
ಅಂಕೋಲಾ : ರಣ ಭೀಕರ ಮಳೆ ನಡುವೆಯೇ ಗುಡ್ಡ ಕುಸಿತ ಸ್ಥಳದಲ್ಲಿ ಜೀವದ ಹಂಗು ತೊರೆದು ಕಾರ್ಯಾಚರಣೆ ನಡೆಸುತ್ತಿರುವ ಸಿಬ್ಬಂದಿ..!
ಶಿರೂರು (ಅಂಕೋಲಾ) ಜು. 21: ‘ರಸ್ತೆಯ ಎಡ ಭಾಗದಲ್ಲಿ ಕುಸಿತಗೊಂಡಿರುವ ಗುಡ್ಡ… ಬಲ ಭಾಗದಲ್ಲಿ ಭೋರ್ಗರೆದು ಹರಿಯುತ್ತಿರುವ ಕಾಳಿ ನದಿ… ಇದೆಲ್ಲದರ ನಡುವೆ, ಒಂದೇ ಸಮನೆ ಸುರಿಯುತ್ತಿರುವ ರಣ ಭೀಕರ ಮಳೆ… ಜೀವದ ಹಂಗು ತೊರೆದು ಕಾರ್ಯಾಚರಣೆ ನಡೆಸುತ್ತಿರುವ ಸಿಬ್ಬಂದಿಗಳು..!’
ಇದು ಕಾರವಾರ ಜಿಲ್ಲೆ ಅಂಕೋಲಾ ತಾಲೂಕಿನ ಶಿರೂರು (karwar district ankola shiroor) ಬಳಿ ಇತ್ತೀಚೆಗೆ ಭಾರೀ ಮಳೆಯಿಂದ ಗುಡ್ಡ ಕುಸಿತಗೊಂಡ (land slide) ಪ್ರದೇಶದಲ್ಲಿ ಕಂಡುಬಂದ ದೃಶ್ಯಾವಳಿ. ಗೋವಾ ಮತ್ತು ಅಂಕೋಲಾ ನಡುವಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ (goa – ankola anational highway) ಜುಲೈ 16 ರಂದು ಗುಡ್ಡ ಕುಸಿತವಾಗಿತ್ತು.
ಈ ವೇಳೆ 10 ಜನ ಮಣ್ಣಿನಲ್ಲಿ ಸಿಲುಕಿ ಬಿದ್ದಿದ್ದರು. ಇಲ್ಲಿಯವರೆಗೆ ಏಳು ಜನರ ಶವಗಳು ಪತ್ತೆಯಾಗಿವೆ. ಇನ್ನೂ ಮೂವರು ಕಾಣೆಯಾಗಿದ್ದು ಅವರ ಪತ್ತೆಗಾಗಿ ಪರಿಹಾರ ಕಾರ್ಯಾಚರಣೆ ಜಾರಿಯಲ್ಲಿದೆ. ಘಟನೆಯಲ್ಲಿ ಖಾಲಿ ಗ್ಯಾಸ್ ಟ್ಯಾಂಕರ್ (gas tanker) ಹಾಗೂ ಭರ್ತಿಯಾಗಿರುವ ಗ್ಯಾಸ್ ಟ್ಯಾಂಕರ್ ಕೂಡ ಕೊಚ್ಚಿ ಹೋಗಿದ್ದವು. ಗುಡ್ಡದ ಬಳಿಯೇ ವಾಸವಾಗಿರುವ ಒಂದೇ ಕುಟುಂಬದವರು ಟೀ ಅಂಗಡಿಯನ್ನು ಇಟ್ಟುಕೊಂಡಿದ್ದರು. ಅವರಲ್ಲಿ ಐವರು ಭೂ ಕುಸಿತದಲ್ಲಿ ಸಾವನ್ನಪ್ಪಿದ್ದಾರೆ.
