'It is a tragedy that the educated people are increasingly becoming casteists' : CM Siddaramaiah ವಿದ್ಯಾವಂತರೇ ಹೆಚ್ಚೆಚ್ಚು ಜಾತಿವಾದಿಗಳಾಗುತ್ತಿರುವುದು ದುರಂತ : ಸಿಎಂ ಸಿದ್ದರಾಮಯ್ಯ

bengaluru | ‘ವಿದ್ಯಾವಂತರೇ ಹೆಚ್ಚೆಚ್ಚು ಜಾತಿವಾದಿಗಳಾಗುತ್ತಿರುವುದು ದುರಂತ’ : ಸಿಎಂ ಸಿದ್ದರಾಮಯ್ಯ 

ಬೆಂಗಳೂರು (bengaluru), ಆ. 24: ಧರ್ಮ-ಜಾತಿ ಹೆಸರಲ್ಲಿ ಸಮಾಜವನ್ನು ಒಡೆಯುತ್ತಾ ಹೋದಂತೆ ಅಸಮಾನತೆ ಹೆಚ್ಚುತ್ತದೆ ಎಂದು ಸಿ.ಎಂ.ಸಿದ್ದರಾಮಯ್ಯ (cm siddaramaiah) ನುಡಿದರು. 

ಗಾಂಧಿ ಸ್ಮಾರಕ ನಿಧಿಯ 75 ನೇ ವರ್ಷದ ಸಂಸ್ಮರಣೆಗಾಗಿ ಗಾಂಧಿ ಭವನದಲ್ಲಿ ಇಂದು ಆಯೋಜಿಸಲಾಗಿದ್ದ “21ನೇ ಶತಮಾನಕ್ಕೆ ಮಹಾತ್ಮಗಾಂಧೀಜಿ” ಅಂತಾರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.

ಜಾತಿ ವ್ಯವಸ್ಥೆ ಕಾರಣದಿಂದ ಬಹು ಜನರು ಶಿಕ್ಷಣದಿಂದ ವಂಚಿತರಾದರು. ಈ ಕಾರಣಕ್ಕೆ ಅಸಮಾನತೆ ಹೆಚ್ಚಾಯ್ತು. ವಿದ್ಯಾವಂತರೇ ಹೆಚ್ಚೆಚ್ಚು ಜಾತಿವಾದಿಗಳಾಗುತ್ತಿರುವುದು ದುರಂತ. ಜಾತಿ ಅಸಮಾನತೆಯ ಪೋಷಕರೇ ಮಹಾತ್ಮಗಾಂಧಿಯವರನ್ನು ಕೊಂದರು ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಗಾಂಧೀಜಿ (mahatma gandhi) ವಿಚಾರಗಳು, ಸಮಾಜಕ್ಕೆ ನೀಡಿದ ಮಾರ್ಗದರ್ಶನಗಳು 20ನೇ ಶತಮನಕ್ಕೆ ಮಾತ್ರ ಸೀಮಿತವಾಗಿಲ್ಲ. ಈಗಿನ ಕಾಲಕ್ಕೂ ಪ್ರಸ್ತುತವಾಗಿವೆ.‌ ಗಾಂಧೀಜಿಯವರು ಶಾಂತಿ, ಸತ್ಯ, ನ್ಯಾಯ ಮತ್ತು ಬ್ರಾತೃತ್ವವನ್ನು ಬದುಕಿನುದ್ದಕ್ಕೂ ಆಚರಿಸಿಕೊಂಡು ಬಂದಿದ್ದಾರೆ. ಇಡೀ ವಿಶ್ವವೇ ಪರಸ್ಪರ ಪ್ರೀತಿಸುವ ಗುಣವನ್ನು ರೂಢಿಸಿಕೊಂಡರೆ ಇಡೀ ಸಮಾಜ ನೆಮ್ಮದಿಯಿಂದ ಇರಬಹುದು ಎಂದರು. 

ಮನುಷ್ಯ ತನ್ನ ನೆಮ್ಮದಿಗಾಗಿ ಬೇರೆ ಗ್ರಹಗಳನ್ನು ಹುಡುಕಿಕೊಂಡು ಹೋಗುವಂತಾಗಬಾರದು ಎನ್ನುವ ಸ್ಟೀಫನ್ ಹಾಕಿಂಗ್ (stephen hawking) ಅವರ ಮಾತನ್ನು ಪ್ರಸ್ತಾಪಿಸಿ, ಮನುಷ್ಯ ಮನುಷ್ಯರ ನಡುವೆ ಸಹಿಷ್ಣುತೆ ರೂಢಿಸಿಕೊಳ್ಳದಿದ್ದರೆ ಸರ್ವನಾಶವಾಗುತ್ತದೆ. ಕೋಮು ಭಾವನೆ ಹೀಗೇ ಬೆಳೆದರೆ ಕವೆಂಪು ಅವರ ವಿಶ್ವ ಮಾನವ ಆಶಯ ಈಡೇರುವುದು ಕಷ್ಟವಾಗುತ್ತದೆ ಎಂದರು. 

