shimoga | ಶಿವಮೊಗ್ಗ : ಕೆಲ ಸರ್ಕಾರಿ ಹಾಸ್ಟೆಲ್, ವಸತಿ ಶಿಕ್ಷಣ ಸಂಸ್ಥೆಗಳ ಅವ್ಯವಸ್ಥೆ – ಕಣ್ಮುಚ್ಚಿ ಕುಳಿತಿದೆಯೇ ಆಡಳಿತ?
ವರದಿ : ಬಿ. ರೇಣುಕೇಶ್
ಶಿವಮೊಗ್ಗ (shivamogga), ಸೆಪ್ಟೆಂಬರ್ 13: ಶಿವಮೊಗ್ಗ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಡಿ ಕಾರ್ಯನಿರ್ವಹಣೆ ಮಾಡುತ್ತಿರುವ ಸರ್ಕಾರಿ ಹಾಸ್ಟೆಲ್ ಹಾಗೂ ವಸತಿ ಶಿಕ್ಷಣ ಸಂಸ್ಥೆಗಳಲ್ಲಿ, ಕೆಲ ಕೇಂದ್ರಗಳು ಅವ್ಯವಸ್ಥೆಯ ಆಗರವಾಗುತ್ತಿರುವ ದೂರುಗಳು ಕೇಳಿಬರುತ್ತಿವೆ!
ಜಿಲ್ಲಾ ಪಂಚಾಯ್ತಿ ಹಾಗೂ ತಾಲೂಕು ಪಂಚಾಯ್ತಿ ಆಡಳಿತಗಳ ಜನಪ್ರತಿನಿಧಿಗಳಿದ್ದ ವೇಳೆ, ಸರ್ಕಾರಿ ಹಾಸ್ಟೆಲ್ – ವಸತಿ ಶಿಕ್ಷಣ ಸಂಸ್ಥೆಗಳಲ್ಲಿನ ಲೋಪದೋಷಗಳು ಆಡಳಿತದ ಹಿರಿಯ ಅಧಿಕಾರಿಗಳ ಗಮನಕ್ಕೆ ಬರುತ್ತಿದ್ದವು. ಆದರೆ ಸದರಿ ಆಡಳಿತಗಳಲ್ಲಿ ಜನಪ್ರತಿನಿಧಿಗಳಿಲ್ಲದೆ ಹಲವು ವರ್ಷಗಳಾಗಿವೆ.
ಹಾಗೆಯೇ ಸದರಿ ಕೇಂದ್ರಗಳಿಗೆ ದಿಢೀರ್ ಭೇಟಿಯಿತ್ತು ಪರಿಶೀಲನೆ ನಡೆಸುವ ಕಾರ್ಯಗಳು ಕೂಡ ಪರಿಣಾಮಕಾರಿಯಾಗಿ ನಡೆಯುತ್ತಿಲ್ಲ. ಕೆಲ ಶಾಸಕರು ಹಾಗೂ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು, ತಮಗೂ ಇದಕ್ಕೂ ಸಂಬಂಧವೇ ಇಲ್ಲದಂತೆ ಸುಮ್ಮನಿದ್ದಾರೆ.
ಈ ಎಲ್ಲ ಕಾರಣಗಳಿಂದ ಕೆಲ ಸರ್ಕಾರಿ ಹಾಸ್ಟೆಲ್ – ವಸತಿ ಶಿಕ್ಷಣ ಕೇಂದ್ರಗಳು ಅವ್ಯವಸ್ಥೆಯ ಆಗರವಾಗುತ್ತಿವೆ. ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗುತ್ತಿದೆ. ಹೇಳುವವರು, ಕೇಳುವವರು ಯಾರೂ ಇಲ್ಲದಂತಾಗಿದೆ ಎಂಬ ಆರೋಪಗಳು ಕೇಳಿಬರುತ್ತಿವೆ.
ಮಕ್ಕಳಿಗೆ ಸರ್ಕಾರ ನಿಗದಿಪಡಿಸಿದ ಗುಣಮಟ್ಟದ ಆಹಾರ, ಸೌಲಭ್ಯಗಳು ದೊರಕುತ್ತಿಲ್ಲ. ಸ್ವಚ್ಛತೆ ಮರೀಚಿಕೆಯಾಗುತ್ತಿದೆ. ಮಕ್ಕಳ ಅಹವಾಲು ಕೇಳುವ ವ್ಯವಸ್ಥೆಯೇ ಇಲ್ಲದಂತಾಗಿದೆ ಎಂಬ ಹಲವು ದೂರುಗಳಿವೆ.
