‘ಝಿಕಾ ವೈರಸ್ ಸೋಂಕಿನ ಬಗ್ಗೆ ಭಯಬೇಡ – ಎಚ್ಚರವಿರಲಿ’ : ನಾಗರೀಕರಿಗೆ ಶಿವಮೊಗ್ಗ ಡಿಸಿ ಸಲಹೆ

ಶಿವಮೊಗ್ಗ, ನ. 4 : ಝಿಕಾ ಎಂಬುದು ಒಂದು ವೈರಸ್ ಸೋಂಕು. ಡೆಂಗೀ, ಚಿಕೂನ್‍ಗುನ್ಯ ರೋಗ ಹರಡುವ ಈಡಿಸ್ ಜಾತಿಯ ಸೊಳ್ಳೆಗಳು ಝಿಕಾ ವೈರಸ್ ಸೋಂಕನ್ನು ಸಹ ಹರಡುತ್ತವೆ. ಈ ರೋಗದ ಬಗ್ಗೆ ಭಯ ಬೇಡ. ಆದರೆ ಎಚ್ಚರಿಕೆಯಿಂದ ಇರಬೇಕೆಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿದ್ದಾರೆ.

ಜ್ವರ, ತಲೆನೋವು, ಕಣ್ಣು ಕೆಂಪಾಗುವಿಕೆ, ಗಂಧೆಗಳು (ದದ್ದುಗಳು), ಕೀಲು ಮತ್ತು ಸ್ನಾಯುಗಳಲ್ಲಿ ನೋವು ಹಾಗೂ ಇತರೆ ಲಕ್ಷಣಗಳು ಕಾಣಿಸಿಕೊಳ್ಳುತ್ತದೆ. ಬಹುತೇಕ ಝಿಕಾ ಸೋಂಕಿತರಿಗೆ ರೋಗ ಲಕ್ಷಣಗಳು ಕಂಡುಬರುವುದಿಲ್ಲ. ಉಳಿದಂತೆ ರೋಗಲಕ್ಷಣಗಳ ಸೌಮ್ಯ ಹಾಗೂ ಸಾಧಾರಣ ಸ್ವರೂಪವಾಗಿದ್ದು, 2 ರಿಂದ 7 ದಿನಗಳವರೆಗೆ ಇರುತ್ತದೆ.

ಗರ್ಭಾವಸ್ಥೆಯಲ್ಲಿ ಝಿಕಾ ಸೋಂಕು ಕಾಣಿಸಿಕೊಂಡಲ್ಲಿ ಜನಿಸಿದ ಶಿಶುವಿನ ತಲೆಯ ಗಾತ್ರದಲ್ಲಿ ಕಡಿಮೆ(ಮೈಕ್ರೊಸೆಫಾಲಿ) ಬೆಳವಣಿಗೆ ದೋಷ ಕಂಡುಬರಬಹುದು.

ಝಿಕಾ ವೈರಸ್ ಪತ್ತೆ ಹಚ್ಚುವ ವಿಧಾನ : ರೋಗ ಲಕ್ಷಣಗಳು ಕಂಡು ಬಂದವರ ರಕ್ತದ ಮಾದರಿ ಹಾಗೂ ಮೂತ್ರದ ಮಾದರಿ ಸಂಗ್ರಹಿಸಿ ಪರೀಕ್ಷಿಸುವ ಮೂಲಕ ಪತ್ತೆ ಹಚ್ಚಬಹುದು ಎಂದು ಹೇಳಿದ್ದಾರೆ.

ಝಿಕಾ ವೈರಸ್ ಸೋಂಕು ದೃಢಪಟ್ಟಲ್ಲಿ ತೆಗೆದುಕೊಳ್ಳುವ ಕ್ರಮ :

•ಝಿಕಾ ವೈರಸ್ ಸೋಂಕಿಗೆ ನಿರ್ದಿಷ್ಟ ಚಿಕಿತ್ಸೆ ಹಾಗೂ ಲಸಿಕೆ ಲಭ್ಯವಿರುವುದಿಲ್ಲ.

•ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುವುದು. ಮನೆಯಲ್ಲಿಯೇ ಚಿಕಿತ್ಸೆ ಪಡೆಯಬಹುದು. ಸಾಕಷ್ಟು ವಿಶ್ರಾಂತಿ ಪಡೆಯುವುದು.

•ನಿರ್ಜಲೀಕರಣ ತಪ್ಪಿಸಲು ಹೆಚ್ಚು ನೀರಿನ ಅಂಶವುಳ್ಳ ಆಹಾರ ಪದಾರ್ಥಗಳನ್ನು ಬಳಸುವುದು.

•ರೋಗ ಲಕ್ಷಣಗಳಿಗೆ ಅನುಗುಣವಾಗಿ ವೈದ್ಯರ ಸಲಹೆಯಂತೆ ನೀಡುವ ಔಷಧಗಳನ್ನು ಸೇವಿಸಬೇಕು ಹಾಗೂ ರೋಗ ಲಕ್ಷಣಗಳು ಹೆಚ್ಚಾದರೆ ವೈದ್ಯಕೀಯ ಚಿಕಿತ್ಸೆ ಪಡೆಯಬೇಕು.

• ಝಿಕಾ ವೈರಸ್ ಸೋಂಕಿತರು ಬೇರೆಯವರಿಗೆ ರೋಗ ಹರಡದಂತೆ ತಡೆಯಲು ಸೊಳ್ಳೆ ಪರದೆಯನ್ನು ಬಳಸುವುದು.

ಝಿಕಾ ವೈರಸ್ ಸೋಂಕು ಬರದಂತೆ ತಡೆಯಲು ಮುಂಜಾಗ್ರತಾ ಕ್ರಮ :

1. ಸ್ವಚ್ಛ ನಿಂತ ನೀರು ಸೊಳ್ಳೆಗಳ ಉತ್ಪತ್ತಿ ತಾಣಗಳಾಗಿದ್ದು, ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಪಡಿಸುವುದು.

2. ಈ ಸೊಳ್ಳೆಗಳು ಸಾಮಾನ್ಯವಾಗಿ ಹಗಲು ಹೊತ್ತಿನಲ್ಲಿ ಕಚ್ಚುತ್ತವೆ. ಮನೆಯ ಒಳಾಂಗಣ ಹಾಗೂ ಹೊರಾಂಗಣವನ್ನು ಸ್ವಚ್ಛವಾಗಿಡುವುದು.

3. ನೀರು ಸಂಗ್ರಹಣಾ ಪರಿಕರಗಳನ್ನು ವಾರಕ್ಕೊಮ್ಮೆ ಸ್ವಚ್ಛಗೊಳಿಸುವುದು ಹಾಗೂ ಮುಚ್ಚಳದಿಂದ ಮುಚ್ಚುವುದು.

4. ನಮ್ಮ ಸುತ್ತ-ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಹಾಗೂ ನೀರು ನಿಲ್ಲದಂತೆ ಎಚ್ಚರವಹಿಸುವುದು.

5. ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸುವುದು. ಸೊಳ್ಳೆ ಪರದೆ, ಸೊಳ್ಳೆ ನಿರೋಧಕಗಳನ್ನು ಉಪಯೋಗಿಸುವುದು.

ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಗುಡದಪ್ಪ ಕಸಬಿ ಸಲಹೆ

ಶಿವಮೊಗ್ಗ ಜಿಲ್ಲೆಯಲ್ಲಿ ಯಾವುದೇ ಝಿಕಾ ವೈರಸ್ ಪ್ರಕರಣಗಳು ವರದಿಯಾಗಿರುವುದಿಲ್ಲ. ಸಾರ್ವಜನಿಕರು ಆತಂಕಪಡುವ ಅವಶ್ಯಕತೆಯಿಲ್ಲ. ಆದರೆ ಜಾಗೃತರಾಗಿರಬೇಕು. ಈ ಖಾಯಿಲೆಯು ಡೆಂಗೀ ಹರಡುವ ಈಡೀಸ್ ಈಜಿಪ್ಟೈ ಸೊಳ್ಳೆಗಳಿಂದ ಹರಡುವುದರಿಂದ ಸೊಳ್ಳೆಗಳ ನಿಯಂತ್ರಣದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಯೊಂದಿಗೆ ಸಹಕರಿಸಬೇಕು. ಝಿಕಾ ರೋಗಲಕ್ಷಣಗಳಾದ ಜ್ವರ, ತಲೆನೋವು, ಕಣ್ಣು ಕೆಂಪಾಗುವಿಕೆ, ಗಂಧೆಗಳು (ದದ್ದುಗಳು), ಕೀಲು ಮತ್ತು ಸ್ನಾಯುಗಳಲ್ಲಿ ನೋವು ಕಂಡುಬಂದರೆ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರ ಸಲಹೆ ಮತ್ತು ಚಿಕಿತ್ಸೆ ಪಡೆಯಬೇಕು. ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಝಿಕಾ ವೈರಸ್ ಪರೀಕ್ಷೆ ಹಾಗೂ ಚಿಕಿತ್ಸೆ ಸಂಪೂರ್ಣ ಉಚಿತವಾಗಿದ್ದು, ಜಿಕಾ ವೈರಸ್ ಸೋಂಕಿನ ಬಗ್ಗೆ ಭಯಬೇಡ. ಎಚ್ಚರವಿರಲಿ ಎಂದು ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಗುಡದಪ್ಪ ಕಸಬಿ ಸಲಹೆ ತಿಳಿಸಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *