
bengaluru | ಸುಳ್ಳು ಸುದ್ದಿ ಹರಡುವವರ ವಿರುದ್ದ ಕಠಿಣ ಕ್ರಮಕ್ಕೆ ಸಿಎಂ ಸೂಚನೆ!
ಬೆಂಗಳೂರು (bangalore), ಮೇ 10: ರಾಜ್ಯದಲ್ಲಿ ಸುಳ್ಳು ಸುದ್ದಿಗಳಿಗೆ ಕಡ್ಡಾಯವಾಗಿ ಕಡಿವಾಣ ಹಾಕಬೇಕು. ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಿ.ಎಂ ಸಿದ್ದರಾಮಯ್ಯ ಸ್ಪಷ್ಟ ಸೂಚನೆ ನೀಡಿದ್ದಾರೆ.
ಭಾರತ – ಪಾಕಿಸ್ತಾನ ನಡುವೆ ಉಂಟಾಗಿರುವ ಉದ್ವಿಗ್ನ ಸ್ಥಿತಿಯ ಹಿನ್ನೆಲೆಯಲ್ಲಿ, ಬೆಂಗಳೂರಿನ ವಿಧಾನಸೌಧದಲ್ಲಿ ಮೇ 10 ರಂದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ನಾಗರೀಕರ ರಕ್ಷಣಾ ಕಾರ್ಯಚಟುವಟಿಕೆಗಳ ಕುರಿತಂತೆ ಹಿರಿಯ ಪೋಲಿಸ್ ಅಧಿಕಾರಿಗಳು, ಮಹಾನಗರಗಳ ಆಯುಕ್ತರು, ಜಿಲ್ಲಾಧಿಕಾರಿಗಳು , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಸಿಎಂ ಈ ಸೂಚನೆ ನೀಡಿದ್ದಾರೆ.
ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವುದನ್ನು ತಪ್ಪಿಸಲು ಕಟ್ಟೆಚ್ಚರ ವಹಿಸಬೇಕು. ರಾಜ್ಯದ ಕಾನೂನು ಸುವ್ಯವಸ್ಥೆಗಿಂತ ಯಾವುದೂ ದೊಡ್ಡದಲ್ಲ. ರಾಜ್ಯದ ಜನರ ರಕ್ಷಣೆಗೆ ಮೊದಲ ಆದ್ಯತೆ ನೀಡಿ ಎಂದು ತಿಳಿಸಿದ್ದಾರೆ.
ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಯನ್ನು ಹರಡುವುದನ್ನು ತಪ್ಪಿಸಲು ಕಟ್ಟೆಚ್ಚರ ವಹಿಸಬೇಕು. ಸಾಮಾಜಿಕ ಜಾಲತಾಣಗಳ ಮೇಲೆ ನಿರಂತರ ನಿಗಾ ವಹಿಸಬೇಕು. ವದಂತಿ ಹರಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಫ್ಯಾಕ್ಟ್ ಚೆಕ್ ನಿರಂತರವಾಗಿ ಮಾಡಬೇಕು. ಸುಳ್ಳು ಸುದ್ದಿ ಬಗ್ಗೆ ಮೂಲದಲ್ಲೇ ಅಧಿಕೃತ ಸ್ಪಷ್ಟೀಕರಣ ನೀಡಬೇಕು ಎಂದು ಸೂಚಿಸಿದ್ದಾರೆ.
ಗುಪ್ತಚರ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಬೇಕು. ಸಾರ್ವಜನಿಕ ಸೇವೆ ಒದಗಿಸುವ ತಾಣಗಳಲ್ಲಿ ಹೆಚ್ಚಿನ ಸುರಕ್ಷತೆಯನ್ನು ಖಾತ್ರಿಪಡಿಸಬೇಕು. ಅಕ್ರಮ ದಾಸ್ತಾನು ಮತ್ತು ಕಾಳಸಂತೆಯ ಮೇಲೆ ನಿರಂತರ ನಿಗಾವಹಿಸಿ, ಅನಗತ್ಯವಾಗಿ ಸಾಮಾಗ್ರಿಗಳ ಬೆಲೆ ಹೆಚ್ಚು ಮಾಡುವ ಪ್ರಯತ್ನಗಳನ್ನು ತಡೆಯಬೇಕು ಎಂದರು.
ಕಾನೂನು ಸುವ್ಯವಸ್ಥೆಯೊಂದಿಗೆ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಯಾವುದೇ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿರಬೇಕು. ಈ ಕುರಿತು ರಾಜ್ಯ ಮಟ್ಟದಲ್ಲಿ ಹಾಗೂ ಜಿಲ್ಲಾ ಮಟ್ಟದಲ್ಲಿ ಮಾರ್ಗಸೂಚಿಯನ್ನು ಸಿದ್ಧಪಡಿಸಬೇಕು. ಪ್ರಮುಖ ಸ್ಥಳಗಳಲ್ಲಿ ಮಾಕ್ ಡ್ರಿಲ್ #MockDrill ನಡೆಸಬೇಕು. ರಾಷ್ಟ್ರೀಯ ಪ್ರಮುಖ ಸ್ಥಳಗಳಲ್ಲಿ ಹೆಚ್ಚಿನ ಭದ್ರತೆಯನ್ನು ಕಾಪಾಡಬೇಕು.
ಅಗ್ನಿಶಾಮಕ ದಳದ ಕೇಂದ್ರಗಳು ದಿನದ 24ಗಂಟೆ ಸನ್ನದ್ಧ ಸ್ಥಿತಿಯಲ್ಲಿರಬೇಕು. ಎಲ್ಲಾ ಜಿಲ್ಲೆಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆದು, ಸಹಾಯವಾಣಿ ಆರಂಭಿಸಬೇಕು. ಪೌರ ರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಿ, ಅವರಿಗೆ ಸೂಕ್ತ ತರಬೇತಿಯನ್ನು ಒದಗಿಸಬೇಕು. ಎಲ್ಲಾ ಜಿಲ್ಲೆಗಳಲ್ಲಿ ಪೌರ ರಕ್ಷಣಾ ವ್ಯವಸ್ಥೆಗೆ ಸ್ವಯಂಸೇವಕರನ್ನು ನೇಮಕ ಮಾಡುವ ಕಾರ್ಯ ಆರಂಭಿಸಬೇಕು. ಆನ್ಲೈನ್ನಲ್ಲಿ ಹೆಸರು ನೋಂದಾಯಿಸಲು ವ್ಯವಸ್ಥೆ ಕಲ್ಪಿಸಬೇಕು ಎಂದು ಹೇಳಿದರು.
ಕರಾವಳಿಯಲ್ಲಿ ಭದ್ರತೆಯನ್ನು ಬಿಗಿಗೊಳಿಸಬೇಕು. ಎಲ್ಲಾ ಪ್ರಮುಖ ಸ್ಥಳಗಳಲ್ಲಿ ನಿರಂತರ ಗಸ್ತು ವ್ಯವಸ್ಥೆ ಮಾಡಬೇಕು. ಕೋಮು ಸಾಮರಸ್ಯ ಕದಡುವ ಪ್ರಯತ್ನಗಳ ಮೇಲೆ ನಿಗಾ ಇರಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಕೋಮು ಗೂಂಡಾಗಳ ಪಟ್ಟಿ ಪರಿಷ್ಕರಿಸಬೇಕು. ಅವರ ಮೇಲೆ ನಿಗಾ ಇಡಬೇಕು.
ಎಲ್ಲಾ ಕಮಿಷನರೇಟ್ ಗಳಲ್ಲಿ ಅಲರ್ಟ್ ಆಗಿರಬೇಕು. ಪ್ರಮುಖ ಸ್ಥಾವರಗಳಲ್ಲಿ ಭದ್ರತೆಯನ್ನು ಹೆಚ್ಚಿಸಬೇಕು. ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳಬೇಕು. ಸುರಕ್ಷತೆ ಕುರಿತಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ನು ಸಹ ಕಟ್ಟುನಿಟ್ಟಿನಿಂದ ಪಾಲಿಸಬೇಕು ಎಂದು ಹೇಳಿದ್ದಾರೆ.
ಸಭೆಯಲ್ಲಿ ಗೃಹ ಸಚಿವರಾದ. ಡಾ ಜಿ ಪರಮೇಶ್ವರ್, ಗ್ರಾಮೀಣಾಭಿವೃದ್ಧಿ ಸಚಿವರಾದ ಪ್ರಿಯಾಂಕ ಖರ್ಗೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷರಾದ ರೇವಣ್ಣ, ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್, ಪೊಲೀಸ್ ಮಹಾ ನಿರ್ದೇಶಕರಾದ ಅಲೋಕ್ ಮೋಹನ್ , ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ದಯಾನಂದ ಹಾಗೂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Bengaluru, May 10: CM Siddaramaiah has given clear instructions to the officials that there should be a mandatory crackdown on fake news in the state. Strict action should be taken against those spreading fake news.
The CM gave this instruction during a video conference with officials on law and order and citizen protection activities in the state on May 10 at the Vidhan Soudha in Bengaluru, in the wake of the tense situation between India and Pakistan.
#siddaramaiah #MockDrill #IndiaPakistanConflict #IndianArmy #IndiaPakistanTensions