
ಚೆಕ್’ಪೋಸ್ಟ್ ಗಳಲ್ಲಿ ಕೋಟಿ ಕೋಟಿ ರೂಪಾಯಿ ವಶ..!
ಶಿವಮೊಗ್ಗ, ಎ. 25: ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ತೆರೆಯಲಾಗಿರುವ ಚೆಕ್ ಪೋಸ್ಟ್ ಗಳಲ್ಲಿ, ಸೂಕ್ತ ದಾಖಲೆಯಿಲ್ಲದೆ ವಾಹನಗಳಲ್ಲಿ ಕೊಂಡೊಯ್ಯಲಾಗುತ್ತಿದ್ದ ಕೋಟ್ಯಾಂತರ ರೂಪಾಯಿ ಹಾಗೂ ಲಕ್ಷಾಂತರ ರೂ. ಮೌಲ್ಯದ ಸೀರೆಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಕುರಿತಂತೆ ಜಿಲ್ಲಾ ಪೊಲೀಸ್ ಇಲಾಖೆಯು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ವಿವರ ಮುಂದಿನಂತಿದೆ.
ಹಣದ ವಿವರ: ಸೊರಬ ತಾಲೂಕು ಆನವಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ, ಸೂಕ್ತ ದಾಖಲೆಯಿಲ್ಲದೆ ವಾಹನದಲ್ಲಿ ಸಾಗಾಣೆ ಮಾಡುತ್ತಿದ್ದ 5 ಕೋಟಿ ರೂ. ವಶಕ್ಕೆ ಪಡೆಯಲಾಗಿದೆ. ಇದೇ ಠಾಣಾ ವ್ಯಾಪ್ತಿಯಲ್ಲಿ ಎ. 24 ರಂದು 12 ಲಕ್ಷ ರೂ. ಅಮಾನತ್ತು ಪಡಿಸಿಕೊಳ್ಳಲಾಗಿತ್ತು.
ಮಂಗಳವಾರ ಸಾಗರ ಪಟ್ಟಣದ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ವಾಹನವೊಂದರಲ್ಲಿ ಕೊಂಡೊಯ್ಯಲಾಗುತ್ತಿದ್ದ 3.75 ಕೋಟಿ ರೂ. ವಶಕ್ಕೆ ಪಡೆಯಲಾಗಿದೆ.
ಶಿಕಾರಿಪುರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 98 ಲಕ್ಷ ರೂ. ಹಾಗೂ ಅದೇ ತಾಲೂಕಿನ ಶಿರಾಳಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 45 ಲಕ್ಷ ರೂ. ವಶಕ್ಕೆ ಪಡೆಯಲಾಗಿದೆ.
ಸೀರೆಗಳು ವಶಕ್ಕೆ: ತೀರ್ಥಹಳ್ಳಿ ತಾಲೂಕಿನ ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಯಿಲ್ಲದೆ ವಾಹನದಲ್ಲಿ ಕೊಂಡೊಯ್ಯುತ್ತಿದ್ದ 59 ಲಕ್ಷ ರೂ. ಮೌಲ್ಯದ ಸೀರೆಗಳನ್ನು ವಶಕ್ಕೆ ಪಡೆಯಲಾಗಿದೆ.
ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಯಿಲ್ಲದೆ ಸಂಗ್ರಹಿಸಿಟ್ಟಿದ್ದ 5.40 ಲಕ್ಷ ರೂ. ಮೌಲ್ಯದ ಸೀರೆ ವಶಕ್ಕೆ ಪಡೆಯಲಾಗಿದೆ.