ಶಿವಮೊಗ್ಗ, ಮಾ. 15: ಪಾರ್ಕ್ ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಪೊಲೀಸರು ಓರ್ವನನ್ನು ಬಂಧಿಸಿದ ಘಟನೆ, ಶಿವಮೊಗ್ಗ ನಗರದ ಗುಂಡಪ್ಪ ಶೆಡ್ ನ ಮಲ್ಲೇಶ್ವರ ನಗರದ ಸಾರ್ವಜನಿಕ ಉದ್ಯಾನವನದಲ್ಲಿ ಮಾ. 14 ರಂದು ನಡೆದಿದೆ.
ರಾಜೀವ್ ಗಾಂಧಿ ಬಡಾವಣೆ ನಿವಾಸಿ ಮೊಹಮ್ಮದ್ ಹುಸೇನ್ ಯಾನೆ ಅಶು (23) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಈತನಿಂದ 5 ಸಾವಿರ ರೂ. ಮೌಲ್ಯದ 204 ಗ್ರಾಂ ತೂಕದ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಆರೋಪಿಯು ಪಾರ್ಕ್ ನಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಕುರಿತಂತೆ, ಲಭ್ಯವಾದ ಖಚಿತ ವರ್ತಮಾನದ ಮೇರೆಗೆ ಸಬ್ ಇನ್ಸ್‌ಪೆಕ್ಟರ್ ಸಿ.ಆರ್.ಕೊಪ್ಪದ್ ನೇತೃತ್ವದ ಪೊಲೀಸ್ ತಂಡ ಕಾರ್ಯಾಚರಣೆ ನಡೆಸಿದೆ. ಆರೋಪಿ ವಿರುದ್ದ ಎನ್.ಡಿ.ಪಿ.ಎಸ್. ಕಾಯ್ದೆಯಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

