದ್ದರಿಂದ ಅಕ್ಟೋಬರ್‌ 20 ರಂದು ಕೇಂದ್ರ ಕೃಷಿ ಸಚಿವಾಲಯಕ್ಕೆ ಎನ್‌.ಡಿ.ಆರ್.ಎಫ್. ಅಡಿ 17,901.73 ಕೋಟಿ ರೂ. ಪರಿಹಾರ ಒದಗಿಸುವಂತೆ ಪ್ರಸ್ತಾವನೆ ಸಲ್ಲಿಸಲಾಯಿತು.

ಇದರಲ್ಲಿ ತುರ್ತು ಪರಿಹಾರದ12,577.86 ಕೋಟಿ ರೂ. ಮೊತ್ತವೂ ಸೇರಿದೆ. ನವೆಂಬರ್‌ 4 ರಂದು ಹೆಚ್ಚುವರಿಯಾಗಿ 7 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಈ ಹಿನ್ನೆಲೆಯಲ್ಲಿ ಸಲ್ಲಿಸಿದ ಪೂರಕ ಮನವಿಯೊಂದಿಗೆ ಕೇಂದ್ರದಿಂದ 18,177 ಕೋಟಿ ರೂ. ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಮೊದಲ ಮನವಿ ಸಲ್ಲಿಸಿ ಈಗಾಗಲೇ ಮೂರು ತಿಂಗಳು ಕಳೆದಿದ್ದು, ರೈತರು ಅತ್ಯಂತ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಬೆಳೆ ವಿಫಲವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಇನ್‌ಪುಟ್‌ ಸಬ್ಸಿಡಿ ನೀಡುವುದು ಅತ್ಯಗತ್ಯವಾಗಿದೆ ಎಂದು ಮುಖ್ಯಮಂತ್ರಿಗಳು ಪ್ರಧಾನ ಮಂತ್ರಿಗಳಿಗೆ ಮನವರಿಕೆ ಮಾಡಿಕೊಟ್ಟ ಮುಖ್ಯಮಂತ್ರಿಗಳು ರೈತರ ಹಿತರಕ್ಷಣೆಯ ದೃಷ್ಟಿಯಿಂದ ಪರಿಹಾರ ಬಿಡುಗಡೆ ಮಾಡುವಂತೆ ಕೋರಿದರು.

The state government has announced new guidelines to prevent corona infection ಕೊರೊನಾ ಸೋಂಕು ತಡೆಗೆ ಹೊಸ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರ್ಕಾರ Previous post ಕೊರೊನಾ ಸೋಂಕು ತಡೆಗೆ ಹೊಸ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರ್ಕಾರ
Early morning crime of chain thieves in Shimoga: Gold chain stolen from two sides ಶಿವಮೊಗ್ಗದಲ್ಲಿ ಬೆಳ್ಳಂಬೆಳಿಗ್ಗೆ ಸರಗಳ್ಳರ ಕೈಚಳಕ : ಎರಡು ಕಡೆ ಮಹಿಳೆಯರ ಚಿನ್ನದ ಸರ Next post ಶಿವಮೊಗ್ಗದಲ್ಲಿ ಬೆಳ್ಳಂಬೆಳಿಗ್ಗೆ ಸರಗಳ್ಳರ ಕೈಚಳಕ : ಎರಡು ಕಡೆ ಮಹಿಳೆಯರ ಚಿನ್ನದ ಸರ ಅಪಹರಣ!