ಸಮಸಮಾಜ ಕಟ್ಟಬಯಸಿದ ದಾರ್ಶನಿಕ ಅಂಬೇಡ್ಕರ್ : ಡಾ.ಮರುಳಸಿದ್ದ ಪಂಡಿತಾರಾಧ್ಯ ಶಿವಾಚಾರ್ಯ

ಶಿವಮೊಗ್ಗ,  ಫೆ. 11: ಸಮಾಜದ ಎಲ್ಲ ವರ್ಗಗಳು ಶೋಷಣೆಗಳಿಂದ ಮುಕ್ತವಾಗಿ ಬದುಕಲು ಅರಿವು ಅಗತ್ಯ. ದಾರ್ಶನಿಕರಾಗಿದ್ದ ಬುದ್ಧ-ಬಸವ-ಅಂಬೇಡ್ಕರ್ ಸಮಾಜದ ಸಮಸ್ಯೆಗಳನ್ನು ನಿವಾರಿಸಲು ಆತ್ಮದ ಅರಿವು  ದಿವ್ಯೌಷಧಿಯಾಗಿದೆಯೆಂದು ಸಾರಿದವರು. ಆ ಮೂಲಕ ಸಮಸಮಾಜವನ್ನು ಕಟ್ಟ ಬಯಸಿದವರು ಎಂದು ವೀರಾಪುರ ಹಿರೇಮಠದ ಡಾ.ಮರುಳಸಿದ್ಧ ಪಂಡಿತಾರಾಧ್ಯ ಶಿವಾಚಾರ್ಯರು ಅಭಿಪ್ರಾಯಪಟ್ಟರು. 

ಅವರು ಕುವೆಂಪು ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರ ಮತ್ತು ವಿಶ್ವವಿದ್ಯಾಲಯ ಕಾಲೇಜಿನ ಸಹಯೋಗದಲ್ಲಿ ಏರ್ಪಡಿಸಿದ್ದ “ಅಂಬೇಡ್ಕರ್ ಚಿಂತನ-ಮಂಥನ ವಿಶೇಷ ಉಪನ್ಯಾಸ ಮಾಲಿಕೆಯಲ್ಲಿ “ಬುದ್ಧ-ಬಸವ-ಅಂಬೇಡ್ಕರ್ ಕಟ್ಟ ಬಯಸಿದ ಸಮಾಜ’’ ಎಂಬ ವಿಷಯ ಕುರಿತು ವಿಶೇಷ ಉಪನ್ಯಾಸ ನೀಡಿದರು. 

ಬುದ್ಧ-ಬಸವ-ಅಂಬೇಡ್ಕರ್ ಅವರು ಜಾತಿ-ಧರ್ಮಗಳಿಂದ ಮೀರಿದ ಬೆಳಕುಗಳು. ಜಗತ್ತಿನ ಮಹಾನ್ ದಾರ್ಶನಿಕರು. ಶಿಕ್ಷಣ ಮತ್ತು ಸಂಸ್ಕಾರಗಳಿಂದ ವ್ಯಕ್ತಿ ಪರಿಪೂರ್ಣನಾಗುತ್ತಾನೆಂದು ಸಾರಿದವರು. ಸಮಸಮಾಜದ ನಿರ್ಮಾಣಕ್ಕಾಗಿ ಸಂಪೂರ್ಣ ಸಮರ್ಪಿಸಿಕೊಂಡವರು. ಅವರುಗಳ ಬದುಕು-ಚಿಂತನೆಗಳು ಸರ್ವಕಾಲಕ್ಕೂ ಅನುಕರಣೀಯ ಎಂದು ತಿಳಿಸಿದರು. 

ಕಾರ‍್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕುಲಪತಿ ಪ್ರೊ.ಬಿ.ಪಿ.ವೀರಭದ್ರಪ್ಪ, ಬುದ್ಧ-ಬಸವ-ಅಂಬೇಡ್ಕರ್ ಅವರು ಸಾಮರಸ್ಯಭರಿತ ಸಮಾಜದ ನಿರ್ಮಾಣಕ್ಕಾಗಿ ಹೋರಾಡಿದವರು. ಇವರುಗಳ ಚಿಂತನೆಗಳು ವ್ಯಕ್ತಿ-ಸಮಾಜದ ಅಂಕು ಡೊಂಕುಗಳನ್ನು ತಿದ್ದುವಂತಹವು. ಕುವೆಂಪು ವಿವಿಯಲ್ಲಿ ಬುದ್ಧ-ಬಸವ-ಅಂಬೇಡ್ಕರ್ ಅವರ ಚಿಂತನೆಗಳ ಕುರಿತ ಡಿಪ್ಲೋಮಾ ಪದವಿಯನ್ನು ಮುಂದಿನ ದಿನಗಳಲ್ಲಿ ಆರಂಭಿಸಲಾಗುವುದು ಎಂದರು. 

ಕನಕಶ್ರೀ ಪ್ರಶಸ್ತಿ ಪುರಸ್ಕೃತ ಜಾನಪದ ಗಾಯಕ ಯುಗಧರ್ಮರಾಮಣ್ಣ, ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ನೆಲ್ಲಿಕಟ್ಟೆ ಎಸ್.ಸಿದ್ದೇಶ್‌ ಮಾತನಾಡಿದರು.  ಪ್ರಾಂಶುಪಾಲ ಡಾ.ಎಚ್.ಎಂ.ಧರ್ಮೇಗೌಡ ಡಾ.ವಸಂತಕುಮಾರ್, ನಾಗರಾಜ್ ಜಿ. ಕಾಲೇಜಿನ ಅಧ್ಯಾಪಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. 

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →