ಬಾಲಕಿ ಅನುಮಾನಾಸ್ಪದ ಸಾವು ಪ್ರಕರಣ : ತನಿಖಾ ಸಮಿತಿ ರಚನೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸೂಚನೆ

ಬಾಲಕಿ ಅನುಮಾನಾಸ್ಪದ ಸಾವು ಪ್ರಕರಣ : ತನಿಖಾ ಸಮಿತಿ ರಚನೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸಭೆ ಸೂಚನೆ ‘ವಸತಿ ಶಾಲೆಯ ಮಾನ್ಯತೆ ರದ್ದು’ : ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಮಾಹಿತಿ

‘ವಸತಿ ಶಾಲೆಯ ಮಾನ್ಯತೆ ರದ್ದು’ : ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಮಾಹಿತಿ

ಶಿವಮೊಗ್ಗ, ಜೂ. 15: ಇತ್ತೀಚೆಗೆ ಸಾಗರ ಪಟ್ಟಣದ ಖಾಸಗಿ ವಸತಿ ಶಾಲೆಯೊಂದರಲ್ಲಿ ಅಪ್ರಾಪ್ತ ಬಾಲಕಿಯ ಅಸಹಜ ಸಾವಿನ ಘಟನೆಗೆ ಸಂಬಂಧಿಸಿದಂತೆ, ಗುರುವಾರ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಪದಾಧಿಕಾರಿಗಳು ಖುದ್ದು ವಸತಿ ಶಾಲೆಗೆ  ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳೀಯರಿಂದ ಮಾಹಿತಿ ಪಡೆದುಕೊಂಡಿದ್ದಾರೆ.

ನಂತರ ಶಿವಮೊಗ್ಗದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಗದ ಸದಸ್ಯರು ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.

ಸಭೆಯಲ್ಲಿ ಆಯೋಗದ ಸದಸ್ಯ ವೆಂಕಟೇಶ್ ಅವರು ಮಾತನಾಡಿ, ಜಿಲ್ಲೆಯಲ್ಲಿ ನಡೆಯುವ ಇಂತಹ ಘಟನೆಗಳ ಕುರಿತಂತೆ ಸೂಕ್ಷ್ಮವಾಗಿ ಅವಲೋಕಿಸಬೇಕು. ಸಕಾಲದಲ್ಲಿ ಅಗತ್ಯ ಕ್ರಮ ವಹಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಈವರೆಗೆ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಕುರಿತು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಪ್ರಸ್ತುತ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳ ಸುರಕ್ಷತೆ ಹಾಗೂ ಭವಿಷ್ಯದ ದೃಷ್ಠಿಯಿಂದ ಮಕ್ಕಳ ಪೋಷಕರ ಅನುಮತಿ ಪಡೆದು, ಸಮೀಪದ ಸರ್ಕಾರಿ ಹಾಸ್ಟೆಲ್‌ಗಳಲ್ಲಿ ಇರಿಸಲಾಗಿದೆ. ಮಕ್ಕಳ ಶೈಕ್ಷಣಿಕ ಚಟುವಟಿಕೆಗಳನ್ನು ಮುಂದುವರೆಸಲು ಕ್ರಮಕೈಗೊಳ್ಳಬೇಕು. ಸದರಿ ಶಿಕ್ಷಣ ಸಂಸ್ಥೆಯಲ್ಲಿ ನೆರೆ ರಾಜ್ಯದ ಇಬ್ಬರು ವಿದ್ಯಾರ್ಥಿಗಳಿದ್ದು, ಅವರ ಸುರಕ್ಷತೆ ಮತ್ತು ಶಿಕ್ಷಣಕ್ಕೆ ಗಮನಹರಿಸಬೇಕು. ಅಗತ್ಯವಿದ್ದಲ್ಲಿ ಮಕ್ಕಳನ್ನು ತಮ್ಮ ಹುಟ್ಟೂರಿಗೆ ಕಳುಹಿಸಲು ಕ್ರಮ ಕೈಗೊಳ್ಳುವಂತೆ ಸಲಹೆ ನೀಡಿದರು.

ಜಿಲ್ಲೆಯಲ್ಲಿ ನಡೆಸುತ್ತಿರುವ ಖಾಸಗಿ ವಸತಿ ಶಿಕ್ಷಣ ಸಂಸ್ಥೆಗಳ ಆಡಳಿತ ಪ್ರತಿನಿಧಿಗಳೊಂದಿಗೆ ಈ ರೀತಿಯ ಅಹಿತಕರ ಘಟನೆಗಳಾಗದಂತೆ ಕ್ರಮವಹಿಸಲು ಶೀಘ್ರದಲ್ಲಿ ದಿನಾಂಕ ನಿಗದಿಪಡಿಸಿ ಸಭೆ ಆಯೋಜಿಸುವಂತೆ ಸಲಹೆ ನೀಡಿದ್ದಾರೆ.

ತನಿಖಾ ಸಮಿತಿ: ಪಂಚಾಯಿತಿ ಮಟ್ಟದಲ್ಲಿ ಮಕ್ಕಳ ರಕ್ಷಣಾ ಸಮಿತಿಗಳನ್ನು ರಚಿಸಬೇಕು. ಈ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಅಲ್ಲಿನ ಸಿಬ್ಬಂದಿಗಳಿಗೆ ಸೂಕ್ತ ತರಬೇತಿ ನೀಡಬೇಕು. ಶಿಕ್ಷಕರಿಗೆ ಫೋಕ್ಸೊ ಮತ್ತು ಜೆ.ಜೆ. ಆ್ಯಕ್ಟ್ ಕುರಿತು ಮಾಹಿತಿ ಒದಗಿಸುವ ಅಗತ್ಯವಿದೆ ಎಂದರು.

ಸದರಿ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಎಲ್ಲಾ ಮಕ್ಕಳ ಸ್ಥಿತಿಗತಿಗಳ ಸಮಗ್ರ ವರದಿ ಸಲ್ಲಿಸುವಂತೆ ಸೂಚಿಸಿದ ಅವರು, ಈ ವರದಿಯ ಆಧಾರದ ಮೇಲೆ ಮಕ್ಕಳಿಗೆ ಸರ್ಕಾರದ ಸೌಲಭ್ಯಗಳನ್ನು ದೊರಕಿಸಲು ಸಾಧ್ಯವಾಗಲಿದೆ. ಈ ಘಟನೆಯ ವಾಸ್ತವಾಂಶ ಅರಿತು ಕ್ರಮ ಕೈಗೊಳ್ಳಲು ಕೂಡಲೆ ತನಿಖಾ ಸಮಿತಿ ರಚಿಸುವಂತೆ ಅವರು ಸೂಚಿಸಿದ್ದಾರೆ.

ಮಾನ್ಯತೆ ರದ್ದು: ಘಟನೆಯ ನಂತರ ಸದರಿ ಶಾಲೆಗೆ ನೀಡಲಾಗಿದ್ದ ಮಾನ್ಯತೆಯನ್ನು ರದ್ದುಪಡಿಸಲಾಗಿದೆ. ಅಲ್ಲದೇ ಈ ಘಟನೆಗೂ ಮುನ್ನವೇ ಜಿಲ್ಲೆಯಲ್ಲಿನ ಖಾಸಗಿ ವಸತಿ ಶಿಕ್ಷಣ ಸಂಸ್ಥೆಗಳ ಕುರಿತು ಗಮನಹರಿಸಲು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಅವರಿಂದ ಕಾಲಕಾಲಕ್ಕೆ ಮಾಹಿತಿ ಪಡೆಯಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಹೇಳಿದರು.

ಪ್ರಸ್ತುತ ಮೃತ ವಿದ್ಯಾರ್ಥಿನಿಯ ಪೋಷಕರಿಗೆ ಪರಿಹಾರ ಧನ ವಿತರಿಸಲಾಗುವುದು ಎಂದ ಜಿಲ್ಲಾಧಿಕಾರಿಗಳು, ಖಾಸಗಿ ಶಿಕ್ಷಣ ಸಂಸ್ಥೆಗಳು ಜೆ.ಜೆ.ಆ್ಯಕ್ಟ್ ಅಡಿಯಲ್ಲಿ ನೊಂದಾಯಿಸಿಕೊಳ್ಳಲು ಕಾನೂನನ್ನು ರೂಪಿಸಿ ಅನುಷ್ಠಾನಕ್ಕೆ ತರುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ಸಭೆಯಲ್ಲಿ ಮಕ್ಕಳ ರಕ್ಷಣಾ ಆಯೋಗದ ಸದಸ್ಯರಾದ ಎಸ್.ಮಂಜು, ಡಾ.ತಿಪ್ಪೇಸ್ವಾಮಿ ಕೆ.ಟಿ., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್, ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ.ನಾಗರಾಜನಾಯ್ಕ್, ಡಾ.ಮಲ್ಲಿಕಾರ್ಜುನ ಗೌಡ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪರಮೇಶ್ವರಪ್ಪ, ಸಮಾಜ ಕಲ್ಯಾಣಾಧಿಕಾರಿ ಶ್ರೀನಿವಾಸ್, ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿ ಶೋಭಾ, ಮಕ್ಕಳ ರಕ್ಷಣಾ ಘಟಕದ ಅಧ್ಯಕ್ಷೆ ರೇಖಾ ಮೊದಲಾದವರಿದ್ದರು.

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →