ಹಾವೇರಿ ಲೋಕಸಭಾ ಟಿಕೆಟ್ : ಪುತ್ರನ ಪರ ಕೆ.ಎಸ್.ಈಶ‍್ವರಪ್ಪ ಕೊನೆ ಹಂತದ ಹೋರಾಟ..!

Haveri Lok Sabha ticket: KS Eshwabarappa's final fight for his son! ಹಾವೇರಿ ಲೋಕಸಭಾ ಟಿಕೆಟ್ : ಪುತ್ರನ ಪರ ಕೆ.ಎಸ್.ಈಶ್ವಬರಪ್ಪ ಕೊನೆ ಹಂತದ ಹೋರಾಟ!

ಶಿವಮೊಗ್ಗ, ಮಾ. 9: ಕಳೆದ ವಿಧಾನಸಭೆ ಚುನಾವಣೆಯಲ್ಲಿ, ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಪುತ್ರ ಕೆ.ಇ.ಕಾಂತೇಶ್’ಗೆ ಬಿಜೆಪಿ ಟಿಕೆಟ್ ಕೊಡಿಸಲು ಸಾಧ್ಯವಾಗದೆ ಬೇಸರಗೊಂಡಿದ್ದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು, ಇದೀಗ ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಹಾವೇರಿ ಕ್ಷೇತ್ರದಿಂದ ಪುತ್ರನಿಗೆ ಟಿಕೆಟ್ ಕೊಡಿಸಲು ಭಾರೀ ಕಸರತ್ತು ನಡೆಸಲಾರಂಭಿಸಿದ್ದಾರೆ!

ವರಿಷ್ಠ ನಾಯಕರ ಭರವಸೆಯಂತೆ, ಕೆ.ಎಸ್.ಈಶ್ವರಪ್ಪ ಹಾಗೂ ಅವರ ಪುತ್ರ ಕೆ.ಇ.ಕಾಂತೇಶ್ ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಹಲವು ತಿಂಗಳುಗಳಿಂದ ಚುನಾವಣಾ ಸಿದ್ದತೆಯಲ್ಲಿ ತೊಡಗಿದ್ದರು. ಟಿಕೆಟ್ ಸಿಗುವ ದೃಢ ವಿಶ್ವಾಸದಲ್ಲಿದ್ದರು. ಬಹುತೇಕ ಟಿಕೆಟ್ ಖಚಿತ ಎಂದೇ ಹೇಳಲಾಗಿತ್ತು.

ಆದರೆ ಚುನಾವಣೆ ಸಮೀಪಿಸುತ್ತಿದ್ದಂತೆ, ಹಾವೇರಿ ಕ್ಷೇತ್ರದ ಬಿಜೆಪಿ ಟಿಕೆಟ್ ಲೆಕ್ಕಾಚಾರಗಳು ತಲೆಕೆಳಗಾಗುವಂತಾಗಿದೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಬಿಜೆಪಿ ಪಕ್ಷದ ಅಭ‍್ಯರ್ಥಿಯಾಗಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಈ ನಡುವೆ ಮಾಜಿ ಸಚಿವ ಬಿ.ಸಿ.ಪಾಟೀಲ್ ತಮಗೆ ಟಿಕೆಟ್ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಈ ಕಾರಣದಿಂದ ಕೆ.ಇ.ಕಾಂತೇಶ್ ಗೆ ಬಿಜೆಪಿ ಟಿಕೆಟ್ ದೊರಕಲಿದೆಯಾ? ಇಲ್ಲವೆ? ಎಂಬ ಕುತೂಹಲ ಬಿಜೆಪಿ ಪಾಳೇಯದಲ್ಲಿ ಮನೆಮಾಡಿದೆ. ಮತ್ತೊಂದೆಡೆ, ಪಕ್ಷದಲ್ಲಿನ ದಿಢೀರ್ ವಿದ್ಯಮಾನಗಳು ಕೆ.ಎಸ್.ಈಶ್ವರಪ್ಪ ಅವರ ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗಿದೆ.

ಈ ಕಾರಣದಿಂದ ಶತಾಯಗತಾಯ ಪುತ್ರನಿಗೆ ಟಿಕೆಟ್ ಕೊಡಿಸಲು ಲಾಬಿ ಶುರು ಮಾಡಿದ್ದಾರೆ. ಈ ಮೊದಲು ನೀಡಿದ್ದ ಭರವಸೆಯಂತೆ, ಪುತ್ರನಿಗೆ ಟಿಕೆಟ್ ನೀಡುವಂತೆ ಪಕ್ಷದ ವರಿಷ್ಠರಿಗೆ ಒತ್ತಡ ಹಾಕಲಾರಂಭಿಸಿದ್ದಾರೆ. ಒಂದು ವೇಳೆ ಪುತ್ರನಿಗೆ ಟಿಕೆಟ್ ಕೈ ತಪ್ಪಿದರೆ ಮುಂದಿನ ರಾಜಕೀಯ ನಿರ್ಧಾರ ಪ್ರಕಟಿಸುವ ಖಡಕ್ ಎಚ್ಚರಿಕೆಯ ಸಂದೇಶ ಕೂಡ ರವಾನಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಒಟ್ಟಾರೆ ಹಾವೇರಿ ಕ್ಷೇತ್ರದ ಬಿಜೆಪಿ ಟಿಕೆಟ್ ರಾಜಕಾರಣ ದಿನದಿಂದ ದಿನಕ್ಕೆ ಕಾವೇರಲಾರಂಭಿಸಿದೆ. ಕೆ.ಎಸ್.ಈಶ್ವರಪ್ಪ ಪುತ್ರನಿಗೆ ಟಿಕೆಟ್ ಕೊಡಿಸುವಲ್ಲಿ ಸಫಲರಾಗಲಿದ್ದಾರಾ? ಇಲ್ಲವೇ? ಎಂಬುವುದು ಭಾರೀ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದ್ದು, ಮುಂದೇನಾಗಲಿದೆ ಎಂಬುವುದು ಕಾದು ನೋಡಬೇಕಾಗಿದೆ.

*** ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಪಾಲಿಟಿಕ್ಸ್ ದಿನಕ್ಕೊಂದು ತಿರುವು ಪಡೆಯಲಾರಂಭಿಸಿದೆ. ಕೆ.ಎಸ್.ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್ ಗೆ ಟಿಕೆಟ್ ಸಿಗುವುದು ಅನುಮಾನ ಎಂದು ಹೇಳಲಾಗುತ್ತಿದೆ. ಒಂದು ವೇಳೆ ಕೆ.ಇ.ಕಾಂತೇಶ್ ಗೆ ಹಾವೇರಿ ಟಿಕೆಟ್ ಕೈ ತಪ್ಪಿದರೆ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ರಾಜಕೀಯ ನಡೆ ಏನಾಗಲಿದೆ? ಎಂಬ ಚರ್ಚೆಗಳು ನಡೆಯಲಾರಂಭಿಸಿವೆ. ಹಾವೇರಿ ಬಿಜೆಪಿ ಟಿಕೆಟ್ ರಾಜಕಾರಣ ಶಿವಮೊಗ್ಗ ಬಿಜೆಪಿ ಪಾಳೇಯದ ಮೇಲೂ ಪರಿಣಾಮ ಬೀರುವ ಸಾಧ‍್ಯತೆಗಳು ಗೋಚರವಾಗುತ್ತಿವೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *