Former CM B S Yeddyurappa congratulated C M Siddaramaiah! ಸಿಎಂ ಸಿದ್ದರಾಮಯ್ಯಗೆ ಅಭಿನಂಧಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ!

ಸಿಎಂ ಸಿದ್ದರಾಮಯ್ಯಗೆ ಅಭಿನಂಧಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ!

ತುಮಕೂರು (ಸಿದ್ದಗಂಗಾ ಮಠ) ಜ. 21: ಶರಣ ಶ್ರೇಷ್ಠ ಬಸವಣ್ಣ ನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದಕ್ಕಾಗಿ ಅಪಾರ ಸಂತಸ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಬೃಹತ್ ವೇದಿಕೆಯಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಭಿನಂದಿಸಿ, ಅಭಿನಂದನಾ ನುಡಿಗಳನ್ನು ಆಡಿದರು. 

ಡಾ.ಶ್ರೀ ಶ್ರೀ ಶಿವಕುಮಾರ ಶಿವಮೂರ್ತಿಶಿವಯೋಗಿಗಳವರ 5 ನೇ ವರ್ಷದ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದ ವೇದಿಕೆಯಲ್ಲಿ ಮೊದಲಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸಿದರು.

ಸಿಎಂ ಭಾಷಣ : ಶಿವಕುಮಾರ ಮಹಾಶಿವಯೋಗಿ ಶ್ರೀಗಳು ಬಸವಾದಿ ಶರಣರ ಆಶಯಗಳನ್ನು ಆಚರಿಸಲು ಬದುಕನ್ನು ಮುಡಿಪಾಗಿಟ್ಟು ನುಡಿದಂತೆ ನಡೆದ ಮಹಾಯೋಗಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. 

ಶಿವಕುಮಾರಮಹಾಶಿವಯೋಗಿಗಳಿಗೆ ಭಾರತ ರತ್ನ ನೀಡಬೇಕು. ಇದಕ್ಕಾಗಿ ಕೇಂದ್ರಕ್ಕೆ ಪತ್ರ ಬರೆಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು. 

12 ನೇ ಶತಮಾನದಲ್ಲೇ ಬಸವಾದಿ ಶರಣರು ಜಾತಿ ರಹಿತ, ವರ್ಗ ರಹಿತ ಸಮಾನತಾ ಸಮಾಜ ನಿರ್ಮಾಣಕ್ಕಾಗಿ ಕ್ರಾಂತಿಯನ್ನೇ ಮಾಡಿದ್ದರು. ಮನುಷ್ಯ ಕುಲ ಇರುವವರೆಗೂ ಶಾಶ್ವತ ಆಗಿ ಉಳಿಯುವ ಸಂದೇಶ ಮತ್ತು ಮೌಲ್ಯಗಳನ್ನು ಬಿಟ್ಟು ಹೋಗಿದ್ದಾರೆ. ಈ ಮೌಲ್ಯಗಳನ್ನು ಪಾಲಿಸುವುದೇ ಬಸವಾದಿ ಶರಣರಿಗೆ ಸಲ್ಲಿಸುವ ಗೌರವ ಎಂದರು.‌

ಭಾರತ ಸಂವಿಧಾನದ ಆಶಯ ಮತ್ತು ಬಸವಾದಿ ಶರಣರ ಹೋರಾಟದ ಆಶಯ ಒಂದೇ ಆಗಿದೆ. ನಮಗೆ ಸಂವಿಧಾನ ಧರ್ಮಗ್ರಂಥ ಇದ್ದ ಹಾಗೆ. ಜನರ ಬದುಕನ್ನು ಎತ್ತಿರುವುದೇ  ಈ ಸಂವಿಧಾನ ಎಂಬ ಧರ್ಮಗ್ರಂಥದ ಆಶಯ ಎಂದು ವಿವರಿಸಿದರು. 

ಕಾಯಕ ಮತ್ತು ದಾಸೋಹ ಎರಡೂ ಜೀವನ ಮೌಲ್ಯಗಳು. ಈ ಮೌಲ್ಯಗಳನ್ನು ಪೂಜ್ಯರು ತಮ್ಮ ಬದುಕಿನುದ್ದಕ್ಕೂ ಆಚರಿಸಿದ್ದರು‌. ಇಂದು 10 ಸಾವಿರ ಮಕ್ಕಳಿಗೆ ಮಠದಲ್ಲಿ ವಿದ್ಯೆ, ವಸತಿ, ಅನ್ನ ಪಡೆಯುತ್ತಿದ್ದಾರೆ ಎಂದರೆ ಶಿವಕುಮಾರಮಹಾಯೋಗಿಗಳ ಬದುಕಿನ ಆಚರಣೆಯೇ ಕಾರಣ ಎಂದು ಮುಖ್ಯಮಂತ್ರಿಗಳು ಅಪಾರ ಮೆಚ್ಚುಗೆ ವ್ಯಕ್ತಪಡಿಸಿದರು. 

