ಶಿವಮೊಗ್ಗ (shivamogga), ಜುಲೈ 26: ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು, ಕಾಂಗ್ರೆಸ್ ಪಕ್ಷದ ಮುಖಂಡರಾದ ಎಚ್ ಎಂ ಚಂದ್ರಶೇಖರಪ್ಪ (78) ಅವರು ಜುಲೈ 26 ರ ಸಂಜೆ ಅಲ್ಪ ಕಾಲದ ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ಸೋಮವಾರ ಶಿವಮೊಗ್ಗದ ಬಸವನಗುಡಿ ಮುಖ್ಯ ರಸ್ತೆಯ ಸ್ವ ಗೃಹದಲ್ಲಿ, ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಂಜೆ 4 ಕ್ಕೆ ಹೊಸಳ್ಳಿಯ ತೋಟದಲ್ಲಿ ಅಂತಿಮ ವಿಧಿವಿಧಾನ ನೆರವೇರಲಿದೆ ಎಂದು ಕುಟುಂಬ ಮೂಲಗಳು ಮಾಹಿತಿ ನೀಡಿವೆ.
ರಾಜಕೀಯ ಹಿನ್ನೆಲೆ : ಎಚ್ ಎಂ ಚಂದ್ರಶೇಖರಪ್ಪ ಅವರು ಶಿವಮೊಗ್ಗ ನಗರಸಭೆಯ ಸದಸ್ಯರಾಗಿ, ಅಧ್ಯಕ್ಷರಾಗಿ ಕಾರ್ಯನಿರ್ವಹಣೆ ಮಾಡಿದ್ದರು. ಸರಿಸುಮಾರು 10 ವರ್ಷಗಳ ಕಾಲ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯನಿರ್ವಹಣೆ ಮಾಡಿದ್ದರು.
ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಅವರ ಬೆಂಬಲಿಗರಾಗಿ ಗುರುತಿಸಿಕೊಂಡಿದ್ದರು. ಅವರ ಸಲಹೆಯಂತೆ 1999 ರ ವಿಧಾನಸಭಾ ಚುನಾವಣೆಯಲ್ಲಿ, ಶಿವಮೊಗ್ಗ ನಗರ ಕ್ಷೇತ್ರದಿಂದ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದರು.
ತಮ್ಮ ಪ್ರತಿಸ್ಪರ್ಧಿಯಾಗಿದ್ದ ಬಿಜೆಪಿಯ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಅವರನ್ನು ಪರಾಭವಗೊಳಿಸಿ, ಇಡೀ ರಾಜ್ಯದ ಗಮನ ಸೆಳೆದಿದ್ದರು.
ಅವರ ಅವಧಿಯಲ್ಲಿ ಬೊಮ್ಮನಕಟ್ಟೆ ಆಶ್ರಯ ಬಡಾವಣೆ, ಗಾಜನೂರು ಡ್ಯಾಂ ಹೊಸದಾಗಿ ನಿರ್ಮಾಣ ನಡೆದಿತ್ತು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಮಾಜಿ ಉಪಾಧ್ಯಕ್ಷರಾಗಿ, ಮಾಜಿ ಶಾಸಕರ ವೇದಿಕೆಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.
ಸಂತಾಪ : ಎಚ್ ಎಂ ಚಂದ್ರಶೇಖರಪ್ಪರ ನಿಧನಕ್ಕೆ ಕಾಂಗ್ರೆಸ್ ನಾಯಕರು ಹಾಗೂ ವಿವಿಧ ಸಂಘಸಂಸ್ಥೆಗಳ ಪ್ರಮುಖರು ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಆತ್ಮಕ್ಕೆ ಭಗವಂತ ಚಿರಶಾಂತಿ ಕರುಣಿಸಲಿ, ಕುಟುಂಬ ಸದಸ್ಯರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
Shivamogga: Former MLA HM Chandrashekarappa passes away | Shivamogga, July 26: Former MLA from Shivamogga City Assembly constituency and Congress party leader HM Chandrashekarappa (78) passed away on the evening of July 26 at a private hospital in Bengaluru after a brief illness.