ಸಿಎಂ ಶ್ಲಾಘನೆ : ಭಾನುವಾರ ಸಿಎಂ ಸಿದ್ದರಾಮಯ್ಯ (cm siddaramaiah) ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಅತ್ಯಂತ ಅಪಾಯಕಾರಿ ಸನ್ನಿವೇಶದಲ್ಲಿ ಕಾರ್ಯಾಚರಣೆ (operation) ನಡೆಸುತ್ತಿರುವ SDRF ಮತ್ತು NDRF ತಂಡಗಳ ಜೊತೆ ಚರ್ಚೆ ನಡೆಸಿದ ಮುಖ್ಯಮಂತ್ರಿಗಳು, ಸಿಬ್ಬಂದಿಯ ಕಾರ್ಯಕ್ಷಮತೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಗುಡ್ಡ ಕುಸಿತದಿಂದ (hill collapse) ಮುಚ್ಚಿ ಹೋಗಿರುವ ರಸ್ತೆಯ ಎಡಭಾಗದಲ್ಲಿ ಕುಸಿತದ ಗುಡ್ಡ-ಬಲ ಭಾಗದಲ್ಲಿ ಭೋರ್ಗರೆದು ಹರಿಯುತ್ತಿರುವ ಕಾಳಿ ನದಿ (kali river) ಇದೆ. ಜೊತೆಗೆ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಲ್ಲಿ (heavy rainfall) ಮಣ್ಣಿನಡಿ ಸಿಲುಕಿರುವ (stuck under the soil) ಜೀವಗಳ ಪತ್ತೆ ಕಾರ್ಯ ಬಹಳ ಸವಾಲಿನದ್ದಾಗಿದೆ ಎಂದ ಮುಖ್ಯಮಂತ್ರಿಗಳು, ಸಿಬ್ಬಂದಿಯ ಶ್ರಮಕ್ಕೆ ಮೆಚ್ಚುಗೆ ಸೂಚಿಸಿದರು.
ನಾಲ್ಕು ತಂಡಗಳು ಗುಡ್ಡ ಕುಸಿತದ ಕೆಳಗೆ ಸಿಲುಕಿರುಬಹುದಾದವರ ಪತ್ತೆಗೆ ರಾಡಾರ್ ತಂತ್ರಜ್ಞಾನ (radar technology) ಬಳಸಿ ಕಾರ್ಯಾಚರಣೆ ನಡೆಸುತ್ತಿವೆ. ಇನ್ನು ನಾಲ್ಕು ತಂಡಗಳು ಮತ್ತೊಂದು ಬದಿಯ ನದಿಯೊಳಗೆ ಕಾರ್ಯಾಚರಣೆ ನಡೆಸುತ್ತಿವೆ. ಈ ಬಗ್ಗೆ ಹಲವು ದಿನಗಳಿಂದ ತಾಲ್ಲೂಕಿನಲ್ಲೇ ಮೊಕ್ಕಾಂ ಹೂಡಿರುವ ಕಂದಾಯ ಸಚಿವ ಕೃಷ್ಣಬೈರೇಗೌಡರು (krishna byre gowda) ಮುಖ್ಯಮಂತ್ರಿಗಳಿಗೆ ವಿವರಿಸಿದರು.
ಕಾರ್ಯಾಚರಣೆ ನಡೆಯುತ್ತಿರುವ ಜಾಗ ಮತ್ತು ಮಣ್ಣು ತುಂಬಿರುವ ರಸ್ತೆಯೂ ಕುಸಿಯುವ ಸಾಧ್ಯತೆಗಳ ಬಗ್ಗೆ ಮುಖ್ಯಮಂತ್ರಿಗಳು ಅಧಿಕಾರಿಗಳಿಂದ ಮಾಹಿತಿ ಪಡೆದು ಈ ಬಗ್ಗೆ ಹೆಚ್ಚು ಜಾಗರೂಕರಾಗಿರುವಂತೆ ಎಚ್ಚರಿಸಿದರು.
ಗುಡ್ಡ ಕುಸಿತದ ಸ್ಥಳ ಒಂದು ರೀತಿ ದ್ವೀಪದಂತಾಗಿದೆ. ಸುತ್ತಲೂ ಕಾಳಿ ನದಿ ಭೋರ್ಗರೆದು ಹರಿಯುತ್ತಿದೆ. ನಡುವೆ ಅರ್ಧ ಕುಸಿದ ಗುಡ್ಡ ನಿಂತಿದೆ. ಹೀಗಾಗಿ ಕಾರ್ಯಾಚರಣೆ ವೇಳೆ ಎದುರಾಗಬಹುದಾದ ಅಪಾಯಗಳು ಮತ್ತು ಸವಾಲುಗಳ ಬಗ್ಗೆ ಉನ್ನತ ಮಟ್ಟದ ತಜ್ಞರಿಂದ ಮಾಹಿತಿ ಪಡೆದು ತಂತ್ರಜ್ಞಾನದ ನೆರವು ಪಡೆಯುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
ಕಂದಾಯ ಸಚಿವ ಕೃಷ್ಣಬೈರೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಶಾಸಕ ಸತೀಶ್ ಸೈಲ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಎಲ್.ಕೆ. ಅತೀಕ್, ಶಾಲಿನಿ ರಜನೀಶ್ ಸೇರಿ ಕಂದಾಯ ಇಲಾಖೆಯ ಹಿರಿಯ ಅಧಿಕಾರಿ ಮತ್ತು ಸಿಬ್ಬಂದಿ ಸ್ಥಳದಲ್ಲಿದ್ದರು.
ಮಣ್ಣು ತೆರವು ಮತ್ತು ಶೋಧ ಕಾರ್ಯಾಚರಣೆಗೆ ಮಿಲಿಟರಿ ಹಾಗೂ ನೌಕಾಪಡೆ
ಶಿರೂರು, ಜುಲೈ 21: ಶಿರೂರು ಭೂಕುಸಿತದ (shiroor land slide) ಮಣ್ಣು ತೆರವು ಮತ್ತು ಶೋಧ ಕಾರ್ಯಾಚರಣೆಗೆ ಎಸ್.ಡಿ.ಆರ್. ಎಫ್ ನಿಂದ 46 ಜನ ಎನ್.ಡಿ.ಆರ್.ಎಫ್ ನಿಂದ 24 ಜನ ಹಾಗೂ 44 ಜನ ಮಿಲಿಟರಿಯವರು ಹಾಗೂ ನೌಕಾಪಡೆ ಯವರೂ ಕೂಡ ಕೈಜೋಡಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (cm siddaramaiah) ತಿಳಿಸಿದರು.
ಅವರು ಇಂದು ಶಿರೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ವಿಧಾನಸಭಾ ಅಧಿವೇಶನ ನಡೆಯುತ್ತಿದ್ದುದರಿಂದ ಇಂದು ಭೇಟಿ ನೀಡಿದ್ದೇನೆ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತ ಎಲ್ಲಾ ಕ್ರಮವನ್ನು ತೆಗೆದುಕೊಳ್ಳಬೇಕೆಂದು ಸೂಚಿಸಿದ್ದೆ. ಸಾವನ್ನಪ್ಪಿದವರ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಬೇಕೆಂದು ಘೋಷಿಸಲಾಗಿದೆ. ಈಗಾಗಲೇ ಅದನ್ನು ವಿತರಿಸಲಾಗಿದೆ. ಒಂದು ವೇಳೆ ಭೂ ಕುಸಿತದಲ್ಲಿ ಇನ್ಯಾರಾದರೂ ಸಾವನ್ನಪ್ಪಿದ್ದಾರೆ ಅವರಿಗೂ 5 ಲಕ್ಷ ರೂಪಾಯಿಗಳ ಪರಿಹಾರವನ್ನು ನೀಡಲಾಗುವುದು ಎಂದರು.
ನೌಕಾದಳ ಹಾಗೂ ರಕ್ಷಣಾ ತಂಡದವರಿಗೆ (Navy and Defense Forces) ಎಲ್ಲೆಡೆ ಹುಡುಕುವಂತೆ ಸೂಚನೆ ನೀಡಲಾಗಿದೆ ಎಂದರು. 10 ಜನರು ಕಾಣೆಯಾಗಿದ್ದಾರೆ. ಘಟನೆ ನಡೆದ ದಿನವೇ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯರನ್ನೂ ಹಾಗೂ ಶಾಸಕರನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದರು.
ಭೂ ಕುಸಿತವು ಪ್ರಕೃತಿ ವಿಕೋಪವಲ್ಲ. ಐ.ಆರ್.ಬಿ ಸಂಸ್ಥೆಯ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಆಗಿದೆ. ಅವರ ವಿರುದ್ಧ ಯಾವುದೇ ಕ್ರಮವನ್ನು ಕೈಗೊಂಡಿಲ್ಲ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಯಾರೇ ತಪ್ಪು ಮಾಡಿದರೂ ಕೂಡ ಅವರ ಮೇಲೆ ಕ್ರಮ ವಹಿಸಲಾಗುವುದು, ರಸ್ತೆ ನಿರ್ಮಾಣ ಮಾಡಿರುವವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು. ಪರಿಹಾರ ಕಾಮಗಾರಿ ಮುಗಿದ ಮೇಲೆ ಪ್ರಕರಣದ ಬಗ್ಗೆ ಗಮನಹರಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.