ಪ್ರಕೃತಿ ನಮ್ಮ ಅಗತ್ಯಗಳನ್ನು ಈಡೇರಿಸುತ್ತದೆಯೇ ಹೊರತು, ದುರಾಸೆಗಳನ್ನು ಅದು ಪೂರೈಸುವುದಿಲ್ಲ ಎನ್ನುವುದು ಗಾಂಧಿಯವರ ನಂಬಿಕೆಯಾಗಿತ್ತು. ಕೇರಳದ ವಯನಾಡ್ ಮತ್ತು ರಾಜ್ಯದ ನಾನಾ ಕಡೆ ನಡೆಯುತ್ತಿರುವ ಪರಿಸರ ಅವಘಡಗಳಿಗೆ ಮನುಷ್ಯನ ದುರಾಸೆಗಳೇ ಕಾರಣವಾಗಿದೆ ಎಂದರು.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದರೆ ಅವರ ಕಾಲಗುಣದಿಂದ ರಾಜ್ಯಕ್ಕೆ ಬರಗಾಲ ಬರುತ್ತದೆ ಎಂದು ಸಾರ್ವಜನಿಕ ವ್ಯಕ್ತಿಗಳೇ ಮೌಡ್ಯ ಬಿತ್ತುವ ಕುಟಿಲ ಪ್ರಯತ್ನ ಮಾಡಿದ್ದರು. ಆದರೆ ಈಗ ಸಿಕ್ಕಾಪಟ್ಟೆ ಮಳೆ ಬರುತ್ತಿದೆ. ಬಹಳ ಮಂದಿ ಶಿಕ್ಷಿತರೇ ಕಂದಾಚಾರ, ಕರ್ಮ ಸಿದ್ಧಾಂತ, ಮೌಡ್ಯವನ್ನು ಆಚರಿಸುತ್ತಾರೆ. ಇದಕ್ಕೆ ಸರಿಯಾದ ವೈಜ್ಞಾನಿಕ ಶಿಕ್ಷಣದ ಕೊರತೆಯೇ ಕಾರಣ. 850 ವರ್ಷಗಳ ಹಿಂದೆಯೇ ಬಸವಾದಿ ಶರಣರು ಕರ್ಮ ಸಿದ್ಧಾಂತವನ್ನು ಸಾರಾಸಗಟಾಗಿ ತಿರಸ್ಕರಿಸಿದ್ದರು. ಆದರೆ ಈಗಿನ ಕೆಲವು ಶಿಕ್ಷಿತರೇ ಕರ್ಮ ಸಿದ್ಧಾಂತದಲ್ಲಿ ನಂಬಿಕೆ ಇಟ್ಟಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. 

ನೆಹರೂ (nehru) ಅವರು ವೈಜ್ಞಾನಿಕ ಮತ್ತು ವೈಚಾರಿಕ ಮಾರ್ಗದಲ್ಲಿ ಸಮಾಜವನ್ನು ಸನ್ನದ್ದಗೊಳಿಸಿ ದೇಶವನ್ನು ಮುನ್ನಡೆಸುತ್ತಿದ್ದರು. ಸರ್ವರನ್ನೂ ಒಳಗೊಳ್ಳುವ ಮತ್ತು ಅಹಿಂಸೆ ಗಾಂಧಿಯವರ ಮಾರ್ಗವಾಗಿತ್ತು. ಇದನ್ನು ಯುವಜನರಿಗೆ ತಲುಪಿಸುವ ಕೆಲಸ ಆಗಬೇಕಿದೆ. 

ದೇಶದ ಶೇ85 ರಷ್ಟು ಆಸ್ತಿ ಶೇ1 ಶ್ರೀಮಂತರ ಕೈಗೆ ಸೇರುತ್ತಿದೆ. ಇದು ಅಪಾಯಕಾರಿ. ಈ ಆರ್ಥಿಕ ಅಸಮಾನತೆ ಹೋಗಲಾಡಿಸಲು ಗಾಂಧಿಯವರು ವಿಚಾರಗಳಲ್ಲಿ ಮಾರ್ಗಗಳಿವೆ. ಮಹಾತ್ಮಗಾಂಧಿಯವರು‌ ಅಧ್ಯಕ್ಷತೆ ವಹಿಸಿದ್ದ ಕಾಂಗ್ರೆಸ್ ನ ಬೆಳಗಾವಿ ಅಧಿವೇಶನದ ಶತಮಾನೋತ್ಸವವನ್ನು ಹೆಚ್ಚು ಅರ್ಥಪೂರ್ಣವಾಗಿ ಆಚರಿಸುತ್ತೇವೆ ಎಂದರು. 

ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷರಾದ ರಾಮಚಂದ್ರ ರಾಹಿ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಕಾನೂನು ಸಚಿವರಾದ ಹೆಚ್.ಕೆ.ಪಾಟೀಲ್, ಕಾರ್ಯಾಧ್ಯಕ್ಷರಾದ ವಿಶುಕುಮಾರ್ , ನವದೆಹಲಿ ಸ್ಮಾರಕ ನಿಧಿ ಅಧ್ಯಕ್ಷರಾದ ಸಂಜೋಯ್ ಸಿಂಗ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

hosanagara | The tragic death of a woman who was bitten by a dog! ನಾಯಿ ಕಡಿತಕ್ಕೊಳಗಾಗಿದ್ದ ಮಹಿಳೆಯ ದುರಂತ ಸಾವು Previous post hosanagara | ಬೀದಿ ನಾಯಿ ಕಡಿತ : ಮಹಿಳೆಯ ದುರಂತ ಸಾವು!
bhadravati | ಭದ್ರಾವತಿ - ಸೈಬರ್ ವಂಚನೆಗೆ ಮನನೊಂದು ಆತ್ಮಹತ್ಯೆಗೆ ಶರಣಾದ! bhadravati | Bhadravati - committed suicide due to cyber fraud! Next post bhadravati | ಭದ್ರಾವತಿ – ಸೈಬರ್ ವಂಚನೆಗೆ ಮನನೊಂದು ಆತ್ಮಹತ್ಯೆಗೆ ಶರಣಾದ ಯುವಕ!