
ಸಚಿವ ಅಶ್ವತ್ಥ ನಾರಾಯಣ ವಿರುದ್ದ ಪೊಲೀಸ್ ಠಾಣೆಗೆ ದೂರು..!
ಶಿವಮೊಗ್ಗ, ಫೆ. 17: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುರಿತಂತೆ ಪ್ರಚೋದನಕಾರಿ ಹೇಳಿಕೆ ನೀಡಿರುವ ಸಚಿವ ಅಶ್ವತ್ಥ ನಾರಾಯಣ್ ವಿರುದ್ದ, ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಪ್ರವೀಣ್ ಕುಮಾರ್ ಅವರು ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ದೂರು ದಾಖಲಿಸಿದ್ದಾರೆ.
ಮಂಡ್ಯ ಜಿಲ್ಲೆಯ ಸಾತನೂರು ಗ್ರಾಮದ ಕಂಬದ ನರಸಿಂಹ ದೇವಾಲಯ ಆವರಣದಲ್ಲಿ ನಡೆದ ಬಿಜೆಪಿ ಪಕ್ಷದ ಮಹಾಶಕ್ತಿ ಕೇಂದ್ರದ ಸಭೆಯಲ್ಲಿ ಭಾಗವಹಿಸಿದ್ದ ಸಚಿವ ಅಶ್ವತ್ಥ ನಾರಾಯಣ್ ಅವರು, ತಮ್ಮ ಭಾಷಣದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಒಡೆದು ಮುಗಿಸಬೇಕು ಎಂದು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ.
ಬಹಿರಂಗವಾಗಿಯೇ ಸಚಿವರು ಹತ್ಯೆಗೆ ಪ್ರಚೋದನೆ ನೀಡಿದ್ದಾರೆ. ಅವರ ವಿರುದ್ದ ಕಾನೂನು ರೀತ್ಯ ಕ್ರಮ ಜರುಗಿಸಿ ಬಂಧಿಸಬೇಕು ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಎಂ.ಪ್ರವೀಣ್ ಕುಮಾರ್ ಅವರು ಆಗ್ರಹಿಸಿದ್ದಾರೆ.
ದೂರು ನೀಡುವ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ರಂಗನಾಥ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ.ಗಿರೀಶ್, ಮುಖಂಡರಾದ ಬಿ.ಲೋಕೇಶ್, ಎನ್.ಕುಮಾರೇಶ್, ಎಂ.ರಾಕೇಶ್, ಆದಿಲ್ ಬಾಷಾ, ನದೀಮ್, ಸಚಿನ್ ಮೊದಲಾದವರಿದ್ದರು.