ನಂಜುಂಡಪ್ಪ ಅವರ ವರದಿಯಂತೆ ಸರ್ಕಾರ ಕೆಲಸ ಮಾಡುತ್ತಿದೆ. ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ದಕ್ಷಿಣ ಮತ್ತು ಉತ್ತರ ಕರ್ನಾಟಕ ನಡುವಿನ ಅಭಿವೃದ್ಧಿಯ ತಾರತಮ್ಯವನ್ನು ಹೋಗಲಾಡಿಸಲು ಸರ್ಕಾರ ಶ್ರಮಿಸುತ್ತಿದೆ. ಶಿಕ್ಷಣದ ಮೂಲಕ ತಾರತಮ್ಯ ಮತ್ತು ಅಸಮಾನ ಪ್ರಜ್ಞೆಯನ್ನು ಅಳಿಸಲು ಸಾಧ್ಯವಿದೆ. ನಾನು ಬಸವಾದಿ ಶರಣರ ತತ್ವಾದರ್ಶಗಳು ಸಮಾಜದಲ್ಲಿ ಜಾರಿ ಆದಾಗ ಮಾತ್ರ  ಸಮಾನ ಅವಕಾಶಗಳು ಸೃಷ್ಟಿಯಾಗಲು ಸಾಧ್ಯ ಎಂದರು.

ಶಿವಕುಮಾರ ಸ್ವಾಮಿಗಳು ಬದುಕಿನುದ್ದಕ್ಕೂ ಅಕ್ಷರ ಸಂಸ್ಕೃತಿ ಮೂಲಕ ಸಮಾಜದಲ್ಲಿ ಕ್ರಾಂತಿಕಾರಕ‌ ಬದಲಾವಣೆ ತರಲು ಶ್ರಮಿಸಿದರು‌. ಹೀಗಾಗಿ ಶ್ರೀಗಳ ಕಾರ್ಯ, ಕಾಳಜಿ ಮತ್ತು ಅವರ ನಡೆ-ನುಡಿ ಈ ಮಣ್ಣಿನಲ್ಲಿ ಅಜರಾಮರ ಆಗಿ ಉಳಿಯಲಿದೆ ಎಂದರು. 

ಬಸವಾದಿ ಶರಣರ ಆಶಯದಂತೆ ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಇದಕ್ಕಾಗಿ ವಾರ್ಷಿಕ 58 ಸಾವಿರ ಕೋಟಿ ರೂಪಾಯಿಗಳನ್ನು ನೀಡಲಾಗುತ್ತಿದೆ. ಇವೆಲ್ಲವೂ ಸಮಸಮಾಜದ ಆಶಯಗಳನ್ನು ಈಡೇರಿಸುವ ದಿಕ್ಕಿನಲ್ಲಿ ನಮ್ಮ ಸರ್ಕಾರ ಇಟ್ಟ ದಿಟ್ಟ ಹೆಜ್ಜೆಗಳಾಗಿವೆ ಎಂದು ವಿವರಿಸಿದರು. 

ಪರಮಪೂಜ್ಯ ಸಿದ್ಧಲಿಂಗ ಮಹಾಸ್ವಸಮೀಜಿ, ತೋಂಟದಾರ್ಯ ಸಂಸ್ಥಾನ ಮಠದ ಡಾ.ಶ್ರೀ ತೋಂಟದ ಸಿದ್ಧರಾಮ ಮಹಾಸ್ವಾಮೀಜಿ, ಸಿದ್ಧಗಂಗಾ ಮಠದ ಉತ್ತರಾಧಿಕಾಧಿಕಾರಿಗಳಾದ ಶಿವ ಸಿದ್ಧೇಶ್ವರ ಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ ಕಾರ್ಯಕ್ರಮಗಳು ನಡೆದವು. 

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೃಹ ಸಚಿವರಾದ ಜಿ.ಪರಮೇಶ್ವರ್, ಸಹಕಾರ ಸಚಿವ ಕೆ.ರಾಜಣ್ಣ, ಅರಣ್ಯ ಸಚಿವ ಈಶ್ವರ್ ಖಂಡ್ರೆ, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಶಾಸಕರುಗಳಾದ ಜ್ಯೋತಿಗಣೇಶ್, ಸುರೇಶ್ ಗೌಡ, ಶ್ರೀನಿವಾಸ್ ಹಾಗೂ KRIDL ನ ಮಾಜಿ ಅಧ್ಯಕ್ಷ ಎಂ. ರುದ್ರೇಶ್ ಸೇರಿ ಹಲವು ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Lakhs of Construction of parking shed at cost! Shivamoga – Bhadravati Urban Development Authority's move which is hot for discussion ಕಚೇರಿ ಕಾರುಗಳ ನಿಲುಗಡೆಗಾಗಿ ರಸ್ತೆಯಲ್ಲಿಯೇ ಲಕ್ಷಾಂತರ ರೂ. ವೆಚ್ಚದಲ್ಲಿ ಪಾರ್ಕಿಂಗ್ ಶೆಡ್ ನಿರ್ಮಾಣ! *ಚರ್ಚೆಗೆ ಗ್ರಾಸವಾದ ಶಿವಮೊಗ್ಗ – ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಕ್ರಮ Previous post ಕಚೇರಿ ಕಾರುಗಳ ನಿಲುಗಡೆಗಾಗಿ ರಸ್ತೆಯಲ್ಲಿಯೇ ಲಕ್ಷಾಂತರ ರೂ. ವೆಚ್ಚದಲ್ಲಿ ಪಾರ್ಕಿಂಗ್ ಶೆಡ್ ನಿರ್ಮಾಣ!
Woman suffering from mental problems: Police department to conduct comprehensive investigation ಮಾನಸಿಕ ಅಸ್ವಸ್ಥತೆಯಿಂದ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ : ಎಸ್ಪಿ ಸ್ಪಷ್ಟನೆ ಘೋಷಣೆ ಕೂಗಿದ ಮಹಿಳೆ ಪೊಲೀಸ್ ವಶಕ್ಕೆ..! Next post ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆ : ಸಮಗ್ರ ಪರಿಶೀಲನೆಗೆ ಮುಂದಾದ ಪೊಲೀಸ್ ಇಲಾಖೆ