ಗಮನಹರಿಸಲಿ : ಸರ್ಕಾರಿ ಹಾಸ್ಟೆಲ್ – ವಸತಿ ಶಿಕ್ಷಣ ಕೇಂದ್ರಗಳಿಗೆ ಶಾಸಕರು, ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಹಾಗೂ ಲೋಕಾಯುಕ್ತ ಸೇರಿದಂತೆ ನಾಗರೀಕರ ಅಹವಾಲು ಆಲಿಸುವ ಗುರುತರ ಕಾರ್ಯನಿರ್ವಹಣೆ ಮಾಡುತ್ತಿರುವ ಸರ್ಕಾರಿ ಸಂಸ್ಥೆಗಳು ನಿಯಮಿತವಾಗಿ ದಿಢೀರ್ ಭೇಟಿಯಿತ್ತು ತಪಾಸಣೆ ನಡೆಸುವ ಕಾರ್ಯ ಮಾಡಬೇಕು.
ಸದರಿ ಕೇಂದ್ರಗಳಲ್ಲಿ ಸರ್ಕಾರದ ಸೌಲಭ್ಯಗಳು ಸಮರ್ಪಕವಾಗಿ ವಿದ್ಯಾರ್ಥಿಗಳಿಗೆ ತಲುಪುತ್ತಿವೆಯೇ? ಇಲ್ಲವೇ? ಎಂಬುವುದನ್ನು ಪರಿಶೀಲಿಸಬೇಕು. ತಪ್ಪಿತಸ್ಥರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮಕೈಗೊಳ್ಳಬೇಕು. ಇದರಿಂದ ಕೆಲ ಕೇಂದ್ರಗಳಲ್ಲಿ ನಡೆಯುತ್ತಿದೆ ಎನ್ನಲಾದ ಅಕ್ರಮ – ಅವ್ಯವಹಾರಗಳಿಗೆ ಕಡಿವಾಣ ಬೀಳಲಿದೆ ಎಂಬುವುದು ಪ್ರಜ್ಞಾವಂತ ನಾಗರೀಕರ ಆಗ್ರಹವಾಗಿದೆ.
Shivamogga, September 13: Complaints are being heard that some of the government hostels and residential educational institutions operating in various places in Shivamogga district are becoming a source of chaos!
ಹಾಸ್ಟೆಲ್ ವಿದ್ಯಾರ್ಥಿಗಳ ದಿಡೀರ್ ಪ್ರತಿಭಟನೆ!
ಶಿವಮೊಗ್ಗ ನಗರದ ಬೊಮ್ಮನಕಟ್ಟೆ ಬಡಾವಣೆಯಲ್ಲಿರುವ ಡಾ. ಬಿ ಆರ್ ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ವಿದ್ಯಾರ್ಥಿಗಳು, ಹಾಸ್ಟೆಲ್ ನಲ್ಲಿರುವ ಅವ್ಯವಸ್ಥೆ ಸರಿಪಡಿಸುವಂತೆ ಆಗ್ರಹಿಸಿ, ತಾಲೂಕು ಸಮಾಜ ಕಲ್ಯಾಣ ಇಲಾಖೆ ಕಚೇರಿ ಎದುರು ದಿಡೀರ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಸೆಪ್ಟೆಂಬರ್ 11 ರಂದು ನಡೆದಿದೆ. ಆಹಾರ ತಯಾರಿಸಲು ಕಳಪೆ ಗುಣಮಟ್ಟದ ತರಕಾರಿ ಬಳಸಲಾಗುತ್ತಿದೆ. ಹಾಸ್ಟೆಲ್ ನಲ್ಲಿ ಸ್ವಚ್ಛತೆಯಿಲ್ಲವಾಗಿದೆ ಎಂಬುವುದು ಸೇರಿದಂತೆ ಹಲವು ಆರೋಪಗಳನ್ನು ಮಾಡಿದ್ದಾರೆ. ವಿದ್ಯಾರ್ಥಿಗಳ ಪ್ರತಿಭಟನೆಯ ಬೆನ್ನಲ್ಲೇ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಸ್ಟೆಲ್ ಗೆ ಭೇಟಿಯಿತ್ತು ಪರಿಶೀಲಿಸಿದ್ದಾರೆ. ವಿದ್ಯಾರ್ಥಿಗಳ ಅಹವಾಲು ಆಲಿಸಿ, ಕಾಲಮಿತಿಯೊಳಗೆ ಪರಿಹರಿಸುವ ಭರವಸೆ ನೀಡಿದ್ದಾರೆಂದು ತಿಳಿದುಬಂದಿದೆ.
