‘ಶಿವಮೊಗ್ಗ ಸ್ಮಾರ್ಟ್ ಸಿಟಿ ಅಕ್ರಮ ತನಿಖೆ – ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ’- ಸಚಿವ ಮಧು ಎಸ್.ಬಂಗಾರಪ್ಪ

‘ಶಿವಮೊಗ್ಗ ಸ್ಮಾರ್ಟ್ ಸಿಟಿ ಅಕ್ರಮ ತನಿಖೆ – ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ’- ಸಚಿವ ಮಧು ಎಸ್.ಬಂಗಾರಪ್ಪ

ಶಿವಮೊಗ್ಗ, ಸೆ. 16: ಸ್ಮಾರ್ಟ್ ಸಿಟಿ ಯೋಜನೆಯಡಿ ಶಿವಮೊಗ್ಗ ನಗರದಲ್ಲಿ ಸರಿಸುಮಾರು 900 ಕೋಟಿ ರೂ.ಗಳಿಗೂ ಅಧಿಕ ಮೊತ್ತದಲ್ಲಿ ಅನುಷ್ಠಾನಗೊಳಿಸಲಾಗಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಇತ್ತೀಚೆಗೆ ಸಾರ್ವಜನಿಕರು ತೀವ್ರ ಆಕ್ರೋಶ ಹೊರಹಾಕಿದ್ದ ಬೆನ್ನಲ್ಲೇ, ಇದೀಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳ ವಿರುದ್ದ ಗರಂ ಆಗಿದ್ದಾರೆ!

‘ಸ್ಮಾರ್ಟ್ ಸಿಟಿ ಅಡಿ ಯೋಜನೆಯಡಿ ಅನುಷ್ಠಾನಗೊಳಿಸಲಾಗಿರುವ ಕಾಮಗಾರಿಗಳ ಬಗ್ಗೆ ಸಾರ್ವಜನಿಕರಲ್ಲಿ ತೀವ್ರ ತರಹದ ಆಕ್ಷೇಪಣೆಯಿದೆ. ಸದರಿ ಕಾಮಗಾರಿಗಳ ಗುಣಮಟ್ಟ ಪರಿಶೀಲಿಸಬೇಕು. ಗುಣಮಟ್ಟ ಸರಿಯಾಗಿದ್ದಲ್ಲಿ ಮಾತ್ರ ಅನುದಾನ ಬಿಡುಗಡೆ ಮಾಡಬೇಕು’ ಎಂದು ಸಚಿವ ಮಧು ಎಸ್ ಬಂಗಾರಪ್ಪ ಅವರು ಸ್ಮಾರ್ಟ್ ಸಿಟಿ  ವ್ಯವಸ್ಥಾಪಕ ಮಾಯಣ್ಣಗೌಡ ಅವರಿಗೆ ಖಡಕ್ ಸೂಚನೆ ರವಾನಿಸಿದ್ದಾರೆ.

ಶನಿವಾರ ಶಿವಮೊಗ್ಗ ನಗರದ ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್‌ಸಾಬ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸ್ಮಾರ್ಟ್ ಸಿಟಿ ಯೋಜನೆ, ಸರ್ಕಾರಿ ಮೆಗ್ಗಾನ್ ಆಸ್ಪತ್ರೆ, ಪ್ರವಾಸೋದ್ಯಮ ಇಲಾಖೆ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ವಿದ್ಯುತ್ ಹಾಗೂ ಗ್ರಾಮೀಣ ಕುಡಿವ ನೀರು ಸರಬರಾಜು ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸ್ಮಾರ್ಟ್ ಸಿಟಿ ಯೋಜನೆಯಡಿ ಅಪೂರ್ಣವಾಗಿರುವ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡಬಾರದು. ಮಹಾನಗರಪಾಲಿಕೆ ಆವರಣದಲ್ಲಿ ಅನುಮತಿ ಇಲ್ಲದೆ ಕಾಮಗಾರಿ ನಡೆಸಲಾಗಿದೆ. ವಿವಿಧ ಬಡಾವಣೆಗಳಲ್ಲಿ ಅವೈಜ್ಞಾನಿಕವಾಗಿ ಕಾಮಗಾರಿ ನಡೆಸಲಾಗಿದೆ. ಇನ್ನೂ ಕೆಲವು ಸ್ಥಳಗಳಲ್ಲಿ ಅವಶ್ಯಕತೆಗಿಂತ ಹೆಚ್ಚಿನ ಹಣ ವಿನಿಯೋಗ ಮಾಡಿರುವುದು ಕಂಡು ಬಂದಿದೆ.

ಅವೈಜ್ಞಾನಿಕವಾಗಿ ಮಾಡಲಾಗಿರುವ ಪುಟ್ಬಾತ್ ಕಾಮಗಾರಿಯಿಂದಾಗಿ ಮಳೆನೀರು ನಿಂತು ಜನಸಾಮಾನ್ಯರಿಗೆ, ಪಾದಚಾರಿಗಳಿಗೆ, ವಾಹನ ಚಾಲಕರಿಗೆ ತೀವ್ರ  ತರಹದ ಅಡಚಣೆ ಉಂಟಾಗುತ್ತಿದೆ. ಸ್ಟೇಡಿಯಂ ಸುತ್ತಲೂ ನಿರ್ಮಾಣಗೊಂಡಿರುವ ವಾಕಿಂಗ್‌ ಪಾತ್ ಕಾಮಗಾರಿ ಅವೈಜ್ಞಾನಿಕವಾಗಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ದೂರುಗಳಿವೆ ಎಂದು ಸಚಿವರು ತಿಳಿಸಿದರು.

ಇಂತಹ ಅನೇಕ ಯೋಜನೆಗಳ ಅನುಷ್ಟಾನದಿಂದಾಗಿ ಯೋಜನೆಯ ಆರಂಭದಿಂದ  ಮುಕ್ತಾಯ ಹಂತದವರೆಗೂ ಜನ ಕಿರಿಕಿರಿ ಅನುಭವಿಸುತ್ತಿರುವುದು ಬೇಸರದ ಸಂಗತಿಯಾಗಿದೆ. ಸದರಿ ವಿಷಯವನ್ನು ತಾವು ಗಂಭೀರವಾಗಿ ಪರಿಗಣಿಸಿದ್ದು, ತನಿಖೆಯ ನಂತರ ತಪ್ಪಿತಸ್ಥರ ವಿರುದ್ಧ  ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದಲ್ಲಿ ಕೈಗೊಂಡ ಎಲ್ಲಾ ಕಾಮಗಾರಿಗಳ ಕುರಿತು ವಿವರವಾದ ಮಾಹಿತಿಯನ್ನು  ಕೂಡಲೇ ಸಲ್ಲಿಸುವಂತೆ ಸಚಿವರು ಮಹಾನಗರ ಪಾಲಿಕೆ ಆಯುಕ್ತ ಹಾಗೂ ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ಮಾಯಣ್ಣಗೌಡ ಅವರಿಗೆ ಸೂಚಿಸಿದರು.

ಶಿವಮೊಗ್ಗ ನಗರದ ಗೋಪಾಳ ಬಡಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ದಿ.ಎಸ್.ಬಂಗಾರಪ್ಪ ಅವರ ಹೆಸರಿನಲ್ಲಿ ನಿರ್ಮಿಸಲಾಗಿದ್ದ  ಬಸ್ ತಂಗುತಾಣದ ಹೆಸರನ್ನು ತೆರವುಗೊಳಿಸಿ  ಸ್ಮಾರ್ಟ್ಸಿಟಿ ಎಂದು ನಾಮಪಲಕ ಅಳವಡಿಸಿ ರಾಜ್ಯದ ಹಿರಿಯ ನಾಯಕರಿಗೆ ಅಗೌರವ ತೋರಿಸಿದಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದ ಅವರು, ಈ ಸಂಬಂಧ ಸ್ವಯಂ ಪ್ರೇರಿತರಾಗಿ ದೂರು ದಾಖಲಿಸಿಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಾಯಣ್ಣ ಗೌಡ ಅವರಿಗೆ ಸೂಚಿಸಿದರು.  

ಈ ಸಂದರ್ಭದಲ್ಲಿ ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾಧಿಕಾರಿ ಡಾ||ಆರ್.ಸಲ್ವಮಣಿ ಅವರು ಮಾತನಾಡಿ, ಕೆಲವು ಕಾಮಗಾರಿಗಳ ಅನುಷ್ಟಾನದಲ್ಲಿ ಅಧಿಕಾರಿಗಳ ನಡುವೆ ಪರಸ್ಪರ ಸಮನ್ವಯತೆ ಇಲ್ಲದೆ ನ್ಯೂನ್ಯತೆಗಳಾಗಿವೆ ಎಂದರು.

ಖಡಕ್ ಎಚ್ಚರಿಕೆ: ಶಿವಮೊಗ್ಗ ನಗರದ ಹೊರವಲಯದಲ್ಲಿರುವ ಮುದ್ದಣ್ಣನಕೆರೆಯ ಮಣ್ಣನ್ನು ಅಕ್ರಮವಾಗಿ ಸಾಗಾಣಿಕೆ ಮಾಡಿದ ಬಗ್ಗೆ ವಿವರಣೆ ನೀಡುವಂತೆ ಸೂಚಿಸಿದ ಅವರು ಆಡಳಿತ ವ್ಯವಸ್ಥೆಯಲ್ಲಿ ತಲೆತೂರಿಸುವ ವ್ಯಕ್ತಿಗಳು ಹಾಗೂ ಅದರಲ್ಲಿ ಶಾಮಿಲಾಗಿರುವ ವ್ಯಕ್ತಿಗಳ ವರ್ತನೆಯನ್ನು ಸಹಿಸಿಕೊಳ್ಳಲಾಗುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಬರ ಪರಿಸ್ಥಿತಿ : ರಾಜ್ಯದಲ್ಲಿ ಬರ ಘೋಷಣೆಯಾಗಿದ್ದು ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಾರ್ಗಸೂಚಿ ಅನ್ವಯ ಸಮೀಕ್ಷೆ  ನಡೆಸಿ ಪರಿಹಾರ ಕಾರ್ಯ ಕೈಗೊಳ್ಳಲಾಗುವುದು. ಜಿಲ್ಲೆಯಲ್ಲಿ ಬೆಳೆ ಪರಿಹಾರ ಸಮೀಕ್ಷೆಯಲ್ಲಿ ಮಾನವೀಯ ಆಧಾರದ ಮೇಲೆ ರೈತರಿಗೆ ಅನುಕೂಲ ವಾಗುವಂತೆ ಅಧಿಕಾರಿಗಳು ಕಾರ್ಯನಿರ್ವಹಿಸುವಂತೆ ತಿಳಿಸಿದರು.

ಪ್ರಸಕ್ತ ಬೇಸಿಗೆಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳದಂತೆ ಸಕಾಲಿಕ ಹಾಗೂ ತುರ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ  ಗ್ರಾಮೀಣ ಕುಡಿಯುವ ನೀರು ಮತ್ತು ರೈತರಿಗೆ ಅನುಕೂಲವಾಗುವಂತೆ ವಿದ್ಯುತ್ ಇಲಾಖೆಯ ಅಭಿಯಂತರರು ನಿರಂತರವಾಗಿ ವಿದ್ಯುತ್ ಸರಬರಾಜು ಮಾಡಲು ಕ್ರಮ ಕೈಗೊಳ್ಳುವಂತೆ ಸಚಿವರು ಮೆಸ್ಕಾಂ ಅಧೀಕ್ಷಕರಿಗೆ ಸೂಚಿಸಿದರು.

ಏತ ನೀರಾವರಿ: ವಿಶೇಷವಾಗಿ ಸೊರಬ ತಾಲೂಕಿನ ಮೂಡಿ ಸೇರಿದಂತೆ ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ಏತ ನೀರಾವರಿ ಯೋಜನೆಗಳ  ವ್ಯಾಪ್ತಿಯಲ್ಲಿ ಬರುವ ಕೆರೆಗಳನ್ನು ತುಂಬಿಸಲು ಸಹಕಾರ ನೀಡುವಂತೆ ಸೂಚಿಸಿದ ಅವರು, ಮೂಡಿ ಗ್ರಾಮದಲ್ಲಿ ವಿದ್ಯುತ್ ಉಪ ಕೇಂದ್ರವನ್ನು ಸ್ಥಾಪಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದವರು ನುಡಿದರು.

ಜಿಲ್ಲೆಯಲ್ಲಿ ಕೋಟಿಪುರ, ಗುಡವಿ, ಬಳ್ಳಿಗಾವಿ ಸೇರಿದಂತೆ ಅನೇಕ ಪ್ರವಾಸಿ ತಾಣಗಳ ಅಭಿವೃದ್ಧಿಗೆ ವಿಪುಲ ಅವಕಾಶಗಳಿದ್ದು ಈ ಸಂಬಂಧ ವಿಸ್ತೃತ ವರದಿಯನ್ನು ಸಿದ್ಧಪಡಿಸಿ ಸಲ್ಲಿಸುವಂತೆ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಧರ್ಮಪ್ಪ ಅವರಿಗೆ ಸೂಚಿಸಿದರು. ಪ್ರವಾಸೋದ್ಯಮ ಕ್ಷೇತ್ರಗಳ ಅಭಿವೃದ್ಧಿಯಿಂದಾಗಿ ಜನಸಾಮಾನ್ಯರಲ್ಲಿ ಆರ್ಥಿಕ ವಹಿವಾಟು ಹೆಚ್ಚಲಿದೆ ಮಾತ್ರವಲ್ಲ  ಉದ್ಯೋಗಾವಕಾಶಗಳು ಹೆಚ್ಚಲಿವೆ ಎಂದವರು ಅಭಿಪ್ರಾಯಪಟ್ಟರು.

ಸೋಲಾರ್ ಪಾರ್ಕ್: ಜಿಲ್ಲೆಯಲ್ಲಿ ಸೋಲಾರ್ ಪಾರ್ಕ್ ಸ್ಥಾಪಿಸಲು ಅಗತ್ಯವಾಗಿರುವ ಭೂಮಿಯನ್ನು ಸೂಕ್ತ ಸ್ಥಳದಲ್ಲಿ ಒದಗಿಸುವಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ||ಆರ್. ಸೆಲ್ವಮಣಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ  ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸಭೆಯ ಅರಂಭದಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ನಡೆಯಲಿರುವ ಸ್ವಚ್ಚತಾ ಹಿ ಸೇವಾ ಎಂಬ ವಿಶೇಷ ಜನಾಂದೋಲನದ ಪೋಸ್ಟರ್‌ನ್ನು ಸಚಿವರು ಬಿಡುಗಡೆಗೊಳಿಸಿದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *