ಕಾವೇರಿ ಜಲ ವಿವಾದ : ಕೇಂದ್ರ ಜಲ ಶಕ್ತಿ ಸಚಿವರಿಂದ ಸಕಾರಾತ್ಮಕ ಪ್ರತಿಕ್ರಿಯೆ – ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಸೆ. 21: ಕಾವೇರಿ ನೀರು ಹಂಚಿಕೆ ಸಂಬಂಧ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರ ಜತೆ ಸಭೆ ನಡೆಸಿದ್ದೇವೆ. ಸದ್ಯಕ್ಕೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು  ಮತ್ತು ಜಲ ಸಂಪನ್ಮೂಲ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಅವರು ಜಂಟಿ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು. 

ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರ ಜತೆಗಿನ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. 

ನಮ್ಮ ಸಂಕಷ್ಟದ ಪರಿಸ್ಥಿತಿಯನ್ನು ಕೇಂದ್ರ ಸಚಿವರಿಗೆ ಸಮರ್ಥವಾಗಿ ತಿಳಿಸಿದ್ದೇವೆ. ಅವರ ಸ್ಪಂದನೆ ಸಕಾರಾತ್ಮಕವಾಗಿತ್ತು. ಸುಪ್ರೀಂಕೋರ್ಟ್ ನಲ್ಲೂ ನಮ್ಮ ಮನವಿ ವಿಚಾರಣೆಗೆ ಬರಲಿದೆ. ಸುಪ್ರೀಂಕೋರ್ಟ್ ನಮ್ಮ ಮನವಿಯನ್ನು ಪುರಸ್ಕರಿಸಿ CWMC ಆದೇಶಕ್ಕೆ ತಡೆಯಾಜ್ಞೆ ನೀಡುವ ಭರವಸೆ ಇದೆ. ಹೀಗಾಗಿ ನಾವು ಸುಪ್ರೀಂಕೋರ್ಟ್ ಆದೇಶಕ್ಕಾಗಿ ಕಾಯುತ್ತಿದ್ದೇವೆ. ಬಳಿಕ ಮುಂದಿನ ಕ್ರಮಗಳ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ವಿವರಿಸಿದರು. 

ನಾವು ಪ್ರಧಾನಿ ಅವರ ಸಮಯವನ್ನೂ ಕೇಳಿದ್ದೇವೆ. ಸಮಯ ಸಿಕ್ಕರೆ ಭೇಟಿ ಆಗುತ್ತೇವೆ. ನಾಲ್ಕೂ ರಾಜ್ಯದವರನ್ನು ಕರೆಸಿ ಮಾತನಾಡಲು ಮಧ್ಯ ಪ್ರವೇಶಿಸಿ ಎಂದು ಪ್ರಧಾನಿಗೆ ಮನವಿ ಮಾಡುತ್ತೇವೆ. 

*ಗೋಷ್ಠಿಯ ಇತರೆ ಹೈಲೈಟ್ಸ್*

*ನಮಗೆ ಬೆಳೆ ರಕ್ಷಣೆ, ಕುಡಿಯುವ ನೀರು ಮತ್ತು ಕೈಗಾರಿಕೆಗಳಿಗೆ 106 ಟಿಎಂಸಿ ನೀರು ಅಗತ್ಯವಿದೆ . ಆದರೆ ನಮ್ಮ ನಾಲ್ಕೂ ಜಲಾಶಯಗಳಿಂದ ಕೇವಲ 51 ಟಿಎಂಸಿ ನೀರು ಇದೆ ಎನ್ನುವುದನ್ನು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಸಿದ್ದೇವೆ.

*123 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಳೆ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ಬಿದ್ದು ಜಲಾಶಯಗಳ ಒಳ ಹರಿವು ಇಲ್ಲವಾಗಿದೆ ಎಂದು ಸಚಿವರ ಗಮನ ಸೆಳೆದಿದ್ದೇವೆ.

*ನಮ್ಮ ರೈತರು ಮತ್ತು ನಾನಾ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಬಿಡುವುದಕ್ಕೆ ನಮ್ಮ ಬಳಿ ನೀರೇ ಇಲ್ಲ ಎಂದೂ ಹೇಳಿದ್ದೇವೆ.

*ಸುಪ್ರೀಂಕೋರ್ಟ್ ಗೂ ನಮ್ಮ ಸಂಕಷ್ಟದ ಪರಿಸ್ಥಿತಿಯನ್ನು ನಮ್ಮ ಲೀಗಲ್ ತಂಡ ಮನವರಿಕೆ ಮಾಡಿಸಲು ಯತ್ನಿಸುತ್ತಿದೆ.

*ನಾಲ್ಕೂ ಜಲಾಶಯಗಳ ಒಳ ಹರಿವು 11 ರಿಂದ 8 ಕ್ಯೂಸೆಕ್ಸ್ ಗೆ ಇಳಿದಿದೆ.

ಗೋಷ್ಠಿಯಲ್ಲಿ ಕಾನೂನು ಸಚಿವ ಎಚ್.ಕೆ.ಪಾಟೀಲ್, ಕೃಷಿ ಸಚಿವ ಚಲುವರಾಯಸ್ವಾಮಿ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿಗಳಾದ ಟಿ.ಬಿ.ಜಯಚಂದ್ರ, ಪ್ರಕಾಶ್ ಹುಕ್ಕೇರಿ, ಸಂಸದ ಡಿ.ಕೆ.ಸುರೇಶ್ ಮುಂತಾದವರು ಉಪಸ್ಥಿತರಿದ್ದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *