ಬರಗಾಲ ಘೋಷಣೆ : ಸೆ. 4 ರಂದು ತೀರ್ಮಾನ – ಮುಖ್ಯಮಂತ್ರಿ ಸಿದ್ದರಾಮಯ್ಯ

ಬರಗಾಲ ಘೋಷಣೆ : ಸೆ. 4 ರಂದು ತೀರ್ಮಾನ - ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ, ಸೆ. 02: ಕೃಷ್ಣಾ  ಭಾಗ್ಯ ಜಲ ನಿಗಮದಿಂದ ಆಲಮಟ್ಟಿಯಲ್ಲಿ ಇಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೃಷ್ಣೆಗೆ ಗಂಗಾ ಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದರು.

ನಂತರ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ಈ ವರ್ಷ ರಾಜ್ಯದಲ್ಲಿ ಜೂನ್ ತಿಂಗಳಲ್ಲಿ ಮಳೆ ಕಡಿಮೆಯಾಗಿದೆ. ಶೇ. 56% ಕೊರತೆಯಾಗಿದೆ.  ಆಗಸ್ಟ್ ನಲ್ಲಿಯೂ ಕೊರತೆ ಕಂಡು ಬಂದಿದ್ದು, ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪಸಮಿತಿ ಈಗಾಗಲೇ  ಮೂರು ಸಭೆಗಳನ್ನು ನಡೆಸಿದೆ. 

ಪುನ: ಸೆ.04 ರಂದು ಮತ್ತೊಂದು ಸಭೆ ನಡೆಯಲಿದೆ. 113 ತಾಲ್ಲೂಕುಗಳಲ್ಲಿ  ಬರಗಾಲ ಇದೆ ಎಂದು ಜಂಟಿ ಸಮೀಕ್ಷೆ ನಡೆಸಿದ್ದಾರೆ. ಇದಲ್ಲದೆ 73 ತಾಲ್ಲೂಕುಗಳಲ್ಲಿ ಬರಗಾಲ  ಉಂಟಾಗಿದೆ ಎಂದು ಹೇಳಿದ್ದಾರೆ. ಅದಕ್ಕೂ ಜಂಟಿ ಸಮೀಕ್ಷೆ ನಡೆಸಿ ವರದಿ ಬಂದ ನಂತರ ತೀರ್ಮಾನ ಕೈಗೊಳ್ಳಲಾಗಿದೆ. ಸೆ.4 ರಂದು ಒಂದು ತೀರ್ಮಾನಕ್ಕೆ ಬರಲಾಗುವುದು ಎಂದರು.

ಪರಿಷ್ಕರಣೆಗೆ ಮನವಿ : ಬರ ಘೋಷಣೆಯ ನಂತರ ಕೇಂದ್ರಸರ್ಕಾರಕ್ಕೆ ಬರಪೀಡಿತ ತಾಲ್ಲೂಕುಗಳಿಗೆ ನೆರವು ಕೋರಿ ಮನವಿ ಸಲ್ಲಿಸಲಾಗುವುದು. ಕೇಂದ್ರ ಸರ್ಕಾರದ ಸಮಿತಿಯು ಸಮೀಕ್ಷೆ ನಡೆಸಿದ ನಂತರ , ಎನ್ ಡಿ ಆರ್ ಎಫ್ ಮಾರ್ಗಸೂಚಿಯಂತೆ ಹಣ ಬಿಡುಗಡೆ ಮಾಡುತ್ತದೆ. ರಾಜ್ಯಸರ್ಕಾರ ಈ ಅನುದಾನದಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳುತ್ತದೆ. ಅದಲ್ಲದೇ ರಾಜ್ಯ ಸರ್ಕಾರವೂ ಪರಿಹಾರ ಕಾರ್ಯಗಳಿಗೆ ಹಣ ವಿನಿಯೋಗಿಸಲಿದೆ. 2020 ರಿಂದ  ಇಲ್ಲಿಯವರೆಗೆ ಪರಿಷ್ಕರಣೆ ಆಗಿಲ್ಲ. ಎನ್ ಡಿ ಆರ್ ಎಫ್ ಮಾರ್ಗಸೂಚಿಗಳನ್ನು ಪರಿಷ್ಕರಿಸಲು ಹಾಗೂ ರಾಜ್ಯಗಳಿಗೆ ಹೆಚ್ಚು ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದರು.

ತಾರತಮ್ಯ ಇಲ್ಲ: ಕೃಷ್ಣಾ ಕಾವೇರಿ ಜೀವನದಿಗಳು. ಕಾವೇರಿ, ಕೃಷ್ಣಾ ನದಿ ಪಾತ್ರದಲ್ಲಿರುವವರೆಲ್ಲರೂ ನಮ್ಮ ರೈತರೇ. ತಾರತಮ್ಮ ಮಾಡುವ ಪ್ರಶ್ನೆಯೇ ಇಲ್ಲ.ಅಖಂಡ ಕರ್ನಾಟಕದಲ್ಲಿ ದಕ್ಷಿಣ, ಉತ್ತರ ಎಂಬ ಪ್ರಶ್ನೇ ಇಲ್ಲ ಎಂದರು.

ಸರ್ವ ಪಕ್ಷ ನಿಯೋಗ: ಕಾವೇರಿ ನೀರಿಗೆ ಸಂಬಂಧಿಸಿದಂತೆ ಸರ್ವ ಪಕ್ಷ ನಿಯೋಗವನ್ನು ದೆಹಲಿಗೆ ಕೊಂಡೊಯ್ಯಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಜಲಸಂಪನ್ಮೂಲ ಸಚಿವರ ಸಮಯವನ್ನು ಕೋರಿದ್ದೇವೆ. ಈಗಾಗಲೇ ನಮ್ಮ ಜಲಸಂಪನ್ಮೂಲ ಸಚಿವರು ನಮ್ಮ ರಾಜ್ಯದ ಪರವಾಗಿ ವಾದ ಮಂಡಿಸುವ ವಕೀಲರನ್ನು ಭೇಟಿ ಮಾಡಿ ಅವರಿಗೆ ವಸ್ತುಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ. ಬುಧವಾರ ಪ್ರಕರಣ ವಿಚಾರಣೆಗೆ ಬರಲಿದ್ದು ನಮ್ಮ ವಾದ ಏನಿರಬೇಕು ಎಂದು ಸೂಕ್ತ ನಿರ್ದೇಶನ ನೀಡಿದ್ದಾರೆ ಎಂದರು.

ಅಧಿಸೂಚನೆಗೆ ಆಗ್ರಹ : ಕೇಂದ್ರ ಸಚಿವರು ಭೇಟಿಗೆ ಅವಕಾಶ ನೀಡಿದ್ದಲ್ಲಿ, ಕೃಷ್ಣಾ ಮೇಲ್ದಂಡೆ ಯೋಜನೆಗೆ ಸಂಬಂಧಸಿದಂತೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಲು ಒತ್ತಾಯಿಸಲಾಗುವುದು. ಮಹಾದಾಯಿ ಯೋಜನೆಗೆ ಅಧಿಸೂಚನೆ ಹೊರಡಿಸಲಾಗಿದ್ದರೂ, ಅರಣ್ಯ ಹಾಗೂ ಪರಿಸರ  ತೀರುವಳಿ ದೊರೆತಿರುವುದಿಲ್ಲ.ಈ ಯೋಜನೆಗೆ ತೀರುವಳಿ ಹಾಗೂ ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲಾಗುವುದು.  ಇಂದು ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಿಲ್ಲದ ಕಾರಣ ಹಾಗೂ ಕುಡಿಯುವ ನೀರಿನ ಕೊರತೆಯಿಂದಾಗಿ ಸಂಕಷ್ಟದ ಸಮಯವನ್ನು ಎದುರಿಸುವಂತಾಗಿದೆ. ಜಲನೀತಿಯ ಪ್ರಕಾರ ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಬೇಕಾಗುತ್ತದೆ ಎಂದರು.

1 ಲಕ್ಷ ಕೋಟಿ ರೂ. ಅಗತ್ಯ : ಕೃಷ್ಣಾ ಮೇಲ್ದಂಡೆ ಯೋಜನೆಯ 3 ನೇ ಹಂತ ಪೂರ್ಣಗೊಳ್ಳಲು, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕಾರ್ಯಗಳು, ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳ್ಳಲು ಸುಮಾರು 1 ಲಕ್ಷ ಕೋಟಿ ರೂ.ಗಳ ಅಗತ್ಯವಿದೆ. 2023 ರ ಅಂದಾಜಿನ ಪ್ರಕಾರ 83700 ಕೋಟಿ ರೂ. ಇದ್ದು, ಯೋಜನೆ ಪೂರ್ಣಗೊಳ್ಳುವವರೆಗೆ 1 ಲಕ್ಷ ಕೋಟಿ ವೆಚ್ಚವಾಗುವ ಸಾಧ್ಯತೆ ಇದೆ. ರಾಜ್ಯಸರ್ಕಾರ ಯೋಜನೆಯ ಕಾಮಗಾರಿ ಕೈಗೆತ್ತಿಕೊಳ್ಳಲು ಸಿದ್ಧವಿದ್ದು, ಕೇಂದ್ರಸರ್ಕಾರ ತ್ವರಿತಗತಿಯಲ್ಲಿ ಅಧಿಸೂಚನೆ  ಹೊರಡಿಸಬೇಕಾಗಿದೆ. ಆದಾಗ್ಯೂ  ಯೋಜನೆಯ ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕಾರ್ಯಗಳು, ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳ್ಳಲು ಹೆಚ್ಚಿನ ಗಮನಹರಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಇಸ್ರೋ ವಿಜ್ಞಾನಿಗಳಿಗೆ ಸನ್ಮಾನ : ಇಸ್ರೋ ಸಂಸ್ಥೆಯು ಆದಿತ್ಯ -ಎಲ್1 ಉಪಗ್ರಹವನ್ನು ಯಶಸ್ಸಿಯಾಗಿ ಉಡಾವಣೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಇಸ್ರೋ ವಿಜ್ಞಾನಿಗಳಿಗೆ ಶುಭ ಕೋರಲಾಗಿದೆ. ಚಂದ್ರಯಾನ -3 ರ ಯಶಸ್ಸಿಗೆ ದ್ಯೋತಕವಾಗಿ ಇಸ್ರೋ ವಿಜ್ಞಾನಿಗಳಿಗೆ ಸರ್ಕಾರದ ವತಿಯಿಂದ ಅಭಿನಂದನಾ ಸಮಾರಂಭವನ್ನು ಆಯೋಜಿಸಲಾಗುವುದು ಎಂದರು.

ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ .ಎಂ.ಬಿ ಪಾಟೀಲ್ , ಸಚಿವರಾದ ಕೃಷ್ಣಬೈರೇಗೌಡ, ಶಾಸಕರಾದ ಎಚ್.ವೈ. ಮೇಟಿ, ಯಶವಂತ ರಾಯಗೌಡ ಪಾಟೀಲ, ಅಶೋಕ ಮನಗೂಳಿ, ವಿಠಲ ಕಟಕದೋಂಡ, ಸಂಸದ ರಮೇಶ್ ಜಿಗಜಿಣಗಿ, ಪಿ.ಸಿ ಗದ್ದಿಗೌಡ  ಸಂದರ್ಭದಲ್ಲಿ ಉಪಸ್ಥಿತರಿದ್ದರು.

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →