ಫೆ.27 ರಂದು ಪ್ರಧಾನಿ ನರೇಂದ್ರ ಮೋದಿ ಭೇಟಿ : ಅಧಿಕಾರಿಗಳಿಂದ ಪೂರ್ವಸಿದ್ಧತಾ ಸಭೆ

ಶಿವಮೊಗ್ಗ, ಫೆ.9: ವಿಮಾನ ನಿಲ್ದಾಣ ಲೋಕಾರ್ಪಣೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫೆಬ್ರವರಿ 27ರಂದು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಸಿದ್ಧತೆಗಳ ಬಗ್ಗೆ ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ಗುರುವಾರ ಅಧಿಕಾರಿಗಳ ಪೂರ್ವಸಿದ್ಧತಾ ಸಭೆ ನಡೆಸಿದರು.

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಫೆಬ್ರವರಿ 27ರಂದು ಪ್ರಧಾನಿ ಅವರು ಶಿವಮೊಗ್ಗ ಆಗಮಿಸುತ್ತಿದ್ದು, ವಿಮಾನ ನಿಲ್ದಾಣ ಲೋಕಾರ್ಪಣೆ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮ ಸುಸೂತ್ರವಾಗಿ ನಡೆಯಲು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಪ್ರಧಾನಿ ಅವರು ಜಿಲ್ಲೆಯ ರೈಲ್ವೇ ಯೋಜನೆಗಳಿಗೆ ಚಾಲನೆ ನೀಡಲಿದ್ದು, ಸಿರಿಧಾನ್ಯ ಮೇಳದಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಿ ಅವರ ಭೇಟಿ ಸಂದರ್ಭದಲ್ಲಿ ಸೂಕ್ತ ಟ್ರಾಫಿಕ್ ವ್ಯವಸ್ಥೆ, ಬೆಂಗಾವಲು ವಾಹನಗಳು, ಸುರಕ್ಷತಾ ಕ್ರಮಗಳು, ವೇದಿಕೆ, ಗ್ರೀನ್ ರೂಂ, ಅತಿಥಿ ಗಣ್ಯರಿಗೆ ವಾಸ್ತವ್ಯ ಮತ್ತು ಆತಿಥ್ಯ ವ್ಯವಸ್ಥೆ, ಇಂಟರ್‌ನೆಟ್ ಸಂಪರ್ಕ, ಸಿಸಿಟಿವಿ ಅಳವಡಿಕೆ, ನಿರಂತರ ವಿದ್ಯುತ್ ಸಂಪರ್ಕ ಸೇರಿದಂತೆ ಎಲ್ಲಾ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಪ್ರತಿಯೊಂದು ಕಾರ್ಯದ ಮೇಲುಸ್ತುವಾರಿಗೆ ಜಿಲ್ಲಾಮಟ್ಟದ ಅಧಿಕಾರಿಗಳನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗುವುದು ಎಂದರು.

ಸ್ಥಳೀಯವಾಗಿ ಅಂಬ್ಯುಲೆನ್ಸ್, ಅಗ್ನಿಶಾಮಕ ದಳದ ವಾಹನ ವ್ಯವಸ್ಥೆಯನ್ನು ಮಾಡಬೇಕು. ಪೊಲೀಸ್ ಬ್ಯಾಂಡ್ ವತಿಯಿಂದ ರಾಷ್ಟ್ರ ಗೀತೆ ನುಡಿಸಲಾಗುವುದು. ಆಹಾರದ ಸುರಕ್ಷತೆ, ಬೆಂಕಿ ಸುರಕ್ಷತೆ ಮತ್ತು ವಿದ್ಯುತ್ ಸುರಕ್ಷತೆಯನ್ನು ಸಂಬಂಧಪಟ್ಟ ಇಲಾಖಾಧಿಕಾರಿಗಳು ಪ್ರಮಾಣೀಕರಿಸಬೇಕು. ಅತಿಥಿಗಳಿಗೆ ಸೂಕ್ತ ವಾಸ್ತವ್ಯಕ್ಕಾಗಿ ಎಲ್ಲಾ ಸರ್ಕಾರಿ ಅತಿಥಿ ಗೃಹಗಳು ಮತ್ತು ನಗರದ ಲಾಡ್ಜ್ಗಳನ್ನು ಕಾಯ್ದಿರಿಸಬೇಕು. ಕಾರ್ಯಕ್ರಮದ ಆಮಂತ್ರಣ ಪತ್ರಿಕೆ, ವೇದಿಕೆ ಹಾಗೂ ಮುಂಭಾಗದಲ್ಲಿ ಆಸನ ವ್ಯವಸ್ಥೆ, ಪ್ರವೇಶ ದ್ವಾರ, ಶೌಚಾಲಯಗಳು ಸೇರಿದಂತೆ ಪ್ರತಿಯೊಂದು ಅಂಶಗಳನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸಬೇಕು. ಅಧಿಕಾರಿಗಳು ತಮಗೆ ನೀಡಲಾಗುವ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸಿ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಹೇಳಿದರು.

ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಡಿ.ಪ್ರಕಾಶ್, ಮುಖ್ಯಮಂತ್ರಿ ಅವರ ವಿಶೇಷಾಧಿಕಾರಿ ರಾಜಪ್ಪ, ಎಎಸ್ಪಿ ಅನಿಲ್ ಕುಮಾರ್ ಭೂಮರಡ್ಡಿ, ಪಿಡಬ್ಲುಡಿ ಚೀಫ್ ಇಂಜಿನಿಯರ್ ಕಾಂತರಾಜು, ಅಪರ ಜಿಲ್ಲಾಧಿಕಾರಿ ಎಸ್.ಎಸ್.ಬಿರಾದಾರ್, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →