ಪ್ರಿಂಟಿಂಗ್ ಪ್ರೆಸ್ ಮಾಲೀಕರು – ಕೇಬಲ್ ಟಿವಿ ಆಪರೇಟರ್‌ಗಳಿಗೆ ಡಿಸಿ ನೀಡಿದ ಖಡಕ್ ಸೂಚನೆಯೇನು?

ಶಿವಮೊಗ್ಗ, ಮಾ.28: ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ಕರಪತ್ರ, ಪೋಸ್ಟರ್, ಬ್ಯಾನರ್ ಇತ್ಯಾದಿಗಳನ್ನು ಮುದ್ರಿಸಿದ ಸಂದರ್ಭದಲ್ಲಿ ಕಡ್ಡಾಯವಾಗಿ ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಒದಗಿಸುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ತಿಳಿಸಿದರು.

ಅವರು ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಿಂಟಿಂಗ್ ಪ್ರೆಸ್ ಮಾಲಿಕರ ಹಾಗೂ ಕೇಬಲ್ ಟಿವಿ ಆಪರೇಟರ್‌ಗಳ ಸಭೆಯಲ್ಲಿ ಈ ಸೂಚನೆ ನೀಡಿದರು.

ಕರಪತ್ರ, ಪೋಸ್ಟರ್ ಇತ್ಯಾದಿಗಳನ್ನು ಮುದ್ರಿಸಿದ ಸಂದರ್ಭದಲ್ಲಿ ಅದರಲ್ಲಿ ಮುದ್ರಕರ ಹೆಸರು ಇತ್ಯಾದಿಗಳನ್ನು ಸಹ ಕಡ್ಡಾಯವಾಗಿ ಮುದ್ರಿಸಬೇಕು. ಪ್ರತಿದಿನ ಮುದ್ರಣದ ಮಾಹಿತಿಯನ್ನು ಜಿಲ್ಲಾಧಿಕಾರಿ ಕಚೇರಿಗೆ ಒದಗಿಸಬೇಕು. ಮುದ್ರಣದ ಬಳಿಕ ಅದರ ಪ್ರತಿಯನ್ನು ಜಿಲ್ಲಾಧಿಕಾರಿ ಕಚೇರಿಗೆ ನಿಗದಿತ ಮಾಹಿತಿಯೊಂದಿಗೆ ಸಲ್ಲಿಸಬೇಕು. ರಾಜಕೀಯ ಪ್ರೇರಿತ ಯಾವುದೇ ಮುದ್ರಣ ಕಾರ್ಯವನ್ನು ಕೈಗೊಳ್ಳುವ ಸಂದರ್ಭದಲ್ಲಿ ನಿಗದಿತ ಮಾರ್ಗಸೂಚಿಯನ್ನು ತಪ್ಪದೇ ಪಾಲಿಸಬೇಕು. ಇದನ್ನು ಉಲ್ಲಂಘಿಸುವವರ ವಿರುದ್ಧ ಪ್ರಜಾಪ್ರತಿನಿಧಿ ಕಾಯ್ದೆ (1951) 127 (ಎ) ಅಡಿ ಮೊಕದ್ದಮೆ ದಾಖಲಿಸಿ ಕ್ರಮ ಕೈಗೊಳ್ಳಲು ಅವಕಾಶವಿದೆ ಎಂದು ಅವರು ಸ್ಪಷ್ಟಪಡಿಸಿದರು.

ಮುದ್ರಣದ ಮಾಹಿತಿಯನ್ನು ನಮೂನೆ ಎ ಮತ್ತು ಬಿ ಯಲ್ಲಿ ನಮೂದಿಸಬೇಕು. ಇದರಲ್ಲಿ ಮುದ್ರಕರ ಹೆಸರು, ಅಭ್ಯರ್ಥಿ ವಿವರ, ವೆಚ್ಚ, ವಿಳಾಸ, ಪ್ರತಿಗಳ ಸಂಖ್ಯೆ ಇತ್ಯಾದಿ ವಿವರಗಳು ಇರಬೇಕು. ಸಮರ್ಪಕ ಮಾಹಿತಿ ಲಭ್ಯವಿಲ್ಲದಿದ್ದರೆ ಮುದ್ರಕರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು. ಚುನಾವಣೆ ಬಹಿಷ್ಕಾರದಂತಹ ಪೋಸ್ಟರ್, ಕರಪತ್ರ, ಬ್ಯಾನರ್‌ಗಳನ್ನು ಮುದ್ರಿಸುವುದು ಎಂದು ಕಾಯ್ದೆಯ ಉಲ್ಲಂಘನೆಯಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು.

ಕೇಬಲ್ ಚಾನೆಲ್‌ಗಳಿಗೆ ಸೂಚನೆ: ಸ್ಥಳೀಯ ಕೇಬಲ್ ಚಾನೆಲ್‌ಗಳಲ್ಲಿ ಚುನಾವಣಾ ಜಾಹೀರಾತುಗಳನ್ನು ಪ್ರಸಾರ ಮಾಡುವ ಪೂರ್ವದಲ್ಲಿ ಅನುಮತಿಯನ್ನು ನಿಗದಿತ ಪ್ರಾಧಿಕಾರದಿಂದ ಕಡ್ಡಾಯವಾಗಿ ಪಡೆದುಕೊಳ್ಳಬೇಕು. ಸಿನೆಮಾ ಥಿಯೇಟರ್, ಸಾಮಾಜಿಕ ಮಾಧ್ಯಮಗಳು ಸೇರಿದಂತೆ ಎಲ್ಲಾ ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ರಾಜಕೀಯ ಜಾಹೀರಾತುಗಳನ್ನು ಪ್ರಸಾರ ಮಾಡುವ ಪೂರ್ವದಲ್ಲಿ ಅನುಮತಿಯನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ಎಸ್.ಎಸ್.ಬಿರಾದಾರ್, ಜಿಲ್ಲಾ ಪ್ರಿಂಟಿಂಗ್ ಪ್ರೆಸ್ ಸಂಘದ ಪ್ರತಿನಿಧಿಗಳು, ಮತ್ತಿತರರು ಉಪಸ್ಥಿತರಿದ್ದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *